ಮೈಸೂರು: ರಾಜ್ಯ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡುವ ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ. ಮಹತ್ವಾಕಾಂಕ್ಷಿ ಯೋಜನೆಯ ಉದ್ಘಾಟನೆಗೆ ಸಾಕ್ಷಿಯಾಗಲು ವಿವಿಧ ಜಿಲ್ಲೆಗಳಿಂದ ಸಾವಿರಾರು ಮಹಿಳೆಯರು ಬರುತ್ತಿದ್ದಾರೆ.
ಇಲ್ಲಿನ ಮಹಾರಾಜ ಕಾಲೇಜು ಮೈದಾನದಲ್ಲಿ ಹಾಕಿರುವ ಬೃಹತ್ ವೇದಿಕೆಯಲ್ಲಿ ಸಮಾರಂಭ ನಡೆಯುತ್ತಿದ್ದು, ಕುಟುಂಬದ ಯಜಮಾನಿಯ ಖಾತೆಗೆ ನೇರವಾಗಿ ₹2 ಸಾವಿರ ಜಮಾ ಮಾಡಲಾಗುತ್ತದೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಮ್ಮುಖದಲ್ಲಿ ಚಾಲನೆ ದೊರೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಹಾಗು ಸಚಿವ ಸಂಪುಟದ ಸಹೋದ್ಯೋಗಿಗಳು ಭಾಗವಹಿಸಲಿದ್ದಾರೆ.
ಒಟ್ಟು 1.30 ಕೋಟಿ ಫಲಾನುಭವಿಗಳು ಯೋಜನೆಯ ಲಾಭ ಪಡೆಯಲಿದ್ದಾರೆ. ಸದ್ಯಕ್ಕೆ 1.10 ಕೋಟಿ ಮಹಿಳೆಯರು ನೋಂದಣಿ ಮಾಡಿಕೊಂಡಿದ್ದಾರೆ ಎಂದು ಸರ್ಕಾರ ತಿಳಿಸಿದೆ.
ಕಾರ್ಯಕ್ರಮದ ನೇರ ಪ್ರಸಾರಕ್ಕೆ ಜಿಲ್ಲಾ, ತಾಲ್ಲೂಕು ಹಾಗೂ ಪಂಚಾಯಿತಿಗಳ ಮಟ್ಟದಲ್ಲಿ ವ್ಯವಸ್ಥೆ ಮಾಡಲಾಗಿದೆ. ಮಹಾರಾಜ ಕಾಲೇಜು ಮೈದಾನದಲ್ಲಿ ವೇದಿಕೆಯಷ್ಟೂ ಅಗಲದ ಎಲ್‌ಇಡಿ ಪರದೆ ವ್ಯವಸ್ಥೆ ಮಾಡಲಾಗಿದೆ. ರಾಹುಲ್ ಗಾಂಧಿ ಅವರು ಫಲಾನುಭವಿಗಳೊಂದಿಗೆ ಸಂವಾದ ನಡೆಸಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.