ಹುಬ್ಬಳ್ಳಿ: 'ಬಿಜೆಪಿ ಮುಖಂಡರು ಕಾಂಗ್ರೆಸ್ ನಾಯಕರಿಗೆ ಆಮಿಷವೊಡ್ಡಿ, ಆಪರೇಷನ್ ಕಮಲದಂಥ ನೀಚ ಕೆಲಸಕ್ಕೆ ಕೈ ಹಾಕಿದ್ದಾರೆ. ಆಪರೇಷನ್ ಕಮಲ ಮಾಡಿದ್ದೇ ಆದರೆ, ಬಿಜೆಪಿ ಅಂತ್ಯ ಕಾಣಲಿದೆ' ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ ಹೇಳಿದರು.
ಭಾನುವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 'ಆಪರೇಷನ್ ಕಮಲದಂಥ ಕೆಲಸ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿದೆ. ಈಗಾಗಲೇ, ರಾಜ್ಯದಲ್ಲಿ ಬಿಜೆಪಿ ನಾಯಕರಿಗೆ ಜನರು ಬುದ್ಧಿ ಕಲಿಸಿದ್ದಾರೆ. ರಾಷ್ಟ್ರ ಮಟ್ಟದಲ್ಲಿ ಅವರ ಪ್ರಭಾವ ಸಹ ಕಡಿಮೆಯಾಗಿದೆ. ಹೀಗಿದ್ದಾಗಲೂ ಆಪರೇಷನ್ ಕಮಲಕ್ಕೆ ಮುಂದಾಗಿದ್ದಾರೆ ಎಂದರೆ, ಲೋಕಸಭೆ ಚುನಾವಣೆಯಲ್ಲಿ ಮತ್ತೆ ಜನರು ಪಾಠ ಕಲಿಸಲಿದ್ದಾರೆ' ಎಂದರು.
'ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಆಗುವ ವಿಚಾರ ಹೈಕಮಾಂಡ್‌ಗೆ ಬಿಟ್ಟಿದ್ದು. ಮಾಧ್ಯಮಗಳಲ್ಲಿ ಚರ್ಚೆ ಮಾಡುವ ವಿಚಾರ ಇದಲ್ಲ. ಪಕ್ಷದ ವೇದಿಕೆಯಲ್ಲಿ ಚರ್ಚೆಯಾಗಬೇಕು' ಎಂದು ಹೇಳಿದರು.
'ಹುಲಿ ಉಗುರು ಧರಿಸುವುದು ಕಾನೂನು ಪ್ರಕಾರ ಅಪರಾಧ. ಈ ಕುರಿತು ಅಧಿಕಾರಿಗಳು ಜಾಗೃತಿಯಿಂದ ಕಾರ್ಯನಿರ್ವಹಿಸಬೇಕು. ಈ ಕುರಿತು ಕೆಲವು ಸಚಿವರು ಕಾನೂನು ಬದಲಾವಣೆಗೆ ಸೂಚಿಸಿದ್ದಾರೆ. ಆದರೆ, ಎಲ್ಲರಿಗೂ ಕಾನೂನು ಒಂದೇ ಆಗಿದ್ದು, ಅದರ ಪ್ರಕಾರ ನಡೆದುಕೊಳ್ಳಬೇಕು' ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.