ತುಮಕೂರು: ದೇಶದಲ್ಲಿ ದ್ವೇಷ ಹರಡುವ ಕೆಲಸ ನಡೆಯುತ್ತಿದ್ದು, ಅದನ್ನು ಶೀಘ್ರ ತಡೆಯುವ ಪ್ರಯತ್ನ ಮಾಡಬೇಕಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದರು.
ಸಿದ್ಧಗಂಗಾ ಮಠದಲ್ಲಿ ಶುಕ್ರವಾರ ಶಿವಕುಮಾರ ಸ್ವಾಮೀಜಿ ಜಯಂತ್ಯುತ್ಸವ ನೆರವೇರಲಿದ್ದು, ಅದಕ್ಕೂ ಮುನ್ನಾ ದಿನ ಗುರುವಾರ ಸಂಜೆ ಮಠಕ್ಕೆ ಭೇಟಿ ನೀಡಿದ್ದರು. ಮಕ್ಕಳ ಜತೆ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸಿದ ನಂತರ ಮಾತನಾಡಿದರು.
‘ಬಸವಣ್ಣನ ಸಂದೇಶವನ್ನು ಜಗತ್ತಿಗೆ ತಿಳಿಸುವ ಪ್ರಯತ್ನದಲ್ಲಿ ಮಠ, ಸ್ವಾಮೀಜಿ ಸಾಗಿದ್ದಾರೆ. ಹಿಂದೆ ಮಠಕ್ಕೆ ಬಂದಿದ್ದಾಗ ಶಿವಕುಮಾರ ಸ್ವಾಮೀಜಿಯನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡಿದ್ದೆ. ಅವರು ನಮಗೆಲ್ಲ ಮಾರ್ಗದರ್ಶಕರಾಗಿದ್ದರು. ತ್ರಿವಿಧ ದಾಸೋಹದ ಮೂಲಕ ನಾಡಿಗೆ ಮಾದರಿ ಸಂದೇಶ ನೀಡಿದ್ದಾರೆ. ಅವರ ದಾರಿಯಲ್ಲಿ ನಾವೆಲ್ಲ ಸಾಗಬೇಕಿದೆ. ಆದರೆ ಈಗ ಅವರಿಲ್ಲ ಎಂಬುದು ದುಃಖದ ಸಂಗತಿ’ ಎಂದು ತಿಳಿಸಿದರು.
ಮಠ ಹಾಗೂ ತಮ್ಮ ಕುಟುಂಬದ ಸಂಬಂಧವನ್ನು ನೆನಪಿಸಿಕೊಂಡ ರಾಹುಲ್, ಅಜ್ಜಿ ಇಂದಿರಾ ಗಾಂಧಿ, ತಂದೆ ರಾಜೀವ್ ಗಾಂಧಿ, ತಾಯಿ ಸೋನಿಯಾ ಗಾಂಧಿ ಮಠಕ್ಕೆ ಭೇಟಿಕೊಟ್ಟಿದ್ದಾರೆ. ಹಿಂದಿನಿಂದಲೂ ಮಠದ ಜತೆಗೆ ತಮ್ಮ ಕುಟುಂಬ ಅವಿನಾಭಾವ ಸಂಬಂಧ ಹೊಂದಿದೆ. ಮುಂದಿನ ದಿನಗಳಲ್ಲೂ ಇದೇ ಸಂಬಂಧ ಮುಂದುವರಿಯಲಿದೆ. ಮಠಕ್ಕೆ ಬೇಕಾದ ಅಗತ್ಯ ನೆರವನ್ನು ನೀಡಲಾಗುವುದು ಎಂದು ಹೇಳಿದರು.
ಕೆಪಿಸಿಸಿ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಮುಖಂಡರಾದ ಡಾ.ಜಿ.ಪರಮೇಶ್ವರ, ಎಂ.ಬಿ.ಪಾಟೀಲ, ಬಿ.ಕೆ.ಹರಿಪ್ರಸಾದ್, ಪ್ರಿಯಾಂಕ್ ಖರ್ಗೆ ಇತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.