ಬೆಂಗಳೂರು: ಸರ್ಕಾರದ ಅನುದಾನದಲ್ಲಿ ನಿರ್ಮಿಸಲಾದ ಸರ್ಕಾರಿ ಕಟ್ಟಡ ಹಾಗೂ ಇನ್ನಿತರ ಸ್ಥಳಗಳಿಗೆ ಜೀವಂತ ರಾಜಕಾರಣಿಗಳ ನಾಮಕರಣ ಮಾಡುವುದನ್ನು ಆಕ್ಷೇಪಿಸಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಹಾಗೂ ಶಾಸಕ ಶಾಮನೂರು ಶಿವಶಂಕರಪ್ಪ ಅವರಿಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.
ಈ ಸಂಬಂಧ ದಾವಣಗೆರೆ ಹೊಂಡದ ರಸ್ತೆ ನಿವಾಸಿ ವಕೀಲ ಎ.ಸಿ.ರಾಘವೇಂದ್ರ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಎಂ.ವಿನೋದ್ ಕುಮಾರ್, ‘ದಾವಣಗೆರೆ ನಗರದ ವಿವಿಧೆಡೆ ಸರ್ಕಾರದ ಅನುದಾನದಲ್ಲಿ ನಿರ್ಮಿಸಲಾದ ಅನೇಕ ಕಟ್ಟಡಗಳು, ಪಾರ್ಕ್, ಬಸ್ ನಿಲ್ದಾಣ, ರಸ್ತೆಗಳಿಗೆ ಶಾಮನೂರು ಶಿವಶಂಕರಪ್ಪ ಹಾಗೂ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅವರ ಹೆಸರಗಳನ್ನು ಇರಿಸಲಾಗಿದ್ದು ಇದನ್ನು ತೆರವುಗೊಳಿಸಲು ನಿರ್ದೇಶಿಸಬೇಕು’ ಎಂದು ಕೋರಿದರು.
‘ಚನ್ನಗಿರಿ ಕ್ಷೇತ್ರದ ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಹೆಸರನ್ನು ತಾಲ್ಲೂಕು ಕ್ರೀಡಾಂಗಣಕ್ಕೆ ಇರಿಸಿದ್ದನ್ನು ಆಕ್ಷೇಪಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಹೈಕೋರ್ಟ್ 2012ರಲ್ಲಿ ಆದೇಶ ನೀಡಿದ್ದು, ಮಾಡಾಳ್ ವಿರೂಪಾಕ್ಷಪ್ಪ ಆಟದ ಮೈದಾನ ಎಂಬುದರ ಬದಲಿಗೆ ತಾಲ್ಲೂಕು ಆಟದ ಮೈದಾನ ಎಂದು ನಾಮಕರಣ ಮಾಡಲಾಗಿತ್ತು’ ಎಂಬ ಅಂಶವನ್ನು ನ್ಯಾಯಪೀಠದ ಗಮನಕ್ಕೆ ತಂದರು.
ವಾದ ಆಲಿಸಿದ ನ್ಯಾಯಪೀಠ, ರಾಜ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿ, ದಾವಣಗೆರೆ ಜಿಲ್ಲಾಧಿಕಾರಿ, ಮಹಾನಗರ ಪಾಲಿಕೆ ಆಯುಕ್ತ, ಜಿಲ್ಲಾ ಪಂಚಾಯ್ತಿ ಸಿಇಒ ಸೇರಿದಂತೆ ಪ್ರಕರಣದ ಎಲ್ಲ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ ವಿಚಾರಣೆ ಮುಂದೂಡಿತು.
ಅರ್ಜಿಯಲ್ಲಿ ಏನಿದೆ?’
ದಾವಣಗೆರೆ ಪೂನಾ-ಬೆಂಗಳೂರು ರಸ್ತೆಯಲ್ಲಿ ನಿರ್ಮಿಸಲಾಗಿರುವ ಹಳೆಯ ಬಸ್ ನಿಲ್ದಾಣಕ್ಕೆ ‘ಶಾಮನೂರು ಶಿವಶಂಕರಪ್ಪ ಬಸ್ ಸ್ಟ್ಯಾಂಡ್’ ಎಂದು ಹೆಸರಿಡಲಾಗಿದೆ. ದಾವಣಗೆರೆ ನಗರದ ಕುಡಿಯುವ ನೀರಿಗಾಗಿ ಬಳಸಲಾಗುತ್ತಿರುವ ಮತ್ತು ದಾವಣಗೆರೆ ಮಹಾನಗರ ಪಾಲಿಕೆ ವತಿಯಿಂದ ನಿರ್ಮಿಸಿ ನಿರ್ವಹಿಸಲಾಗುತ್ತಿರುವ ಕುಂದವಾಡ ಕೆರೆಯ ಹೆಸರನ್ನು ‘ಎಸ್.ಎಸ್.ಮಲ್ಲಿಕಾರ್ಜುನ ಸಾಗರ‘ ಎಂದು ಇರಿಸಲಾಗಿದೆ. ಜಿಲ್ಲಾ ಪಂಚಾಯ್ತಿ ಸಭಾಂಗಣಕ್ಕೆ ‘ಎಸ್.ಎಸ್. ಮಲ್ಲಿಕಾರ್ಜುನ ಸಭಾಂಗಣ’ ಎಂದು ಹೆಸರಿಡಲಾಗಿದೆ. ಮಹಾನಗರ ಪಾಲಿಕೆಯ ಸಭಾಂಗಣಕ್ಕೆ ‘ಡಾ. ಶಾಮನೂರು ಶಿವಶಂಕರಪ್ಪ ಸಭಾಂಗಣ’ ಎಂದು ನಾಮಕರಣ ಮಾಡಲಾಗಿದೆ. ನಗರದಲ್ಲಿನ ಪ್ರಮುಖ ಪಾರ್ಕ್‌ವೊಂದಕ್ಕೆ ‘ಡಾ.ಶಾಮನೂರು ಶಿವಶಂಕರಪ್ಪ ಉದ್ಯಾನವನ’ ಎಂದು ಹೆಸರಿಡಲಾಗಿದೆ. ಹುಡ್ಕೊ ಬಡಾವಣೆಗೆ ‘ಎಸ್‌ಎಸ್‌ಎಂ ನಗರ’ (ಡಾ. ಶಾಮನೂರು ಶಿವಶಂಕರಪ್ಪ ನಗರ) ಎಂದು ಹೆಸರಿಡಲಾಗಿದೆ. ಈ ನಾಮಾಂಕಿತಗಳು ಹೈಕೋರ್ಟ್ ಆದೇಶಕ್ಕೆ ವಿರುದ್ಧವಾಗಿವೆ ಎಂದು ಅರ್ಜಿಯಲ್ಲಿ ದೂರಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.