ADVERTISEMENT

ನಾಡಗೀತೆ ತಿರುಚಿದ್ದ ಚಕ್ರತೀರ್ಥಗೆ ಪಠ್ಯ ಪರಿಷ್ಕರಣೆ ವಹಿಸಿದ್ದೇ ತಪ್ಪು: ಎಚ್‌ಡಿಡಿ

ಪರಿಷ್ಕೃತ ಪಠ್ಯಪುಸ್ತಕ ಕೈಬಿಡಿ: ದೇವೇಗೌಡ ಆಗ್ರಹ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 21 ಜೂನ್ 2022, 15:38 IST
Last Updated 21 ಜೂನ್ 2022, 15:38 IST
ಎಚ್.ಡಿ.ದೇವೇಗೌಡ
ಎಚ್.ಡಿ.ದೇವೇಗೌಡ   

ಬೆಂಗಳೂರು: ‘ನಾಡಗೀತೆಯನ್ನು ತಿರುಚಿ ಅವಮಾನ ಮಾಡಿದ್ದ ರೋಹಿತ್‌ ಚಕ್ರತೀರ್ಥ ಅವರನ್ನು ಪಠ್ಯ ಪರಿಷ್ಕರಣೆಗೆ ನೇಮಿಸಿದ್ದೇ ತಪ್ಪು. ಈ ಸಮಿತಿ ಸಿದ್ಧಪಡಿಸಿರುವ ಪರಿಷ್ಕೃತ ಪಠ್ಯಪುಸ್ತಕಗಳನ್ನು ಹಿಂಪಡೆಯಬೇಕು’ ಎಂದು ಆಗ್ರಹಿಸಿ ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ.

ಪರಿಷ್ಕೃತ ಪಠ್ಯಪುಸ್ತಕಗಳನ್ನು ವಿರೋಧಿಸಿ ವಿಶ್ವಮಾನವ ಕ್ರಾಂತಿಕಾರಿ ಮಹಾಕವಿ ಕುವೆಂಪು ಹೋರಾಟ ಸಮಿತಿ ನೇತೃತ್ವದಲ್ಲಿ ಶನಿವಾರ ನಡೆದ ಪ್ರತಿಭಟನಾ ಸಭೆಯ ಹಕ್ಕೊತ್ತಾಯದ ನಿರ್ಣಯದೊಂದಿಗೆ ಮುಖ್ಯಮಂತ್ರಿಯವರಿಗೆ ಸೋಮವಾರ ಪತ್ರ ಬರೆದಿರುವ ಅವರು, ‘ಪ್ರೊ.ಬರಗೂರು ರಾಮಚಂದ್ರಪ್ಪ ನೇತೃತ್ವದ 27 ಸಮಿತಿಗಳು ರೂಪಿಸಿರುವ ಹಳೆಯ ಪಠ್ಯಪುಸ್ತಕಗಳನ್ನೇ ಈ ವರ್ಷವೂ ಮುಂದುವರಿಸುವುದು ಸೂಕ್ತ ಎಂಬುದು ನನ್ನ ಅಭಿಪ್ರಾಯ’ ಎಂದು ತಿಳಿಸಿದ್ದಾರೆ.

‘ಪಠ್ಯಪುಸ್ತಕಗಳಲ್ಲಿನ ಅಸಂಖ್ಯಾತ ದೋಷ ಮತ್ತು ಅನ್ಯಾಯಗಳನ್ನು ಕೇವಲ ತಪ್ಪೋಲೆ ಅಥವಾ ಪ್ರತ್ಯೇಕ ಪುಟಗಳ ಮುದ್ರಣದಿಂದ ಸರಿಪಡಿಸಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಹಳೆಯ ಪಠ್ಯಪುಸ್ತಕಗಳನ್ನೇ ಮುಂದುವರಿಸಿ’ ಎಂದೂ ಒತ್ತಾಯಿಸಿದ್ದಾರೆ.

ADVERTISEMENT

‘ಪಠ್ಯಪುಸ್ತಕಗಳ ಮರು ಪರಿಷ್ಕರಣೆಗೆ ನೇಮಿಸಿದ ಸಮಿತಿಯ ಅಧ್ಯಕ್ಷರು ರಾಷ್ಟ್ರಕವಿ ಕುವೆಂಪು ವಿರಚಿತ ನಾಡಗೀತೆಗೆ ಅವಮಾನ ಮಾಡಿರುತ್ತಾರೆ. ನಾಡಗೀತೆಯನ್ನು ಅಸಭ್ಯವಾಗಿ ತಿರುಚಿದವರಿಗೆ ಬಹುಮಾನ ನೀಡುತ್ತೇನೆ ಎಂದು ಹೇಳಿದ್ದು ಕೂಡ ಕುವೆಂಪು ಅವರಿಗೆ ಮಾಡಿದ ದೊಡ್ಡ ಅವಮಾನವೇ ಆಗಿದೆ. ನಾಡ ಧ್ವಜವನ್ನು ಒಳ ಉಡುಪಿಗೆ ಹೋಲಿಸಿದ್ದೂ ನಾಡ ಅಸ್ಮಿತೆಗೆ ಮಾಡಿದ ಅವಮಾನವಾಗಿದೆ. ಜತೆಗೆ ಡಾ.ಬಿ.ಆರ್‌. ಅಂಬೇಡ್ಕರ್‌ ಅವರನ್ನೂ ಹಂಗಿಸಿದ್ದಾರೆ. ಇಂಥ ವ್ಯಕ್ತಿಯ ಅಧ್ಯಕ್ಷತೆಯಲ್ಲಿ ಪಠ್ಯಪುಸ್ತಕ ಪರಿಷ್ಕರಣೆ ಮಾಡಲು ಸರ್ಕಾರ ನಿರ್ಧರಿಸಿದ್ದು ಮೊದಲ ತಪ್ಪು’ ಎಂದು ಹೇಳಿದ್ದಾರೆ.

‘ಪಠ್ಯಪುಸ್ತಕಗಳ ಪರಿಷ್ಕರಣೆಯಲ್ಲಿ ಅಸಂಖ್ಯಾತ ತಪ್ಪುಗಳಾಗಿವೆ. ಸಮಾಜ ವಿಜ್ಞಾನ ಪಠ್ಯಪುಸ್ತಕದ ಏಕೀಕರಣ ಪಾಠದಿಂದ ಕುವೆಂಪು ಅವರ ಭಾವಚಿತ್ರವನ್ನು ತೆಗೆದು ಹಾಕಲಾಗಿದೆ. ಬಸವಣ್ಣನವರ ಚಳವಳಿಯ ಆಶಯವುಳ್ಳ ಭಾಗಗಳನ್ನು ಕೈಬಿಡಲಾಗಿದೆ. ಸಿದ್ಧಗಂಗೆ ಮತ್ತು ಆದಿಚುಂಚನಗಿರಿ ಶ್ರೀಗಳ ಸೇವೆಯ ವಿವರಗಳನ್ನು ತೆಗೆಯಲಾಗಿದೆ. ಅಂಬೇಡ್ಕರ್‌ ಅವರಿಗೆ ‘ಸಂವಿಧಾನ ಶಿಲ್ಪಿ’ ಎಂದಿದ್ದ ವಿಶೇಷಣವನ್ನು ತೆಗೆಯಲಾಗಿದೆ’ ಎಂದು ದೇವೇಗೌಡ ಪತ್ರದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

‘ಅಕ್ಕ, ಕನಕ, ಪುರಂದರ, ಷರೀಫರಂತಹ ಮಹಾನ್‌ ದಾರ್ಶನಿಕ ಸಂತರ ಪಠ್ಯಗಳನ್ನೇ ತೆಗೆಯಲಾಗಿದೆ. ಕೆಂಪೇಗೌಡ, ಸುರಪುರ ನಾಯಕರ ವಿಷಯಗಳನ್ನು ಕಡಿತಗೊಳಿಸಲಾಗಿದೆ. ಡಾ. ಅಂಬೇಡ್ಕರ್‌ ಮತ್ತು ಕುವೆಂಪು ಅವರು ಸಾರಿದ ಸಾಮಾಜಿಕ ನ್ಯಾಯ, ಸಮಾನತೆ, ಜಾತ್ಯತೀತತೆ ಮತ್ತು ವಿಶ್ವಮಾನವತ್ವದ ಪರಿಕಲ್ಪನೆಗಳನ್ನು ಕಡೆಗಣಿಸಿರುವುದು ಪುನರ್‌ ಪರಿಷ್ಕರಣೆಯಲ್ಲಿ ಎದ್ದು ಕಾಣುತ್ತದೆ’ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.