ಬೆಂಗಳೂರು: ಮಂಗಳೂರಿನಲ್ಲಿ ನಡೆದ ಸರಣಿ ಹತ್ಯೆ ಪ್ರಕರಣಗಳನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತೀವ್ರವಾಗಿ ಖಂಡಿಸಿದ್ದಾರೆ.
ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹಾಗೂ ಸುರತ್ಕಲ್‌ನ ಮಹಮ್ಮದ್ ಫಾಝಿಲ್ ಹತ್ಯೆ ಪ್ರಕರಣಗಳನ್ನು ಪ್ರಸ್ತಾಪಿಸಿ ಸರಣಿ ಟ್ವೀಟ್ ಮಾಡಿರುವ ಎಚ್‌ಡಿಕೆ, ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
‘ನಾಡಿನ ಜನರನ್ನಷ್ಟೇ ಅಲ್ಲ, ತನ್ನ ಕಾರ್ಯಕರ್ತರನ್ನೇ ರಕ್ಷಣೆ ಮಾಡಿಕೊಳ್ಳಲಾಗದ ಅಸಮರ್ಥ, ಅಸಹಾಯಕ ಬಿಜೆಪಿ ಸರ್ಕಾರ, ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣವನ್ನು ಎನ್‌ಐಎ ತನಿಖೆಗೆ ಒಪ್ಪಿಸಿದೆ. ಆದರೆ, ಕರಾವಳಿಯಲ್ಲಿ ನಡೆದ ಎಲ್ಲ ಹತ್ಯೆಗಳನ್ನೂ ಎನ್‌ಐಎ ತನಿಖೆಗೆ ವಹಿಸಲು ಹಿಂಜರಿಯುತ್ತಿರುವುದು ಏಕೆ’ ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
‘ಕರಾವಳಿ ಭಾಗದಲ್ಲಿ ಪ್ರತಿ ಕೊಲೆ ಬಗ್ಗೆಯೂ ಸರ್ಕಾರಕ್ಕೆ ಮಾಹಿತಿ ಇದೆ. ಆ ಕೊಲೆಗಳು ಏಕಾಗುತ್ತಿವೆ ಎನ್ನುವುದೂ ಗೊತ್ತಿದೆ. ಆದರೆ, ‘ಡಬಲ್ ಎಂಜಿನ್ ಸರ್ಕಾರ ಡಬಲ್ ಗೇಮ್’ ಆಡುತ್ತಿದೆ. ಜಗತ್ತಿನ ಅತಿದೊಡ್ಡ ರಾಜಕೀಯ ಪಕ್ಷ ಎಂದು ಬೀಗುವ ಬಿಜೆಪಿ ಪಕ್ಷ, ತನಗೆ ಅಧಿಕಾರ ತಂದುಕೊಟ್ಟ ಯುವಕರ ಜೀವಗಳಿಗೇ ಗ್ಯಾರಂಟಿ ಕೊಡದಷ್ಟು ದುರ್ಬಲವಾಗಿದೆ’ ಎಂದು ಎಚ್‌ಡಿಕೆ ಕಿಡಿಕಾರಿದ್ದಾರೆ.
‘ಪ್ರವೀಣ್ ಹತ್ಯೆ ಪ್ರಕರಣವನ್ನು ಎನ್‌ಐಎ ತನಿಖೆಗೆ ಒಪ್ಪಿಸಿ ವೀರಾವೇಶ ಮೆರೆದ ಮುಖ್ಯಮಂತ್ರಿ ಬೊಮ್ಮಾಯಿ, ಮಂಗಳೂರಿನಲ್ಲಿ ಜನರಿಗೆ ಕೊಟ್ಟ ಸಂದೇಶವೇನು? ಅವರ ನಾಲಿಗೆಯ ಮೇಲೆ ಒಮ್ಮೆಯಾದರೂ ‘ಶಾಂತಿ ಕಾಪಾಡಿ’ ಎನ್ನುವ ಮಾತು ಬಂತಾ? ಬರಲಿಲ್ಲ!! ನೆಮ್ಮದಿಗಾಗಿ ಕಿಂಚಿತ್ ಕ್ರಮ ವಹಿಸಿದಿರಾ? ಅದೂ ಇಲ್ಲ. ಹಿಂಸೆಗೆ ಇನ್ನಷ್ಟು ತುಪ್ಪಾ ಸುರಿದು ಬಂದಿದ್ದಾರೆ’ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.
‘ಎನ್‌ಐಎ ತನಿಖೆಗೆ ವಹಿಸಿದ ಎಷ್ಟು ಪ್ರಕರಣಗಳಿಗೆ ತಾರ್ಕಿಕ ಅಂತ್ಯ ಸಿಕ್ಕಿದೆ? ಒಂದೂ ಇಲ್ಲ. ಎನ್‌ಐಎಗೆ ಒಪ್ಪಿಸಿದ ಮೇಲೆ ತನಿಖೆಯಲ್ಲಿ ಮುಂದೆ ಸಾಗುತ್ತಿದ್ದ ರಾಜ್ಯ ಪೊಲೀಸರಿಗೆ ಮುಖ್ಯಮಂತ್ರಿಗಳು ಕೊಟ್ಟ ಸಂದೇಶವೇನು? ಸ್ವತಃ ಗೃಹ ಸಚಿವರಾಗಿದ್ದ ಅವರು, ಸಿಎಂ ಆದ ಮೇಲೆ ತಮ್ಮ ಅಧೀನದ ಪೊಲೀಸ್ ವ್ಯವಸ್ಥೆಯನ್ನೇ ನಂಬುತ್ತಿಲ್ಲ!! ಇದಲ್ಲವೇ ವಿಪರ್ಯಾಸ’ ಎಂದು ಎಚ್‌ಡಿಕೆ ಗುಡುಗಿದ್ದಾರೆ.
ರಾಜ್ಯದಲ್ಲಿ ದಕ್ಷ ಪೊಲೀಸ್ ಅಧಿಕಾರಿಗಳು ಇಲ್ಲವೆ? ನಿಷ್ಠಾವಂತ, ಪ್ರಾಮಾಣಿಕ ಅಧಿಕಾರಿಗಳಿಗೆ ಮುಕ್ತ ಸ್ವಾತಂತ್ರ್ಯ ಕೊಟ್ಟರೆ ಕರಾವಳಿ ಹಿಂಸಾಕಾಂಡವನ್ನು ಮೂಲೋತ್ಪಾಟನೆ ಮಾಡಬಲ್ಲರು. ಬಿಜೆಪಿ ಸರ್ಕಾರಕ್ಕೆ ಅದು ಬೇಕಿಲ್ಲ. ಸಮರ್ಥ ಅಧಿಕಾರಿಗಳನ್ನು ನಂಬದೆ ಎನ್‌ಐಎಗೆ ವಹಿಸುವ ನಾಟಕವಾಡಿ ಕಗ್ಗೊಲೆಗಳ ತನಿಖೆಗೆ ‘ಸಮಾಧಿʼ ಕಟ್ಟಲು ಹೊರಟಿದೆ ಎಂದು ಕುಮಾರಸ್ವಾಮಿ ಕುಟುಕಿದ್ದಾರೆ.
‘ಎರಡು ಕೊಲೆಗಳು ನಡೆದ ಬೆಳ್ಳಾರೆ ಗ್ರಾಮದಲ್ಲಾದರೂ ಬೊಮ್ಮಾಯಿ ಅವರು ಮುಖ್ಯಮಂತ್ರಿ ಹೊಣೆಯ ಘನತೆಗೆ ತಕ್ಕಂತೆ ಶಾಂತಿ ರಕ್ಷಣೆ ಬಗ್ಗೆ ಒಂದು ಮಾತನ್ನಾದರೂ ಹೇಳಿದಿರಾ? ಇಲ್ಲ, ಚುನಾವಣೆ ವರ್ಷವಲ್ಲ.. ಕೊಲೆಗಳೇ ಹೆಚ್ಚೆಚ್ಚು ಆಗಬೇಕು, ಅವರ ಮತಪೆಟ್ಟಿಗೆ ಕೊಬ್ಬಬೇಕು. ನೆತ್ತರ ಧಾರೆ ಹರಿದಷ್ಟೂ ಭರ್ಜರಿ ಮತಧಾರೆ’ ಎಂದು ಕುಮಾರಸ್ವಾಮಿ ತರಾಟೆಗೆ ತೆಗೆದುಕೊಂಡಿದ್ದಾರೆ.
‘ಬೆಳ್ಳಾರೆ ಬೇಗೆ ಇಡೀ ಕರಾವಳಿಯನ್ನು ವ್ಯಾಪಿಸಿದೆ. ಆದರೆ, ಜೀವ ಭಯದಲ್ಲಿರುವ ಎರಡು ಕೋಮುಗಳ ಜನರು ನೆಮ್ಮದಿಯಿಂದ ಬದುಕಲು ಏನು ಮಾಡಿದ್ದೀರಿ ಬೊಮ್ಮಾಯಿ ಅವರೇ? ಅವರ ಜೀವಕ್ಕೆ ಏನು ಖಾತರಿ ಕೊಟ್ಟಿದ್ದೀರಿ? ಪ್ರತಿ ಕೊಲೆ ಆದಾಗಲೂ ಈ ಕೊಲೆಪಾತಕ ರಾಜಕಾರಣ ನಮ್ಮ ಕುಟುಂಬಕ್ಕೇ ಕೊನೆಯಾಗಲಿ ಎನ್ನುವ ತಾಯಂದಿರ ಆರ್ತನಾದಕ್ಕೆ ನಿಮ್ಮ ಉತ್ತರವೇನು’ ಎಂದು ಎಚ್‌ಡಿಕೆ ಟೀಕಿಸಿದ್ದಾರೆ.
‘ಕರ್ನಾಟಕ ಸರ್ವಜನಾಂಗದ ಶಾಂತಿಯ ತೋಟ. ಇದನ್ನು ಸರ್ವನಾಶ ಮಾಡಿದ್ದೀರಿ. ಹಿಂಸೆಯ ಎಂಬ ವಿಷ ಸರ್ಪದ ಹೆಡೆಯಡಿ ಕಟ್ಟಿರುವ ನಿಮ್ಮ ಸಾಮ್ರಾಜ್ಯ ಹಿಂಸೆಗೇ ಬಲಿ ಆಗುವುದು ಖಚಿತ. ಕಾರ್ಯಕರ್ತರ ನೆತ್ತರಿನ ಮೇಲಿನ ಅಧಿಕಾರದ ಸುಖಕ್ಕೆ ಅದೇ ಕಾರ್ಯಕರ್ತರ ಆಕ್ರೋಶವೇ ಚರಮಗೀತೆ ಬರೆಯಲಿದೆ. ಕರಾವಳಿ ಕೆರಳಿದೆ, ಕರ್ನಾಟಕ ಕೆರಳುವುದು ಬಾಕಿ ಇದೆ’ ಎಂದು ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.