ADVERTISEMENT

ಮಧ್ಯಂತರ ಚುನಾವಣೆಗೆ ನಾವು ಸಿದ್ಧ: ಕುಮಾರಸ್ವಾಮಿ

ಚಿಕ್ಕಬಳ್ಳಾಪುರದಲ್ಲಿ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 26 ನವೆಂಬರ್ 2019, 9:41 IST
Last Updated 26 ನವೆಂಬರ್ 2019, 9:41 IST
ಜೆಡಿಎಸ್‌ ಅಭ್ಯರ್ಥಿ ಎನ್‌.ರಾಧಾಕೃಷ್ಣ ಪರ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಮತಯಾಚಿಸಿದರು.
ಜೆಡಿಎಸ್‌ ಅಭ್ಯರ್ಥಿ ಎನ್‌.ರಾಧಾಕೃಷ್ಣ ಪರ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಮತಯಾಚಿಸಿದರು.   

ಚಿಕ್ಕಬಳ್ಳಾಪುರ:ಅನರ್ಹ ಶಾಸಕ ಡಾ.ಕೆ.ಸುಧಾಕರ್ ಅವರು ಮೆಡಿಕಲ್ ಕಾಲೇಜು, ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ಹಲವು ರೀತಿಯಲ್ಲಿ ಅಪಪ್ರಚಾರ ಮಾಡುತ್ತಿದ್ದಾರೆ. ಆದರೆ, ಮಧ್ಯಂತರ ಚುನಾವಣೆ ಎದುರಿಸುವ ಶಕ್ತಿ ನಮ್ಮ ಪಕ್ಷಕ್ಕೆ ಇದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದರು.

ತಾಲ್ಲೂಕಿನ ನಂದಿ ಗ್ರಾಮದಲ್ಲಿ ಮಂಗಳವಾರ ಜೆಡಿಎಸ್‌ ಅಭ್ಯರ್ಥಿ ಎನ್‌. ರಾಧಾಕೃಷ್ಣ ಪರ ಮತಯಾಚನೆ ನಡೆಸಲು ಆಗಮಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ರಾಜ್ಯದ ಅಭಿವೃದ್ಧಿ ವಿಚಾರದಲ್ಲಿ ನನ್ನಿಂದ ಏನಾದರೂ ಅನ್ಯಾಯವಾಗಿದೆಯೇ ಎಂಬ ಬಗ್ಗೆ ಕಾಂಗ್ರೆಸ್‌, ಬಿಜೆಪಿ ನಾಯಕರೊಂದಿಗೆ ಸಾರ್ವಜನಿಕವಾಗಿ ಚರ್ಚೆ ಮಾಡಲು ನಾನು ತಯಾರಿದ್ದೇನೆ ಎಂದು ಅವರು ಸವಾಲು ಹಾಕಿದರು.

ADVERTISEMENT

ನಾವು ಅಧಿಕಾರಕ್ಕಾಗಿ ಕಾಂಗ್ರೆಸ್‌ನವರ ಮನೆ ಬಾಗಿಲಿಗೆ ಹೋಗಿರಲಿಲ್ಲ. ಆದರೆ ಎಐಸಿಸಿಯ ಅಂದಿನ ಅಧ್ಯಕ್ಷ ರಾಹುಲ್‌ ಗಾಂಧಿ, ಸೋನಿಯಾ ಗಾಂಧಿ ಅವರೇ ಒತ್ತಾಯ ಮಾಡಿ ನನ್ನನ್ನು ಮುಖ್ಯಮಂತ್ರಿಯಾಗಿ ಮಾಡಿದರು. ಆದರೆ, ಮೈತ್ರಿ ಸರ್ಕಾರ ರಚನೆಯಾದ ದಿನದಿಂದ ಅನರ್ಹ ಶಾಸಕರು ಸೇರಿದಂತೆ ಇತರ ನಾಯಕರು ಪ್ರತಿನಿತ್ಯ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದರು.

2008ರಲ್ಲಿ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪ ಕಾಂಗ್ರೆಸ್‌, ಜೆಡಿಎಸ್‌ನ ಹಲವು ಶಾಸಕರಿಂದ ರಾಜೀನಾಮೆ ಕೊಡಿಸಿದ್ದರು. ಆದೇ ರೀತಿ ಈ ಬಾರಿಯೂ ಕುರಿ, ಮೇಕೆ, ಕೋಳಿಗಳನ್ನು ಖರೀದಿಸುವಂತೆ ಶಾಸಕರಿಗೆ ಕೋಟಿಗಟ್ಟಲೇ ಹಣ ಕೊಟ್ಟು ಖರೀದಿ ಮಾಡಿದ್ದಾರೆ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.