ADVERTISEMENT

ನಿಖಿಲ್‌ಗೆ ಜೆಡಿಎಸ್‌ ರಾಜ್ಯ ಅಧ್ಯಕ್ಷ ಪಟ್ಟ?

ಪಕ್ಷದ ಪ್ರಮುಖರ ಸಭೆ, ಶಾಸಕಾಂಗ ಪಕ್ಷದ ಸಭೆಯಲ್ಲಿ ಸೂಚನೆ

​ಪ್ರಜಾವಾಣಿ ವಾರ್ತೆ
Published 6 ಜುಲೈ 2024, 15:44 IST
Last Updated 6 ಜುಲೈ 2024, 15:44 IST
ನಿಖಿಲ್‌ ಕುಮಾರಸ್ವಾಮಿ
ನಿಖಿಲ್‌ ಕುಮಾರಸ್ವಾಮಿ   

ಬೆಂಗಳೂರು: ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು, ಹಿರಿಯ–ಕಿರಿಯ ಮುಖಂಡರು, ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಂತೆ ಶನಿವಾರ ನಡೆದ ಜೆಡಿಎಸ್‌ ಪ್ರಮುಖ ನಾಯಕರ ಸಭೆಯು ನಿಖಿಲ್‌ ಕುಮಾರಸ್ವಾಮಿಗೆ ಸೂಚಿಸುವ ಮೂಲಕ ಅಧ್ಯಕ್ಷ ಸ್ಥಾನದ ಹೊಣೆ ನೀಡುವ ಸುಳಿವು ನೀಡಿದೆ.

ಸಭೆಯ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಕೇಂದ್ರದ ಭಾರಿ ಕೈಗಾರಿಕಾ ಸಚಿವ ಎಚ್‌.ಡಿ. ಕುಮಾರಸ್ವಾಮಿ, ಸಾಮೂಹಿಕ ಜವಾಬ್ದಾರಿ ಮೂಲಕ ಸಂಘಟನೆಗೆ ಹೆಚ್ಚು ಶಕ್ತಿ ತುಂಬಲು ನಿರ್ಧಾರಿಸಲಾಗಿದೆ. ನಿಖಿಲ್ ಕುಮಾರಸ್ವಾಮಿ ಅವರು ಸಂಘಟನೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ತೊಡಗಿಕೊಳ್ಳಬೇಕು ಎಂದು ಪ್ರಮುಖರ ಸಮಿತಿ ಹಾಗೂ ಶಾಸಕರು ಸಲಹೆ ನೀಡಿದ್ದಾರೆ. ಅವರ ಸಲಹೆಗಳನ್ನು ಕಾರ್ಯರೂಪಕ್ಕೆ ತರಲು ನಿಖಿಲ್‌ ಅವರೆಲ್ಲರ ಜೊತೆ ವಿಶ್ವಾಸದಿಂದ ಇರುತ್ತಾರೆ. ಸಂಘಟನೆಯಲ್ಲಿ ಹೆಚ್ಚು ತೊಡಗಿಕೊಳ್ಳುತ್ತಾರೆ ಎಂದು ಹೇಳಿದರು. 

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಅಧಿಕಾರವನ್ನು ಪಕ್ಷದ ಶಾಸಕರು ತಮಗೆ ನೀಡಿದ್ದಾರೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಎಚ್.ಡಿ. ದೇವೆಗೌಡರ ಜತೆ ಚರ್ಚಿಸಿ, ಅಧಿವೇಶನದ ಒಳಗೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.

ADVERTISEMENT

ಪಕ್ಷವನ್ನು ತಳಮಟ್ಟದಿಂದ ಮರು ಸಂಘಟನೆ ಮಾಡುವುದು, ದೊಡ್ಡ ಪ್ರಮಾಣದಲ್ಲಿ ಸದಸ್ಯತ್ವ ಅಭಿಯಾನ ಹಮ್ಮಿಕೊಳ್ಳುವುದು. ರಾಜ್ಯ ಘಟಕದ ಅಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಸಲು ನಿರ್ಧರಿಸಲಾಗಿದೆ. ಸದಸ್ಯತ್ವ ಅಭಿಯಾನಕ್ಕೆ 31 ಜಿಲ್ಲೆಗಳಲ್ಲೂ ವಿಧಾನಸಭಾವಾರು ಉಸ್ತುವಾರಿ ನೇಮಿಸಲಾಗುವುದು. ಪಕ್ಷವನ್ನು ತಳಮಟ್ಟದಿಂದ ಪುನರ್‌ ಸಂಘಟಿಸಲಾಗುವುದು. ಅಧಿವೇಶನದಲ್ಲಿ ಮಿತ್ರಪಕ್ಷ ಬಿಜೆಪಿ ಜತೆ ಸೇರಿ ಜನಪರ ಹೋರಾಟ ರೂಪಿಸುವುದು ಸೇರಿದಂತೆ ಹಲವಾರು ವಿಷಯಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಯಿತು ಎಂದು ಹೇಳಿದರು.

ಮಾಜಿ ಸಚಿವರಾದ ಬಂಡೆಪ್ಪ ಕಾಶೆಂಪೂರ, ಸಾ.ರಾ. ಮಹೇಶ್, ವೆಂಕಟರಾವ್‌ ನಾಡಗೌಡ, ಯುವ ಜನತಾದಳ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ, ಸಂಸದ ಮಲ್ಲೇಶ್ ಬಾಬು, ವಿಧಾನ ಪರಿಷತ್ ಸದಸ್ಯರಾದ ಕೆ.ಎ. ತಿಪ್ಪೇಸ್ವಾಮಿ, ಶಾಸಕಾಂಗ ಪಕ್ಷದ ಉಪ ನಾಯಕಿ ಶಾರದಾ ಪೂರ್‍ಯಾನಾಯ್ಕ ಮತ್ತಿತರರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.