ADVERTISEMENT

ರಾಜ್ಯದ ವಿವಿಧೆಡೆ ಬಿರುಸಿನ ಮಳೆ, ಉಕ್ಕಿದ ನದಿಗಳು

ಮಹಿಳೆ ಸಾವು, ಕೊಚ್ಚಿಹೋದ ವಿದ್ಯಾರ್ಥಿನಿ, ಉಕ್ಕಿದ ನದಿಗಳು

​ಪ್ರಜಾವಾಣಿ ವಾರ್ತೆ
Published 4 ಜುಲೈ 2022, 18:46 IST
Last Updated 4 ಜುಲೈ 2022, 18:46 IST
ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮಲ್ಲಳ್ಳಿ ಜಲಪಾತ ಪ್ರವಾಸಿಗರನ್ನು ಆಕರ್ಷಿಸುತ್ತಿದೆ ----–ಪ್ರಜಾವಾಣಿ ಚಿತ್ರ
ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮಲ್ಲಳ್ಳಿ ಜಲಪಾತ ಪ್ರವಾಸಿಗರನ್ನು ಆಕರ್ಷಿಸುತ್ತಿದೆ ----–ಪ್ರಜಾವಾಣಿ ಚಿತ್ರ   

ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಹಲವೆಡೆ ಬಿರುಸಿನ ಮಳೆ ಮುಂದುವರಿದಿದ್ದು, ಜಲಾಶಯಗಳಿಗೆ ಒಳ ಹರಿವು ಹೆಚ್ಚಾಗಿದೆ.ಕಾವೇರಿ, ನೇತ್ರಾವತಿ, ಕುಮಾರಧಾರಾ, ಶಾಂಭವಿ ನದಿಗಳು ಹಾಗೂ ಅವುಗಳ ಉಪನದಿಗಳು ತುಂಬಿ ಹರಿಯುತ್ತಿವೆ.

ಚಿಕ್ಕಮಗಳೂರು ಜಿಲ್ಲೆಯ ಹೊಸಪೇಟೆಯ ಒಂದನೇ ತರಗತಿಯ ವಿದ್ಯಾರ್ಥಿನಿ ಸುಪ್ರಿತಾ ಶಾಲೆ ಮುಗಿಸಿ ಸಂಜೆ ಮನೆಗೆ ಹೋಗುವಾಗ ಕಂಬಿಹಳ್ಳಿ ಸಮೀಪ ಕಾಫಿ ಎಸ್ಟೇಟ್‌ನೊಳಗಿನ ಹಳ್ಳದಲ್ಲಿ ಕೊಚ್ಚಿಕೊಂಡು ಹೋಗಿದ್ದಾಳೆ.ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಹಲ್ಲೂರು ಗ್ರಾಮದಲ್ಲಿ ಮಳೆಯಿಂದಾಗಿ, ಗದ್ದೆಯಲ್ಲಿ ತುಂಬಿದ್ದ ನೀರನ್ನು ಹೊರಕ್ಕೆ ಹರಿಸಲು ಹೋಗಿದ್ದ ಕೃಷಿಕ ಮಹಿಳೆಲಕ್ಷ್ಮಿ ಪೂಜಾರ್ತಿ (66) ಎಂಬುವರು ಆಯತಪ್ಪಿ ಬಿದ್ದು ಮೃತಪಟ್ಟಿದ್ದಾರೆ.

ಮಳೆ ಕಾರಣ ಉಡುಪಿ ಜಿಲ್ಲೆಯ ಹೆಬ್ರಿ ತಾಲ್ಲೂಕಿನ ಅಂಗನವಾಡಿ, ಶಾಲಾ– ಕಾಲೇಜುಗಳಿಗೆ ಮಂಗಳವಾರ ರಜೆ ನೀಡಲಾಗಿದೆ.ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆಗೆ ಅಲ್ಲಲ್ಲಿ ಮಣ್ಣು ಕುಸಿತ ಉಂಟಾಗಿದ್ದು, ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ (ಎನ್‌ಡಿಆರ್‌ಎಫ್‌) ವಿವಿಧೆಡೆ ತೆರಳಿ ಪರಿಸ್ಥಿತಿ ಅವಲೋಕಿಸಿದೆ.

ಉತ್ತರ ಕನ್ನಡ ಜಿಲ್ಲೆಯಜೊಯಿಡಾ ತಾಲ್ಲೂಕಿನ ಅನಮೋಡದ ಸಮೀ‍ಪ ಗೋವಾ ಭಾಗದ ರಾಷ್ಟ್ರೀಯ ಹೆದ್ದಾರಿ ‘4 ಎ‌’ ಮೇಲೆ ಗುಡ್ಡ ಕುಸಿದಿದೆ. ಭಾನುವಾರ ರಾತ್ರಿ 11.30ರ ಸುಮಾರಿಗೆ ದೂಧ್‌ ಸಾಗರ ದೇವಸ್ಥಾನ ಬಳಿ ಅವಘಡವಾಗಿದ್ದು, ವಾಹನಗಳ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.