ಬೆಂಗಳೂರು: ರಾಜ್ಯದ ಕೆಲವೆಡೆ ಗುರುವಾರವೂ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, ಕರಾವಳಿಯ ಉತ್ತರ ಕನ್ನಡಕ್ಕೆ ‘ಆರೆಂಜ್ ಅಲರ್ಟ್’ ಹಾಗೂ ಏಳು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಿದೆ.
ಉತ್ತರ ಕನ್ನಡ ಜಿಲ್ಲೆಯ ಕೆಲ ಸ್ಥಳಗಳಲ್ಲಿ ನಿರಂತರ ಗಾಳಿಯೊಂದಿಗೆ ಧಾರಾಕಾರ ಮಳೆಯಾಗುವ ಸಂಭವವಿದೆ. ಕಲಬುರಗಿ, ವಿಜಯಪುರ, ಬೆಳಗಾವಿ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ. ಈ ಜಿಲ್ಲೆಗಳಲ್ಲಿಯೂ ಕೆಲವೆಡೆ ಭಾರಿ ಮಳೆಯೊಂದಿಗೆ ಗಾಳಿಯ ವೇಗವು 40ರಿಂದ 50 ಕಿ.ಮೀ. ತಲುಪುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.
ಕರಾವಳಿ ಉದ್ದಕ್ಕೂ ಬಿರುಗಾಳಿಯಿಂದ ಕೂಡಿದ ಹವಾಮಾನ ಇರಲಿದೆ. ಗಂಟೆಗೆ 35 ಕಿ.ಮೀ.ಯಿಂದ 55 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಆದ್ದರಿಂದ, ಮೀನುಗಾರರು ಎಚ್ಚರಿಕೆ ವಹಿಸಬೇಕು ಎಂದು ಇಲಾಖೆ ಹೇಳಿದೆ.
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗಾಳಿಯ ವೇಗವು 30 ಕಿ.ಮೀ.ಯಿಂದ 40 ಕಿ.ಮೀ. ತಲುಪುವ ಸಂಭವವಿದೆ ಎಂದು ತಿಳಿಸಿದೆ.
ಶುಕ್ರವಾರವೂ ಕರಾವಳಿ ಹಾಗೂ ಮಲೆನಾಡಿನ ಆರು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದ್ದು, ಈ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.