ಬೆಂಗಳೂರು: ರಾಜ್ಯದ ಕರಾವಳಿ ಸೇರಿ ವಿವಿಧೆಡೆ ಮುಂದಿನ ಒಂದು ವಾರ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, ಐದು ಜಿಲ್ಲೆಗಳಿಗೆ ಬುಧವಾರ ‘ರೆಡ್ ಅಲರ್ಟ್’ ಘೋಷಿಸಿದೆ.
ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಗೆ ‘ರೆಡ್ ಅಲರ್ಟ್’ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಭಾರಿ ಗಾಳಿಯೊಂದಿಗೆ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಹಾಗೂ ಹಾಸನಕ್ಕೆ ‘ಆರೆಂಜ್ ಅಲರ್ಟ್’, ಬೆಳಗಾವಿ ಮತ್ತು ಮೈಸೂರು ಜಿಲ್ಲೆಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಭಾರಿ ಮಳೆಯೊಂದಿಗೆ ಗಾಳಿಯ ವೇಗವು 40ರಿಂದ 50 ಕಿ.ಮೀ. ತಲುಪುವ ಸಾಧ್ಯತೆಯಿದೆ. ದಕ್ಷಿಣ ಹಾಗೂ ಉತ್ತರ ಒಳನಾಡಿನ ಉಳಿದ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ.
ಕರಾವಳಿ ಉದ್ದಕ್ಕೂ ಬಿರುಗಾಳಿಯಿಂದ ಕೂಡಿದ ಹವಾಮಾನ ಇರಲಿದೆ. ಗಂಟೆಗೆ 35ರಿಂದ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಆದ್ದರಿಂದ, ಮೀನುಗಾರರು ಎಚ್ಚರಿಕೆ ವಹಿಸಬೇಕು. ಸಮುದ್ರ ಕಾರ್ಯಾಚರಣೆ ಹಾಗೂ ದಡದಲ್ಲಿ ಮನರಂಜನೆ ಚಟುವಟಿಕೆ ನಡೆಸುವಾಗ ಜಾಗರೂಕವಾಗಿರಬೇಕು ಎಂದು ಇಲಾಖೆ ಹೇಳಿದೆ.
ಗುರುವಾರವೂ ರಾಜ್ಯದ ವಿವಿಧೆಡೆ ಭಾರಿ ಮಳೆ ಮುಂದುವರಿಯುವ ಸಾಧ್ಯತೆಯಿದ್ದು, ಕರಾವಳಿಯ ಮೂರು ಜಿಲ್ಲೆಗಳು ಸೇರಿ ಏಳು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಹಾಗೂ ಬೆಳಗಾವಿ ಜಿಲ್ಲೆಗೆ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.