ಬೆಂಗಳೂರು: ‘ಜಕ್ಕೂರು ವೈಮಾನಿಕ ತರಬೇತಿ ಕೇಂದ್ರದಲ್ಲಿ ಒಟ್ಟಿಗೆ 6 ಹೆಲಿಕಾಪ್ಟರ್‌ಗಳ ನಿಲುಗಡೆ ಹಾಗೂ ಹಾರಾಟಕ್ಕೆ ಅನುಕೂಲವಾಗುವಂತೆ ಅಗತ್ಯ ಮೂಲ ಸೌಕರ್ಯ ಅಭಿವೃದ್ಧಿಪಡಿಸುವ ಯೋಜನೆಗೆ ರೂಪರೇಷೆ ಸಿದ್ಧಪಡಿಸಲಾಗಿದೆ’ಎಂದುಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ ತಿಳಿಸಿದರು.
‘ಹೆಲಿ–ಟೂರಿಸಂ’ಗೆ ಜಕ್ಕೂರು ವೈಮಾನಿಕ ತರಬೇತಿ ಕೇಂದ್ರ ಬಳಸಿಕೊಳ್ಳುವ ಸಂಬಂಧ ಪ್ರವಾಸೋದ್ಯಮ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ನಡುವೆ ಒಪ್ಪಂದ ಮಾಡಿಕೊಳ್ಳಲು ವಿಧಾನಸೌಧದಲ್ಲಿ ಸೋಮವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು.
‘ಹೊರ ರಾಜ್ಯಗಳು ಹಾಗೂ ವಿದೇಶಗಳಿಂದ ಬೆಂಗಳೂರಿಗೆ ಬರುವ ಪ್ರವಾಸಿಗರು ಜಕ್ಕೂರು ವೈಮಾನಿಕ ತರಬೇತಿ ಕೇಂದ್ರದಿಂದ ರಾಜ್ಯದ ಇತರ ಜಿಲ್ಲೆಗಳು ಹಾಗೂ ಪ್ರವಾಸೋದ್ಯಮ ಕ್ಷೇತ್ರಗಳಿಗೆ ತೆರಳಲು ಅನುಕೂಲ ಮಾಡಿಕೊಡುವ ಉದ್ದೇಶದಿಂದ ಈ ಯೋಜನೆ ರೂಪಿಸಲಾಗುತ್ತಿದೆ’ ಎಂದರು.
‘ರಾಜ್ಯದಲ್ಲಿ ಹೆಲಿಟೂರಿಸಂ ಅಭಿವೃದ್ಧಿಪಡಿಸುವ ಯೋಜನೆಗಳಿಗೆ ಬಂಡವಾಳ ಹೂಡಲು ಮೂವರು ಉದ್ಯಮಿಗಳು ಮುಂದೆ ಬಂದಿದ್ದಾರೆ. ಹಂತ ಹಂತವಾಗಿ ಹೆಲಿಟೂರಿಸಂ ಅಭಿವೃದ್ಧಿ ಪಡಿಸಲು ಯೋಜನೆ ರೂಪಿಸಲಾಗಿದೆ. ಮೈಸೂರು, ಕಲಬುರ್ಗಿ, ಮಂಗಳೂರು, ಬಳ್ಳಾರಿ, ಧಾರವಾಡಗಳಲ್ಲಿ ಹೆಲಿಪೋರ್ಟ್ ನಿರ್ಮಿಸಿ, ಇಲ್ಲಿಂದ ಸಂಪರ್ಕ ಕಲ್ಪಿಸಲಾಗುವುದು’ ಎಂದು ವಿವರಿಸಿದರು.
ಯುವ ಸಬಲೀಕರಣ ಹಾಗೂ ಕ್ರೀಡಾ ಸಚಿವ ನಾರಾಯಣಗೌಡ,‘ಈ ಸಂಬಂಧ ಶೀಘ್ರವೇ ಸ್ಥಳ ಪರಿಶೀಲನೆ ನಡೆಸಲಾಗುವುದು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.