ಬೆಳಗಾವಿ:‘ರಾಜ್ಯ ರಾಜಕಾರಣದ ಬಗ್ಗೆ ಚರ್ಚಿಸಲು ನವದೆಹಲಿಗೆ ಬರುವಂತೆ ಎಐಸಿಸಿ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ದೂರವಾಣಿ ಕರೆ ಮಾಡಿ ಹೇಳಿದ್ದಾರೆ. ಒಂದೆರಡು ದಿನಗಳಲ್ಲಿ ಹೋಗಿ ಭೇಟಿಯಾಗುವೆ. ಅವರನ್ನು ಮಾತ್ರ ಭೇಟಿಯಾಗುತ್ತೇನೆ. ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿಯಾಗುವುದಿಲ್ಲ’ ಎಂದು ಶಾಸಕ ಸತೀಶ ಜಾರಕಿಹೊಳಿ ಹೇಳಿದರು.
ನಗರದಲ್ಲಿ ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಕೂಡ ಬರುತ್ತಿದ್ದಾರೆ ಎಂದರು.
ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ‘ಸಹೋದರ ರಮೇಶ ಜಾರಕಿಹೊಳಿ ಅವರು ಮುಂದಿನ ಎರಡು ವರ್ಷಗಳ ಕಾಲ ಸಚಿವರಾಗಿ ಮುಂದುವರಿಯಲಿದ್ದಾರೆ. ಅವರು ರಾಜೀನಾಮೆ ನೀಡುವ ಯಾವ ವಿಚಾರವೂ ಇಲ್ಲ. ರಮೇಶ ಜೊತೆ ಮುಖಾಮುಖಿ ಮಾತನಾಡಿಲ್ಲ. ಫೋನ್‌ನಲ್ಲಿ ಮಾತ್ರ ಮಾತನಾಡಿದ್ದೇನೆ. ಬೆಂಗಳೂರಿಗೆ ಹೋದಾಗ ಭೇಟಿಯಾಗಿ ಚರ್ಚೆ ಮಾಡುತ್ತೇನೆ. ಪಕ್ಷದ ಸಂಘಟನೆ ಹಾಗೂ ಲೋಕಸಭಾ ಚುನಾವಣೆ ಕುರಿತು ಚರ್ಚೆ ಮಾಡುತ್ತೇನೆ’ ಎಂದು ಹೇಳಿದರು.
‘ಕೆಲವು ಸಮಸ್ಯೆಗಳನ್ನು ಇತ್ಯರ್ಥಪಡಿಸಲು ರಮೇಶ ಅವರು ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ. ಸರ್ಕಾರಕ್ಕೆ ನಾವು ಸಂಪೂರ್ಣ ಬೆಂಬಲ ನೀಡುತ್ತೇವೆ’ ಎಂದು ತಿಳಿಸಿದರು.
‘ಕಳೆದ ನಾಲ್ಕು ತಿಂಗಳಿನಿಂದಲೂ ಬಿಜೆಪಿಯವರು ತಮ್ಮ ಪಕ್ಷಕ್ಕೆ ಬರುವಂತೆ ನಮ್ಮ ಶಾಸಕರಿಗೆ ಆಹ್ವಾನ ನೀಡುತ್ತಿದ್ದಾರೆ. ಇದನ್ನು ತಕ್ಷಣದಿಂದಲೇ ನಿಲ್ಲಿಸಬೇಕು’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.