ಬೆಂಗಳೂರು: ‘ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ವಸತಿ ಯೋಜನೆ ಅನುಷ್ಠಾನದಲ್ಲಿ ಮಾಜಿ ಮುಖ್ಯ ಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಅವರ ಕುಟುಂಬದ ಸದಸ್ಯರು ಲಂಚಪಡೆದಿದ್ದಾರೆ’ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ವಿಚಾರಣೆಗೆ ಹೈಕೋರ್ಟ್ ಹಸಿರು ನಿಶಾನೆ ತೋರಿದೆ.
ಈ ಸಂಬಂಧ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಾಹಂ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಸ್. ಸುನಿಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಭಾಗಶಃ ಪುರಸ್ಕರಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಯ್ದಿರಿ ಸಿದ್ದ ತೀರ್ಪನ್ನು ನ್ಯಾಯಮೂರ್ತಿಗಳು ಬುಧವಾರ ಮುಕ್ತ ಕಲಾಪದಲ್ಲಿ ಪ್ರಕಟಿ ಸಿದರು. ಇದರಿಂದಾಗಿ ಯಡಿಯೂರಪ್ಪ ಮತ್ತು ಅವರ ಕುಟುಂಬದ ಸದಸ್ಯರೂ ಸೇರಿದಂತೆ ಕೆಲ ಅಧಿಕಾರಿಗಳ ವಿರುದ್ಧದ ಭ್ರಷ್ಟಾಚಾರ ತಡೆ ಕಾಯ್ದೆ-1988ರ ಕಲಂ 7,8,9,10 ಮತ್ತು 13, ಭಾರತೀಯ ದಂಡ ಸಂಹಿತೆ-1860ರ ಕಲಂ 383, 384, 415, 418, 420 ಹಾಗೂ ಹಣ ಅಕ್ರಮ ವರ್ಗಾವಣೆ ಕಾಯ್ದೆ-2002ರ ಕಲಂ 3 ಮತ್ತು 4ರ ಅನ್ವಯ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ಮುಂದುವರಿಯಲಿದೆ.
ಪ್ರಕರಣವೇನು?: ‘ಬಿಡಿಎ ಗುತ್ತಿಗೆ ಪಡೆಯಲು ರಾಮಲಿಂಗಂ ಕನ್‌ಸ್ಟ್ರಕ್ಷನ್ ಕಂಪನಿ ಮತ್ತು ಕೆಲ ಶೆಲ್ ಕಂಪನಿ ಗಳಿಂದ ಅಂದಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಅವರ ಕುಟುಂಬದ ಸದಸ್ಯರು ಕೋಟ್ಯಂತರ ರೂಪಾಯಿಗಳ ಲಂಚ ಪಡೆದಿದ್ದಾರೆ’ ಎಂದು ಆರೋಪಿಸಿ ಟಿ.ಜೆ ಅಬ್ರಹಾಂ ಖಾಸಗಿ ದೂರು ದಾಖಲಿಸಿದ್ದರು. ‘ವಿಶೇಷ ತನಿಖಾ ತಂಡದಿಂದ(ಎಸ್‌ಐಟಿ) ತನಿಖೆ ನಡೆಸಲು ನಿರ್ದೇಶಿಸಬೇಕು’ ಎಂದು ಕೋರಿದ್ದರು.
ಯಡಿಯೂರಪ್ಪ ವಿರುದ್ಧದ ಪ್ರಾಸಿ ಕ್ಯೂಷನ್‌ಗೆ ಅನುಮತಿ ನೀಡಲು ರಾಜ್ಯಪಾಲರು ನಿರಾಕರಿಸಿದ್ದ ಕಾರಣ
ಶಾಸಕರು– ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಶೇಷ ನ್ಯಾಯಾಲಯ 2021ರ ಜುಲೈ 8 ರಂದು ದೂರನ್ನು ವಜಾಗೊಳಿಸಿತ್ತು.
ಪ್ರಕರಣದ ಆರೋಪಿಗಳು
ಯಡಿಯೂರಪ್ಪ ಪುತ್ರ ಬಿ.ವೈ ವಿಜಯೇಂದ್ರ, ಮೊಮ್ಮಗ ಶಶಿಧರ ಮರಡಿ, ಅಳಿಯ ಸಂಜಯ್ ಶ್ರೀ, ಹಿಂದೆ ಬಿಡಿಎ ಅಧ್ಯಕ್ಷರಾಗಿದ್ದ ಈಗಿನ ಸಹಕಾರ ಸಚಿವ ಎಸ್.ಟಿ ಸೋಮಶೇಖರ್, ಚಂದ್ರಕಾಂತ್ ರಾಮಲಿಂಗಂ, ಐಎಎಸ್ ಅಧಿಕಾರಿ ಡಾ.ಜಿ.ಸಿ.ಪ್ರಕಾಶ್, ಕೆ.ರವಿ ಮತ್ತು ವಿರೂಪಾಕ್ಷಪ್ಪ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.