ಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗೆದ್ದಿರುವ ವರುಣಾ ವಿಧಾನಸಭಾ ಕ್ಷೇತ್ರದ ಮತದಾನಕ್ಕೆ ಬಳಸಲಾಗಿದ್ದ ಇವಿಎಂ-ವಿವಿ ಪ್ಯಾಟ್‌ಗಳನ್ನು ಮುಂದಿನ ಲೋಕಸಭಾ ಚುನಾವಣೆಗೆ ಉಪಯೋಗಿಸಿಕೊಳ್ಳಲು ಚುನಾವಣಾ ಆಯೋಗಕ್ಕೆ ಹೈಕೋರ್ಟ್ ಅನುಮತಿ ನೀಡಿದೆ.
‘ಸಿದ್ದರಾಮಯ್ಯ ಆಯ್ಕೆಯನ್ನು ಅಸಿಂಧುಗೊಳಿಸಬೇಕು‘ ಎಂದು ಕೋರಿ ಮೈಸೂರಿನ ವರುಣಾ ಹೋಬಳಿಯ ಕೂಡನಹಳ್ಳಿ ನಿವಾಸಿ ಕೆ.ಎಂ.ಶಂಕರ್ ಸಲ್ಲಿಸಿರುವ ಚುನಾವಣಾ ತಕರಾರು ಅರ್ಜಿಯನ್ನು ನ್ಯಾಯಮೂರ್ತಿ ಎಸ್.ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಚುನಾವಣಾ ಆಯೋಗದ ಪರ ವಕೀಲ ಎಸ್.ಆರ್.ದೊಡ್ಡವಾಡ ಅವರು, ‘ಅರ್ಜಿ ವಿಚಾರಣೆಗೆ ಬಾಕಿ ಇರುವುದರಿಂದ ವರುಣಾ ಕ್ಷೇತ್ರದಲ್ಲಿ ಬಳಸಲಾಗಿದ್ದ ಇವಿಎಂ-ವಿವಿ ಪ್ಯಾಟ್‌ಗಳನ್ನು ಜಿಲ್ಲಾ ಇವಿಎಂ ವೇರ್ ಹೌಸ್‌ನಲ್ಲಿ ಇರಿಸಲಾಗಿದೆ. ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು ವರುಣಾ ಕ್ಷೇತ್ರದ ಮತದಾನಕ್ಕೆ ಬಳಸಿಕೊಳ್ಳಲಾಗಿದ್ದ 314 ಇವಿಎಂ ಹಾಗೂ 338 ವಿವಿ ಪ್ಯಾಟ್‌ಗಳನ್ನು ಲೋಕಸಭೆ ಚುನಾವಣೆಯಲ್ಲಿ ಬಳಸಲು ಅನುಮತಿ ನೀಡಬೇಕು’ ಎಂದು ಕೋರಿ ಮಧ್ಯಂತರ ಅರ್ಜಿ ಸಲ್ಲಿಸಿದರು.
‘ಇದಕ್ಕೆ ತಮ್ಮದೇನೂ ಆಕ್ಷೇಪಣೆ ಇಲ್ಲ’ ಎಂದು ಅರ್ಜಿದಾರರ ಪರ ವಕೀಲರು ತಿಳಿಸಿದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ವರುಣಾ ಕ್ಷೇತ್ರದ ಇವಿಎಂ-ವಿವಿ ಪ್ಯಾಟ್‌ಗಳನ್ನು ಮುಂದಿನ ಲೋಕಸಭಾ ಚುನಾವಣೆಗೆ ಬಳಸಿಕೊಳ್ಳಲು ಆಯೋಗಕ್ಕೆ ಅನುಮತಿ ನೀಡಿ ಮದ್ಯಂತರ ಅರ್ಜಿ ವಿಲೇವಾರಿ ಮಾಡಿತು.
ವಿಚಾರಣೆ ವೇಳೆ ಸಿದ್ದರಾಮಯ್ಯ ಪರ ವಕೀಲರು ವಾದ ಮಂಡನೆಗೆ ಮತ್ತಷ್ಟು ಕಾಲಾವಕಾಶ ಕೋರಿದರು. ಇದಕ್ಕೆ ಅರ್ಜಿದಾರರ ಪರ ವಕೀಲರು, ‘ಪದೇ ಪದೇ ಕಾಲಾವಕಾಶ ಕೇಳಲಾಗುತ್ತಿದೆ. ಪ್ರಕರಣವನ್ನು ಸುಮ್ಮನೇ ವಿಳಂಬಿಸಲಾಗುತ್ತಿದೆ‘ ಎಂದು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಇದಕ್ಕೆ ನ್ಯಾಯಪೀಠ, ಸಿದ್ದರಾಮಯ್ಯ ಪರ ವಕೀಲರನ್ನು ಸೂಕ್ಷ್ಮವಾಗಿ ಎಚ್ಚರಿಸಿ ವಿಚಾರಣೆಯನ್ನು ಇದೇ 28ಕ್ಕೆ ಮುಂದೂಡಿತು.
ಏನಿದು ಅರ್ಜಿ?: 'ಉಚಿತ ಗ್ಯಾರಂಟಿಗಳ ಆಮಿಷವೊಡ್ಡುವ ಮೂಲಕ ಚುನಾವಣಾ ಅಕ್ರಮ ಎಸಗಿ ಗೆದ್ದಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕು’ ಎಂಬುದು ಅರ್ಜಿದಾರರ ಕೋರಿಕೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.