ADVERTISEMENT

ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕಟಾರಿಯಾಗೆ ಹೈಕೋರ್ಟ್ ನೋಟಿಸ್‌

ನ್ಯಾಯಾಂಗ ನಿಂದನೆ ನೋಟಿಸ್‌

​ಪ್ರಜಾವಾಣಿ ವಾರ್ತೆ
Published 11 ಏಪ್ರಿಲ್ 2024, 0:33 IST
Last Updated 11 ಏಪ್ರಿಲ್ 2024, 0:33 IST
<div class="paragraphs"><p>ಹೈಕೋರ್ಟ್</p></div>

ಹೈಕೋರ್ಟ್

   

ಬೆಂಗಳೂರು: ‘ಅನಧಿಕೃತವಾಗಿ ಉಳುಮೆ ಮಾಡುತ್ತಿರುವ ಜಮೀನನ್ನು ಸಕ್ರಮಗೊಳಿಸಲು ಕೋರಲಾಗುವ ಅರ್ಜಿಗಳನ್ನು ಪರಿಶೀಲನೆ ನಡೆಸಿ ಸೂಕ್ತ ಆದೇಶ ಹೊರಡಿಸುವ ಸಮಿತಿಯೊಂದನ್ನು ರಚಿಸಿ ಎಂದು ಹೈಕೋರ್ಟ್ ನೀಡಿದ್ದ ಆದೇಶವನ್ನು ಪಾಲನೆ ಮಾಡಿಲ್ಲ’ ಎಂಬ ಆಕ್ಷೇಪಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ನ್ಯಾಯಾಂಗ ನಿಂದನೆ ನೋಟಿಸ್‌ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ.

ಈ ಕುರಿತಂತೆ ಮಂಗಳೂರು ತಾಲ್ಲೂಕಿನ ಹರೇಕಳ ಗ್ರಾಮದ ಜೆರೊಮ್‌ ಡಿಸೋಜ ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್‌.ವಿ. ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್‌.ದೀಕ್ಷಿತ್‌ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ.

ADVERTISEMENT

ಪ್ರತಿವಾದಿಯಾದ ರಾಜ್ಯ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್‌ ಕಟಾರಿಯಾ ಅವರಿಗೆ ನೋಟಿಸ್‌ ಜಾರಿಗೊಳಿಸಲು ಆದೇಶಿಸಿ ವಿಚಾರಣೆ ಮುಂದೂಡಿದೆ.

ಪ್ರಕರಣವೇನು?: ‘ರಾಜ್ಯದಲ್ಲಿ ಅನಧಿಕೃತವಾಗಿ ಉಳುಮೆ ಮಾಡುತ್ತಿರುವ ಜಮೀನನ್ನು ಸಕ್ರಮಗೊಳಿಸಲು ಮತ್ತು ಆ ಜಮೀನಿನಲ್ಲಿ ಉಳುಮೆ ಮುಂದುವರಿಸಲು ಅನುಮತಿ ನೀಡುವಂತೆ ಕೋರಿ ಹಲವು ಮಂದಿ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ. ಇಂತಹ ಮನವಿಗಳನ್ನು ಸಕ್ಷಮ ಸಮಿತಿಯೊಂದು ಪರಿಶೀಲನೆ ನಡೆಸುವ ಅಗತ್ಯವಿದೆ. ಹೀಗಾಗಿ, ಸಮಿತಿ ರಚಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು’ ಎಂದು ಕೋರಿ ಬಂಗಾರಪೇಟೆ ತಾಲ್ಲೂಕಿನ ಬಾವರಹಳ್ಳಿಯ ಮಂಜುನಾಥ ಸೇರಿದಂತೆ ರಾಜ್ಯದ ವಿವಿಧೆಡೆಯ 20ಕ್ಕೂ ಹೆಚ್ಚು ಜನ 2019ರಲ್ಲಿ ಹೈಕೋರ್ಟ್‌ಗೆ ರಿಟ್‌ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿಗಳ ವಿಚಾರಣೆ ನಡೆಸಿದ್ದ ಏಕಸದಸ್ಯ ನ್ಯಾಯಪೀಠ, ‘ರಾಜ್ಯ ಸರ್ಕಾರ ಅರ್ಜಿದಾರರ ಮನವಿಗೆ ಸಂಬಂಧಿಸಿದಂತೆ 2023ರ ಡಿಸೆಂಬರ್ 15ರೊಳಗೆ ಸಮಿತಿ ರಚನೆ ಮಾಡಬೇಕು’ ಎಂದು ನಿರ್ದೇಶಿಸಿ ಎಲ್ಲ ಅರ್ಜಿಗಳನ್ನು ವಿಲೇವಾರಿ ಮಾಡಿತ್ತು.

‘ಏಕಸದಸ್ಯ ನ್ಯಾಯಪೀಠ ಆದೇಶ ಹೊರಡಿಸಿ ಮೂರು ತಿಂಗಳಾದರೂ ರಾಜ್ಯ ಸರ್ಕಾರ ಸಮಿತಿ ರಚನೆ ಮಾಡಿಲ್ಲ. ಆದ್ದರಿಂದ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಕೈಗೆತ್ತಿಕೊಳ್ಳಬೇಕು’ ಎಂದು ಕೋರಿ ಜೆರೋಮ್‌ ಡಿಸೋಜ ಈ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.