ಬೆಂಗಳೂರು: ‘ಕೆಎಎಸ್ ವೃಂದದಿಂದ ಐಎಎಸ್ ವೃಂದಕ್ಕೆ ಬಡ್ತಿ ನೀಡುವ ವಿಚಾರದಲ್ಲಿ ಕೇಂದ್ರ ಆಡಳಿತ ನ್ಯಾಯಮಂಡಳಿ (ಸಿಎಟಿ) ಆದೇಶ ಪಾಲನೆ ಮಾಡಿಲ್ಲ ಎಂದು ಆರೋಪಿಸಿ ರಾಜ್ಯದ ಆರು ಮಂದಿ ಐಎಎಸ್ ಅಧಿಕಾರಿಗಳ ವಿರುದ್ಧ ದಾಖಲಿಸಲಾಗಿರುವ ನಿಂದನೆ ಪ್ರಕರಣದಲ್ಲಿ; ಹೈಕೋರ್ಟ್ ಮುಂದಿನ ಆದೇಶ ನೀಡುವತನಕ ಯಾವುದೇ ನಿರ್ಣಯ ಕೈಗೊಳ್ಳಬಾರದು’ ಎಂದು ಹೈಕೋರ್ಟ್, ಸಿಎಟಿಗೆ ನಿರ್ದೇಶಿಸಿದೆ.
‘ನಮ್ಮ ವಿರುದ್ಧದ ನಿಂದನಾ ಪ್ರಕ್ರಿಯೆ ರದ್ದುಪಡಿಸಬೇಕು’ ಎಂದು ಕೋರಿ ರಾಜ್ಯ ಸರ್ಕಾರದ ಈ ಹಿಂದಿನ ಮುಖ್ಯ ಕಾರ್ಯದರ್ಶಿಗಳಾದ ಸುಭಾಷ್ ಕುಂಠಿಯಾ, ಪಿ.ರವಿಕುಮಾರ್, ವಂದಿತ ಶರ್ಮಾ ಹಾಗೂ ಈ ಹಿಂದೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಹೊಣೆಗಾರಿಕೆ ನಿಭಾಯಿಸಿದ್ದ ಟಿ.ಕೆ.ಅನಿಲ್ ಕುಮಾರ್, ಪಿ.ಹೇಮಲತಾ, ಎಂ.ಎಸ್.ಶ್ರೀಕರ್ ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.
ಅರ್ಜಿ ಪರಿಶೀಲಿಸಿದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರು, ‘ಈ ಅರ್ಜಿಯು ನನ್ನ ಹೊರತಾದ ಮತ್ತೊಂದು ನ್ಯಾಯಪೀಠದ ಮುಂದೆ ವಿಚಾರಣೆಗೆ ನಿಗದಿಯಾಗಲಿ. ಈ ಸಂಬಂಧ ಮುಖ್ಯ ನ್ಯಾಯಮೂರ್ತಿಗಳಿಂದ ನಿರ್ದೇಶನ ಪಡೆದು ಸಂಬಂಧಪಟ್ಟ ನ್ಯಾಯಪೀಠದ ಮುಂದೆ ಇದನ್ನು ವಿಚಾರಣೆಗೆ ನಿಗದಿಪಡಿಸಬೇಕು’ ಎಂದು ಹೈಕೋರ್ಟ್ ರಿಜಿಸ್ಟ್ರಿಗೆ ನಿರ್ದೇಶಿಸಿದರು.
ಇದೇ ವೇಳೆ ಅರ್ಜಿದಾರರ ಪರ ವಕೀಲರ ಮನವಿಯಂತೆ, ‘ಹೈಕೋರ್ಟ್‌ನ ಮುಂದಿನ ಆದೇಶದವರೆಗೆ ಈ ಪ್ರಕರಣದಲ್ಲಿ ಸಿಎಟಿ ಯಾವುದೇ ನಿರ್ಣಯ ಕೈಗೊಳ್ಳಬಾರದು’ ಎಂದು ಆದೇಶಿಸಿದರು. ಅಂತೆಯೇ, ‘ಪ್ರಕರಣದಲ್ಲಿ ಈ ಹಿಂದೆ ನೀಡಿರುವ ಮಧ್ಯಂತರ ಆದೇಶ ಮುಂದಿನ ವಿಚಾರಣಾ ದಿನಾಂಕದವರೆಗೆ ಮುಂದುವರಿಯಲಿದೆ’ ಎಂದು ತಿಳಿಸಿ ವಿಚಾರಣೆ ಮುಂದೂಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.