ಬೆಂಗಳೂರು: ‘ಭೋವಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಣದ ಅವ್ಯವಹಾರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಆರೋಪಿಯಾಗಿದ್ದ ವಕೀಲೆ ಎಸ್.ಜೀವಾ ಅವರ ಆತ್ಮಹತ್ಯೆ ಪ್ರಕರಣದ ತನಿಖಾ ಪ್ರಗತಿಯ ವಿವರಗಳನ್ನು ನ್ಯಾಯಾಲಯಕ್ಕೆ ಒದಗಿಸಿ’ ಎಂದು ಹೈಕೋರ್ಟ್, ರಾಜ್ಯ ಪ್ರಾಸಿಕ್ಯೂಷನ್‌ಗೆ ಆದೇಶಿಸಿದೆ.
‘ಭೋವಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದ ಆರೋಪಕ್ಕೆ ಸಂಬಂಧಿಸಿದಂತೆ ನನ್ನ ವಿರುದ್ಧ ಸಿದ್ದಾಪುರ ಪೊಲಿಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ರದ್ದುಪಡಿಸಬೇಕು’ ಎಂದು ಕೋರಿ ವಕೀಲೆ ಎಸ್.ಜೀವಾ ಅವರು 2023ರ ಆಗಸ್ಟ್ 24 ರಂದು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್, ‘ತನಿಖೆ ನಡೆಸುತ್ತಿರುವ ಸಿಐಡಿ ತನಿಖಾಧಿಕಾರಿಗಳ ಮುಂದೆ ನವೆಂಬರ್ 14 ರಂದು ಹಾಜರಾಗಿ ತನಿಖೆಗೆ ಸಹಕಾರ ನೀಡಬೇಕು. ವಿಚಾರಣಾ ಪ್ರಕ್ರಿಯೆಯನ್ನು ವಿಡಿಯೋಗ್ರಾಫ್ ಮಾಡಿ ಅದರ ವರದಿಯನ್ನು ಕೋರ್ಟ್‌ಗೆ ಸಲ್ಲಿಸಬೇಕು’ ಎಂದು 2024ರ ನವೆಂಬರ್ 11 ರಂದು ಆದೇಶಿಸಿತ್ತು.
ಏತನ್ಮಧ್ಯೆ, ‘2024ರ ನವೆಂಬರ್ 22ರಂದು ಮುಂಜಾನೆ ಜೀವಾ ಅವರು ತಮ್ಮ ಮನೆಯಲ್ಲಿ ನೇಣು ಬಿಗಿದುಕೊಡು ಆತ್ಮಹತ್ಯೆಗೆ ಶರಣಾಗಿದ್ದಾರೆ’ ಎಂದು ಬೆಂಗಳೂರು ವಕೀಲರ ಸಂಘವು, ಜೀವಾ ಅವರು ಸಲ್ಲಿಸಿದ್ದ ಮೂಲ ಅರ್ಜಿಗೆ ಪೂರಕವಾಗಿ ಸೋಮವಾರ ಮಧ್ಯಂತರ ಅರ್ಜಿಯೊಂದನ್ನು ಹೈಕೋರ್ಟ್‌ಗೆ ಸಲ್ಲಿಸಿತು.
ಈ ಮಧ್ಯಂತರ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಸಂಘದ ಅಧ್ಯಕ್ಷರೂ ಆದ ಹಿರಿಯ ವಕೀಲ ವಿವೇಕ್ ರೆಡ್ಡಿ ಸುದೀರ್ಘ ವಾದ ಮಂಡಿಸಿ, ‘ಪ್ರಕರಣದ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಿ ಆದೇಶಿಸಬೇಕು’ ಎಂದು ಮನವಿ ಮಾಡಿದರು.
ಇದನ್ನು ಪರಿಗಣಿಸಿದ ನ್ಯಾಯಪೀಠ, ‘ಪ್ರಕರಣದ ತನಿಖೆಯ ಸಮಗ್ರ ವಿವರಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿ’ ಎಂದು ರಾಜ್ಯ ಹೆಚ್ಚುವರಿ ಪ್ರಾಸಿಕ್ಯೂಟರ್ ಬಿ.ಎನ್.ಜಗದೀಶ್ ಅವರಿಗೆ ಸೂಚಿಸಿ ವಿಚಾರಣೆಯನ್ನು ಇದೇ 27ಕ್ಕೆ ಮುಂದೂಡಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.