ಬೆಂಗಳೂರು: ‘ಮಲ ಹೊರುವ ಪದ್ಧತಿಯನ್ನು ನಿಷೇಧಿಸಲಾಗಿದ್ದರೂ ಅದನ್ನು ಜೀವಂತವಾಗಿ ಇರಿಸಲಾಗಿದೆ ಮತ್ತು ಇಂತಹ ಪ್ರಕರಣಗಳಲ್ಲಿ ಯಾರೊಬ್ಬರಿಗೂ ಯಾಕೆ ಶಿಕ್ಷೆಯಾಗಿಲ್ಲ’ ಎಂದು ಖಾರವಾಗಿ ಪ್ರಶ್ನಿಸಿರುವ ಹೈಕೋರ್ಟ್, ‘ಇದೊಂದು ರೀತಿಯಲ್ಲಿ ನ್ಯಾಯದ ವಿಡಂಬನೆಯಾಗಿದ್ದು, ಸರ್ಕಾರದ ಕಾರ್ಯದರ್ಶಿಗೆ ಶಿಕ್ಷೆ ವಿಧಿಸದೇ ಹೋದರೆ ಏನೂ ಸುಧಾರಣೆಯಾಗುವುದಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದೆ.
ಈ ಕುರಿತ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ವಿಭಾಗೀಯ ಸೋಮವಾರ ವಿಚಾರಣೆ ನಡೆಸಿ, ‘ಮಲ ಹೊರುವುದಕ್ಕೆ ಪರಿಶಿಷ್ಟ ಜಾತಿಯ ಜನರನ್ನು ಬಳಕೆ ಮಾಡಿದಾಗ, ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೇಲಿನ ದೌರ್ಜನ್ಯ ನಿಷೇಧ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲು ಅವಕಾಶವಿದ್ದರೂ ಅದನ್ನು ಬಳಕೆ ಮಾಡುತ್ತಿಲ್ಲ’ ಎಂದು ಆಕ್ಷೇಪ ವ್ಯಕ್ತಪಡಿಸಿತು.
ವಿಚಾರಣೆ ವೇಳೆ ಅಮಿಕಸ್ ಕ್ಯೂರಿ (ನ್ಯಾಯಾಲಯಕ್ಕೆ ಸಹಕರಿಸುವ ವಕೀಲ) ಶ್ರೀಧರ್ ಪ್ರಭು, ‘ಮಲ ಹೊರುವ ಪದ್ಧತಿಯಲ್ಲಿ ತೊಡಗಿರುವವರಿಗೆ ಪುನರ್ವಸತಿ ಕಲ್ಪಿಸಬೇಕು ಮತ್ತು ಮಲ ಸ್ವಚ್ಛತೆಗೆ ತಂತ್ರಜ್ಞಾನ ಬಳಕೆ ಮಾಡಬೇಕು’ ಎಂದರು.
ಇದಕ್ಕೆ ಅಡ್ವೊಕೇಟ್ ಜನರಲ್ ಕೆ.ಶಶಿಕಿರಣ್ ಶೆಟ್ಟಿ ಅವರು ‘ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಮಲ ಸ್ವಚ್ಛತೆಗೆ ಸರ್ಕಾರ ಯಂತ್ರಗಳ ಖರೀದಿ ಪ್ರಕ್ರಿಯೆ ಆರಂಭಿಸಿದೆ’ ಎಂದು ಪ್ರತಿಕ್ರಿಯಿಸಿದರು.
ಇದಕ್ಕೆ ಮುಖ್ಯ ನ್ಯಾಯಮೂರ್ತಿ ವರಾಳೆ ಅವರು, ‘ಈ ಕೆಲಸಕ್ಕೆ ಬೃಹತ್ ಕಂಪೆನಿಗಳ ಕಾರ್ಪೋರೇಟ್ ಸಾಮಾಜಿಕ ಹೊಣೆಗಾರಿಕೆ ನಿಧಿ (ಸಿಎಸ್‌ಆರ್) ಬಳಕೆ ಮಾಡಬಹುದು. ಯಾಂತ್ರಿಕ ವ್ಯವಸ್ಥೆಗೆ ಜೋತು ಬಿದ್ದು ಮಂದಗತಿಗೆ ಆಸ್ಪದ ನೀಡುವಂತಾಗಬಾರದು’ ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.
ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರಂತೂ ವಿಚಾರಣೆಯ ಒಂದು ಹಂತದಲ್ಲಿ, ‘ಮಲ ಹೊರುವ ಪದ್ಧತಿ ನಿಷೇಧಿಸಿ 2013ರಲ್ಲೇ ಕಾಯ್ದೆ ಜಾರಿಗೆ ತರಲಾಗಿದೆ. ಆದರೂ ಸರ್ಕಾರ ಆರೋಪಿಗಳಿಗೆ ಶಿಕ್ಷೆಯಾಗುವಂತೆ ನೋಡಿಕೊಳ್ಳುತ್ತಿಲ್ಲ. ಮಹತ್ವ ಇಲ್ಲದ ಪ್ರಕರಣಗಳಲ್ಲಿ ಶಿಕ್ಷೆಯಾಗುತ್ತದೆ. ಇಂತಹ ಪ್ರಕರಣಗಳಲ್ಲಿ ಮಾತ್ರ ಕ್ರಮವೇ ಇಲ್ಲವಾಗಿದೆ. ಇಂತಹ ಪ್ರಕರಣದ ವಿಚಾರಣೆಯಲ್ಲಿ ಕಳಪೆ ಸಾಮರ್ಥ್ಯ ಪ್ರದರ್ಶಿಸಿದ ಪ್ರಾಸಿಕ್ಯೂಷನ್ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗಿದೆ’ ಎಂದು ಕಿಡಿ ಕಾರಿದರು.
ರಾಜ್ಯದ ಕೆಲವೆಡೆ ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದ ಅರ್ಜಿಯನ್ನೂ ಇದೇ ಪ್ರಕರಣದ ಜೊತೆ ಸೇರ್ಪಡೆ ಮಾಡಲು ಆದೇಶಿಸಿದ ನ್ಯಾಯಪೀಠ, ಪ್ರತಿವಾದಿಗಳಾದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಆಕ್ಷೇಪಣೆ ಸಲ್ಲಿಸಲು ಆದೇಶಿಸಿತು. ವಿಚಾರಣೆಯನ್ನು ಇದೇ 30ಕ್ಕೆ ಮುಂದೂಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.