ಧಾರವಾಡ: ಕೊವಿಡ್ ಕಾರಣಕ್ಕೆ ಕೊನೆಯ ವರ್ಷದ ವಿದ್ಯಾರ್ಥಿಗಳನ್ನು ಹೊರತುಪಡಿಸಿ, ಉಳಿದ ಮಧ್ಯಂತರ ಸೆಮಿಸ್ಟರ್ ವಿದ್ಯಾರ್ಥಿಗಳನ್ನು ಆಂತರಿಕ ಮೌಲ್ಯಮಾಪನದ ಆಧಾರದಲ್ಲಿ ಮುಂದಿನ ತರಗತಿಗಳಿಗೆ ಬಡ್ತಿ ನೀಡುವಂತೆ ಯುಜಿಸಿ, ಸರ್ಕಾರ ಸೂಚಿಸಿದ್ದರೂ ಪರೀಕ್ಷೆ ನಡೆಸಲು ಸಿದ್ಧತೆ ನಡೆಸಿದ್ದ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಕ್ರಮಕ್ಕೆ ಹೈಕೋರ್ಟ್ ತಡೆ ನೀಡಿದೆ.
ಪರೀಕ್ಷೆ ನಡೆಸಲು ತೀರ್ಮಾನಿಸಿದ್ದ ವಿಶ್ವವಿದ್ಯಾಲಯದ ನಿರ್ಣಯವನ್ನು ಪ್ರಶ್ನಿಸಿ ಮೂರು ವರ್ಷಗಳ ಅವಧಿಯ 2ನೇ ಸೆಮಿಸ್ಟರ್ ವಿದ್ಯಾರ್ಥಿಗಳು ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ದಾಖಲಿಸಿದ್ದರು.
ಕೋವಿಡ್ ಕಾರಣದಿಂದ ಕಾಲೇಜುಗಳಲ್ಲಿ ತರಗತಿಗಳು ನಡೆದಿಲ್ಲ. ಹಲವಾರು ಕಾರಣಗಳಿಂದ ಆನ್‌ಲೈನ್ ತರಗತಿಗಳು ವಿದ್ಯಾರ್ಥಿಗಳನ್ನು ತಲುಪಲು, ಪರೀಕ್ಷೆಗೆ ಸಿದ್ಧಗೊಳ್ಳಲು ಸಾಧ್ಯವಾಗಿಲ್ಲ. ಹೀಗಾಗಿ ಮಧ್ಯಂತರ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಭೌತಿಕ ಪರೀಕ್ಷೆ ನಡೆಸದೆ ಆಂತರಿಕ ಮೌಲ್ಯಮಾಪನ ಆಧಾರದಲ್ಲಿ ಮುಂದಿನ ತರಗತಿಗಳಿಗೆ ಬಡ್ತಿ ನೀಡುವಂತೆ ಯುಜಿಸಿ, ರಾಜ್ಯ ಸರ್ಕಾರದ ಉನ್ನತ ಶಿಕ್ಷಣ ಇಲಾಖೆ ಎಲ್ಲ ವಿಶ್ವವಿದ್ಯಾಲಯಗಳಿಗೆ ಸೂಚನೆ ನೀಡಿದ್ದವು. ಎಲ್ಲಾ ವಿಶ್ವವಿದ್ಯಾಲಯಗಳು ಇದನ್ನು ಅನುಸರಿಸಿದ್ದರೂ, ಕಾನೂನು ವಿಶ್ವವಿದ್ಯಾಲಯದ 2ನೇ ಸೆಮಿಸ್ಟರ್ ಪರೀಕ್ಷೆ ನಡೆಸಲು ಮುಂದಾಗಿದೆ. ಇದು ವಿದ್ಯಾರ್ಥಿ ವಿರೋಧಿ ಧೋರಣೆ ಮತ್ತು ಸಮಾನತೆಯ ತತ್ವಕ್ಕೆ ವಿರುದ್ಧವಾಗಿದೆ ಎಂದು ಆರೋಪಿಸಿ ಇಲ್ಲಿನ ಕೆಪಿಇಎಸ್ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಇತರ ಕಾಲೇಜುಗಳ ವಿದ್ಯಾರ್ಥಿಗಳು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಈ ಹಿಂದೆ ಕಾನೂನು ವಿಶ್ವವಿದ್ಯಾಲಯವು 2021ರ ಅ. 21ರಂದು ಪರೀಕ್ಷೆ ನಿಗದಿಪಡಿಸಿತ್ತು. ಇದನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದಾಗ ಅ. 13ರಂದು ಪರೀಕ್ಷಾ ಅಧಿಸೂಚನೆಯನ್ನು ವಿಶ್ವವಿದ್ಯಾಲಯ ಹಿಂಪಡೆದಿತ್ತು. ಇದೀಗ ಮತ್ತೆ ಇದೇ 15ರಿಂದ ಪರೀಕ್ಷೆ ನಡೆಸಲು ವೇಳಾಪಟ್ಟಿ ಪ್ರಕಟಿಸಿದೆ.
ರಿಟ್ ಅರ್ಜಿ ಸಲ್ಲಿಸಿದ್ದ ವಿದ್ಯಾರ್ಥಿಗಳು ಈ ಸಂಗತಿಯನ್ನು ನ್ಯಾಯಾಲಯದ ಗಮನಕ್ಕೆ ತಂದು, ಪರೀಕ್ಷೆಗೆ ತಡೆ ನೀಡುವಂತೆ ಮನವಿ ಮಾಡಿದ್ದರು. ವಿದ್ಯಾರ್ಥಿಗಳ ಮನವಿ ಪರಿಗಣಿಸಿದ ನ್ಯಾಯಮೂರ್ತಿ ಎನ್.ಎಸ್.ಸಂಜಯಗೌಡ ಅವರಿದ್ದ ನ್ಯಾಯಪೀಠ ಪರೀಕ್ಷೆಗೆ ತಡೆ ನೀಡಿ, ವಿಚಾರಣೆ ಮುಂದೂಡಿದೆ.
ಅರ್ಜಿದಾರ ವಿದ್ಯಾರ್ಥಿಗಳ ಪರವಾಗಿ ದಯಾನಂದ ಬಂಡಿ ಮತ್ತು ವಿಜಯ ಮಳಲಿ ವಕಾಲತ್ತುವಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.