ADVERTISEMENT

ಒಳಮೀಸಲಾತಿ ಅನುಷ್ಠಾನಕ್ಕಿದ್ದ ಅಡ್ಡಿ ನಿವಾರಣೆಯಾಗಿದೆ: ಸಿಎಂ ಸಿದ್ದರಾಮಯ್ಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 1 ಆಗಸ್ಟ್ 2024, 13:26 IST
Last Updated 1 ಆಗಸ್ಟ್ 2024, 13:26 IST
ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ   

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಹಿಂದುಳಿದ ವರ್ಗಗಳನ್ನು ಗುರುತಿಸಿ ಒಳ ಮೀಸಲಾತಿ ನೀಡುವ ರಾಜ್ಯಗಳ ಅಧಿಕಾರವನ್ನು ಎತ್ತಿಹಿಡಿದಿರುವ ಸುಪ್ರೀಂ ಕೋರ್ಟ್ ತೀರ್ಪನ್ನು ಸ್ವಾಗತಿಸಿರುವ ಸಿಎಂ ಸಿದ್ದರಾಮಯ್ಯ ‘ಇದೊಂದು ಐತಿಹಾಸಿಕವಾದ ತೀರ್ಪು’ ಎಂದಿದ್ದಾರೆ. 

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, ‘ಪರಿಶಿಷ್ಟರಲ್ಲಿ ಅತಿಹಿಂದುಳಿದವರನ್ನು ಗುರುತಿಸಿ ಒಳಮೀಸಲಾತಿ ನೀಡುವ ರಾಜ್ಯ ಸರ್ಕಾರಗಳ ಅಧಿಕಾರವನ್ನು ಎತ್ತಿಹಿಡಿದು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಐತಿಹಾಸಿಕವಾದುದ್ದಾಗಿದೆ. ನ್ಯಾಯಾಲಯದ ಈ ತೀರ್ಪನ್ನು ನಾನು ಮುಕ್ತವಾಗಿ ಸ್ವಾಗತಿಸುತ್ತೇನೆ. ಸುಪ್ರೀಂ ಕೋರ್ಟ್ ತೀರ್ಪಿನಿಂದಾಗಿ ಒಳಮೀಸಲಾತಿ ಅನುಷ್ಠಾನದ ಹಾದಿಯಲ್ಲಿನ ಮುಖ್ಯ ಅಡ್ಡಿಯೊಂದು ನಿವಾರಣೆಯಾಗಿದೆ’ ಎಂದಿದ್ದಾರೆ.

‘ತೀರ್ಪಿನಲ್ಲಿರುವ ವಿವಾದಾತ್ಮಕ ಕೆನೆಪದರದ ಬಗೆಗಿನ ಅಂಶವೂ ಸೇರಿದಂತೆ ಇತರ ವಿಷಯಗಳ ಬಗ್ಗೆ ಪರಿಶಿಷ್ಟ ಜಾತಿಯ ನಾಯಕರು ಮತ್ತು ಕಾನೂನು ತಜ್ಞರ ಜೊತೆ ಸಮಾಲೋಚನೆ ನಡೆಸಿ ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳಲಾಗುವುದು. ಪರಿಶಿಷ್ಟ ಜಾತಿಯೊಳಗೆ ಒಳಮೀಸಲಾತಿ ಕಲ್ಪಿಸುವ ಬಗ್ಗೆ ಕಾಂಗ್ರೆಸ್ ಪಕ್ಷ ಬದ್ಧವಾಗಿದೆ. ಹಿಂದೆ ಕಾಂಗ್ರೆಸ್ ಪಕ್ಷದ ಸರ್ಕಾರವೇ ರಚಿಸಿದ್ದ ನ್ಯಾ.ಎ.ಜೆ.ಸದಾಶಿವ ಅವರ ಅಧ್ಯಕ್ಷತೆಯ ಆಯೋಗದ ವರದಿಯನ್ನು ಅನುಷ್ಠಾನಗೊಳಿಸುವುದಾಗಿ ನಾವು ಕಳೆದ ವಿಧಾನಸಭಾ ಚುನಾವಣೆಯಲ್ಲಿನ ಪಕ್ಷದ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗೆ ಸರ್ಕಾರ ಬದ್ಧವಾಗಿದೆ’ ಎಂದಿದ್ದಾರೆ

ADVERTISEMENT

‘ಈ ನಡುವೆ ಕಳೆದ ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ರಾಜ್ಯದ ಬಿಜೆಪಿ ಸರ್ಕಾರ ಒಳಮೀಸಲಾತಿ ಬಗ್ಗೆ ಅವಸರದಲ್ಲಿ ತೀರ್ಮಾನ ಕೈಗೊಂಡು ಕೇಂದ್ರ ಸರ್ಕಾರಕ್ಕೆ ಕಳುಹಿಸಿಕೊಟ್ಟಿತ್ತು. ಪರಿಶಿಷ್ಟ ಜಾತಿಯೊಳಗಿನ ಮೀಸಲಾತಿಯನ್ನು ಸಂವಿಧಾನ ತಿದ್ದುಪಡಿಯ ಮೂಲಕ ಅನುಷ್ಠಾನಗೊಳಿಸಬಹುದು ಎಂದು ಕೇಂದ್ರ ಬಿಜೆಪಿ ಸರ್ಕಾರವೇ ರಚಿಸಿದ್ದ ಉಷಾ ಮೆಹ್ರಾ ಸಮಿತಿ ಸ್ಪಷ್ಟವಾಗಿ ತಿಳಿಸಿದ್ದರೂ ಕೇಂದ್ರ ಸರ್ಕಾರ ಇಲ್ಲಿಯ ವರೆಗೆ ತೀರ್ಮಾನ ಕೈಗೊಳ್ಳದೆ ಮೂಲೆಗೆ ಸರಿಸಿತ್ತು. ಈಗಿನ ಸುಪ್ರೀಂ ಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ನ್ಯಾ.ಎ.ಜೆ.ಸದಾಶಿವ ಆಯೋಗದ ಶಿಫಾರಸುಗಳನ್ನು ಕೂಲಂಕಷವಾಗಿ ಅಧ್ಯಯನ ನಡೆಸಿ, ಅಗತ್ಯ ಬಿದ್ದರೆ ಇದಕ್ಕೆ ಸಂಬಂಧಿಸಿದಂತೆ ಇತ್ತೀಚಿನ ಬೆಳವಣಿಗೆಗಳನ್ನು ಪರಿಗಣನೆಗೆ ತೆಗೆದುಕೊಂಡು ಸಮಾಲೋಚನೆ-ಸಂಧಾನದ ಮೂಲಕ ಒಳಮೀಸಲಾತಿ ಬಗ್ಗೆ ಸ್ಪಷ್ಟವಾದ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಳ್ಳಲಿದೆ’ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.