ಹುಬ್ಬಳ್ಳಿ: ‘ಮಾಜಿ ಸಚಿವ ಕೆ.ಎಸ್. ಈಶ್ವಪ್ಪ ಅವರ ಮೇಲೆ ಭ್ರಷ್ಟಾಚಾರ ಪ್ರಕರಣ ದಾಖಲಿಸಬೇಕು ಹಾಗೂ ಬಂಧಿಸಬೇಕು. ಈ ಸಂಬಂಧ ನ್ಯಾಯಾಲಯದ ಮೊರೆ ಹೋಗುತ್ತೇವೆ’ ಎಂದು ವಿಧಾನಪರಿಷತ್ ಸದಸ್ಯ ಸಲೀಂ ಅಹ್ಮದ್ ಹೇಳಿದರು.
ಸೋಮವಾರ ನವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಂತೋಷ ಪಾಟೀಲ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಶ್ವರಪ್ಪ ಅವರು ಸಾಕ್ಷಿ ಕೊಡಿ ಎಂದು ಕೇಳುತ್ತಿದ್ದಾರೆ. ಅಂಗೈ ಹುಣ್ಣಿಗೆ ಸಾಕ್ಷಿಬೇಕೇ. ಇಡೀ ರಾಜ್ಯಕ್ಕೆ ಬಿಜೆಪಿ ಶೇ40 ಪರ್ಸೆಂಟ್ ಕಮಿಷನ್ ಸರ್ಕಾರ ಎಂದು ತಿಳಿದಿದೆ’ ಎಂದು ಹೇಳಿದರು.
‘ಬಿಜೆಪಿ ಕಾರ್ಯಕರ್ತ ಹಾಗೂ ಗುತ್ತಿಗೆದಾರರಾಗಿದ್ದ ಸಂತೋಷ ಪಾಟೀಲ ಅವರು ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಇದನ್ನು ಹೇಳಿದ್ದಾರೆ. ಗುತ್ತಿಗೆದಾರರ ಸಂಘದ ಅಧ್ಯಕ್ಷರು ಸಹ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದರು. ಆದರೆ, ಪ್ರಧಾನಿ ನರೇಂದ್ರ ಮೋದಿ ಕ್ರಮ ಕೈಗೊಳ್ಳಲಿಲ್ಲ. ಈ ಸರ್ಕಾರಕ್ಕೆ ಬದ್ಧತೆ ಇಲ್ಲ’ ಎಂದು ದೂರಿದರು.
‘ಹುಬ್ಬಳ್ಳಿ ಗಲಭೆಗೆ ಸಂಬಂಧಿಸಿದಂತೆ ವಿಡಿಯೊ ಪೋಸ್ಟ್ ಮಾಡಿಸಿದವರು ಯಾರು, ಇದರ ಹಿಂದೆ ಯಾರಿದ್ದಾರೆ ಎನ್ನುವುದರ ಬಗ್ಗೆ ತನಿಖೆಯಾಗಬೇಕು. ಗಲಭೆ ಮತ್ತು ಕಲ್ಲು ತೂರಾಟದ ಸಂದರ್ಭದಲ್ಲಿ ವಿದ್ಯುತ್ ಕಡಿತ ಮಾಡಲಾಗಿದೆ. ಕೆಲವರು ಮುಖ ಮುಚ್ಚಿಕೊಂಡು ಕಲ್ಲು ತೂರಾಟ ನಡೆಸಿದ್ದಾರೆ. ನಾನು ಬಿಜೆಪಿ ನಾಯಕರಂತೆ ಬೇಜವಾಬ್ದಾರಿ ಹೇಳಿಕೆ ನೀಡುವುದಿಲ್ಲ. ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಾಯಕರನ್ನು ಬಂಧಿಸಬಾರದು. ಅಮಾಯಕರಿಗೆ ಕಿರುಕುಳ ನೀಡಬಾರದು. ಆದರೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿ’ ಎಂದು ಹೇಳಿದರು.
‘ಕಳೆದ ಐದಾರು ತಿಂಗಳಿಂದ ಕೊಮುಗಲಭೆ ಪ್ರಕರಣಗಳು ಹೆಚ್ಚಾಗುತ್ತಿವೆ. ಇದರ ಹಿಂದೆ ಕಾಣದ ಕೈಗಳ ಕೈವಾಡವಿದೆ ’ ಎಂದು ಆಗ್ರಹಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.