ADVERTISEMENT

ಅಕ್ರಮ ಕಸಾಯಿ ಖಾನೆ: ಕಟ್ಟುನಿಟ್ಟಿನ ಕ್ರಮಕ್ಕೆ ಹೈಕೋರ್ಟ್‌ ನಿರ್ದೇಶನ

​ಪ್ರಜಾವಾಣಿ ವಾರ್ತೆ
Published 1 ಡಿಸೆಂಬರ್ 2021, 16:23 IST
Last Updated 1 ಡಿಸೆಂಬರ್ 2021, 16:23 IST
ಸಾಂದರ್ಭಿಕ ಚಿತ್ರ (ಕೃಪೆ: ಐಸ್ಟಾಕ್‌)
ಸಾಂದರ್ಭಿಕ ಚಿತ್ರ (ಕೃಪೆ: ಐಸ್ಟಾಕ್‌)   

ಬೆಂಗಳೂರು: ‘ರಾಜ್ಯದ ಯಾವುದೇ ಜಿಲ್ಲೆಯಲ್ಲಿ ಪ್ರಾಣಿಗಳನ್ನು ಅಕ್ರಮವಾಗಿ ವಧೆ ಮಾಡುವುದಾಗಲಿ ಅಥವಾ ಬಲಿ ಕೊಡುವುದಾಗಲಿ ನಡೆಯದಂತೆ ನೋಡಿಕೊಳ್ಳಬೇಕು ಮತ್ತು ಅಕ್ರಮ ಕಸಾಯಿಖಾನೆಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು’ ಎಂದು ಹೈಕೋರ್ಟ್‌, ರಾಜ್ಯ ಸರ್ಕಾರಕ್ಕೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ.

‘ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ಅಬ್ದುಲ್ ಹಕ್ ಎಂಬುವರು ಅನಧಿಕೃತವಾಗಿ ಕಸಾಯಿಖಾನೆಗಳನ್ನು ನಡೆಸುತ್ತಿದ್ದಾರೆ. ಇವರು ಬೆಂಗಳೂರು, ರಾಮನಗರ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಿಗೆ ಅಕ್ರಮವಾಗಿ ದನದ ಮಾಂಸ ರಫ್ತು ಮಾಡುತ್ತಿದ್ದಾರೆ’ ಎಂದು ಆರೋಪಿಸಿ ನವದೆಹಲಿಯ ‘ಗೋ ಜ್ಞಾನ ಫೌಂಡೇಷನ್’ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿ ಈ ಆದೇಶ ನೀಡಿದೆ.

‘ಈ ವಿಷಯದಲ್ಲಿ ನಿರ್ಲಕ್ಷ್ಯ ಮಾಡಿದರೆ ಸಂಬಂಧಪಟ್ಟ ಅಧಿಕಾರಿಗಳೇ ಹೊಣೆ ಆಗುತ್ತಾರೆ’ ಎಂದು ರಾಜ್ಯ ಸರ್ಕಾರಕ್ಕೆ ತಾಕೀತು ಮಾಡಿದ ನ್ಯಾಯಪೀಠ ಅರ್ಜಿ ವಿಲೇವಾರಿ ಮಾಡಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.