ADVERTISEMENT

ಜನರ ಬದುಕಿಗೆ ಸುಧಾರಣೆ ತಂದ ಗ್ಯಾರಂಟಿ: ರಾಜ್ಯಪಾಲ ಥಾವರಚಂದ್‌ ಗೆಹಲೋತ್

​ಪ್ರಜಾವಾಣಿ ವಾರ್ತೆ
Published 26 ಜನವರಿ 2024, 16:07 IST
Last Updated 26 ಜನವರಿ 2024, 16:07 IST
ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣಿಕ್‌ ಷಾ ಪರೇಡ್ ಮೈದಾನದಲ್ಲಿ ಶುಕ್ರವಾರ ರಾಜ್ಯಪಾಲ ಥಾವರಚಂದ್ ಗೆಹಲೋತ್‌ ಅವರು ಗೌರವ ವಂದನೆ ಸ್ವೀಕರಿಸಿದರು –ಪ್ರಜಾವಾಣಿ ಚಿತ್ರ/ ಪ್ರಶಾಂತ್ ಎಚ್.ಜಿ.
ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣಿಕ್‌ ಷಾ ಪರೇಡ್ ಮೈದಾನದಲ್ಲಿ ಶುಕ್ರವಾರ ರಾಜ್ಯಪಾಲ ಥಾವರಚಂದ್ ಗೆಹಲೋತ್‌ ಅವರು ಗೌರವ ವಂದನೆ ಸ್ವೀಕರಿಸಿದರು –ಪ್ರಜಾವಾಣಿ ಚಿತ್ರ/ ಪ್ರಶಾಂತ್ ಎಚ್.ಜಿ.   

ಬೆಂಗಳೂರು: ಐದು ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನದಿಂದಾಗಿ ಸಾಮಾನ್ಯ ಜನರ ಬದುಕಿನ ಮಟ್ಟದಲ್ಲಿ ಸುಧಾರಣೆ ಕಾಣುತ್ತಿದೆ ಎಂದು ರಾಜ್ಯಪಾಲ ಥಾವರಚಂದ್‌ ಗೆಹಲೋತ್ ಹೇಳಿದರು. 

ಫೀಲ್ಡ್‌ ಮಾರ್ಷಲ್‌ ಮಾಣಿಕ್‌ ಷಾ ಪರೇಡ್‌ ಮೈದಾನದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ 75ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಐದು ಗ್ಯಾರಂಟಿಗಳನ್ನು ಜಾರಿಗೊಳಿಸುವುದಾಗಿ ಸರ್ಕಾರ ಭರವಸೆ ನೀಡಿತ್ತು. ಕೊಟ್ಟ ಮಾತಿನಂತೆ ಎಲ್ಲಾ ಐದು ಗ್ಯಾರಂಟಿಗಳೂ ಅನುಷ್ಠಾನಗೊಂಡಿವೆ ಎಂದು ಹೇಳಿದರು. ಬರ ಪರಿಹಾರಕ್ರಮಗಳನ್ನು ಕೈಗೊಳ್ಳಲು ರಾಜ್ಯ ಸರ್ಕಾರ ರಾಷ್ಟ್ರೀಯ ವಿಪತ್ತು ನಿಧಿಯಿಂದ ಅನುದಾನ ಕೋರಲಾಗಿದೆ. ತಕ್ಷಣದ ಪರಿಹಾರವಾಗಿ 30 ಲಕ್ಷ ರೈತರಿಗೆ ₹580 ಕೋಟಿ ಬಿಡುಗಡೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

ADVERTISEMENT

ಮೇಕೆದಾಟು ಸಮತೋಲನ ಜಲಾಶಯ ಹಾಗೂ ಕುಡಿಯುವ ನೀರಿನ ಯೋಜನೆಯನ್ನು ತ್ವರಿತವಾಗಿ ಅನುಷ್ಠಾನಗೊಳಿಸಲು ಭೂಸ್ವಾಧೀನ ಪ್ರಕ್ರಿಯೆ ಚುರುಕುಗೊಳಿಸಲಾಗಿದೆ. ರಾಜ್ಯದ ನೀರಾವರಿ ಯೋಜನೆಗಳಿಗೆ ಒತ್ತು ನೀಡಲಾಗಿದೆ. ಮೇಕೆದಾಟು ಯೋಜನೆಗೆ ಬಳಸಿಕೊಳ್ಳುವ ಅರಣ್ಯಕ್ಕೆ ಪರ್ಯಾಯ ಭೂಮಿ ಹಸ್ತಾಂತರಿಸಲು ಕ್ರಮ ಕೈಗೊಳ್ಳಲಾಗಿದೆ. ಎತ್ತಿನಹೊಳೆ ಯೋಜನೆಯ ಮೊದಲನೇ ಹಂತದ ಕಾಮಗಾರಿಗಳು ಬಹುತೇಕ ಪೂರ್ಣಗೊಂಡಿವೆ. ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತದ ಕಾಮಗಾರಿಗಾಗಿ ಭೂಸ್ವಾಧೀನ, ಪುನರ್ವಸತಿ ಪ್ರಕ್ರಿಯೆಗಳು ವೇಗ ಪಡೆದಿವೆ. ನೀರಾವರಿ ಯೋಜನೆಗಳಿಗೆ 2023ರ ಅಂತ್ಯದವರೆಗೆ ₹9223.24 ಕೋಟಿ ವ್ಯಯಿಸಲಾಗಿದೆ ಎಂದು ವಿವರಿಸಿದರು.

ಬೆಂಗಳೂರಿನ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಪ್ರಮುಖ ರಸ್ತೆಗಳಿಗೆ ₹2 ಸಾವಿರ ಕೋಟಿ ವೆಚ್ಚದಲ್ಲಿ ವೈಟ್‌ಟಾಪಿಂಗ್‌ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ಆಯ್ದ ಸ್ಥಳಗಳಲ್ಲಿ ಸುರಂಗ ರಸ್ತೆಗಳನ್ನು ನಿರ್ಮಿಸಲು ಯೋಜನೆ ರೂಪಿಸಲಾಗಿದ್ದು,  ಪ್ರಾಯೋಗಿಕವಾಗಿ 2 ಕಿ.ಮೀ ರಸ್ತೆ ನಿರ್ಮಾಣಕ್ಕೆ ಸಮಗ್ರ ಯೋಜನಾ ವರದಿ ಸಿದ್ಧಪಡಿಸಲಾಗುತ್ತಿದೆ ಎಂದು ತಿಳಿಸಿದರು.

ದೇಶದ ಸಾಫ್ಟ್‌ವೇರ್‌ ರಫ್ತಿನಲ್ಲಿ ಕರ್ನಾಟಕದ ಕೊಡುಗೆ ಶೇ 42ರಷ್ಟಿದೆ. ಮಾಹಿತಿ ತಂತ್ರಜ್ಞಾನ ವಲಯದ ಬದಲಾಗುತ್ತಿರುವ ಅಗತ್ಯತೆಗಳಿಗೆ ಅನುಗುಣವಾಗಿ ಸರ್ಕಾರ ತನ್ನ ನೀತಿಗಳನ್ನು ಪರಿಷ್ಕರಿಸುತ್ತಾ ಸಾಗಿದೆ. ಹಾಗಾಗಿ, ಇಂದು ಕರ್ನಾಟಕ ದೇಶದ ಗಮನ ಸೆಳೆಯುತ್ತಿದೆ ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ.ದಯಾನಂದ, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್‌ ಉಪಸ್ಥಿತರಿದ್ದರು.

ರಾಜ್ಯಪಾಲರ ಎದುರು ನುಗ್ಗಿದ ಉದ್ಯೋಗಾಕಾಂಕ್ಷಿ!
ಸಮರ ಕಲೆ ‘ಕಲರಿಪಯಟ್ಟು’ ಪ್ರದರ್ಶನ ಮುಗಿಯುತ್ತಿದ್ದಂತೆ ರಾಜ್ಯಪಾಲರ ಎದುರಿನ ವೇದಿಕೆ ಬಳಿ ನುಗ್ಗಿದ ಉದ್ಯೋಗಾಂಕ್ಷಿ ಪರಶುರಾಮ್‌ ಕರ್ನಾಟಕ ಲೋಕ ಸೇವಾ ಆಯೋಗದ ವಿರುದ್ಧ ಘೋಷಣೆ ಕೂಗಿದರು. ಕೆಪಿಎಸ್‌ಸಿ ನೇಮಕಾತಿ ಪ್ರಕ್ರಿಯೆಗಳು ವಿಳಂಬವಾಗುತ್ತಿವೆ. ಇದರಿಂದ ಸಾವಿರಾರು ನಿರುದ್ಯೋಗಿಗಳು ಅವಕಾಶ ವಂಚಿತರಾಗುತ್ತಿದ್ದಾರೆ. ಅಧಿಸೂಚನೆ ಹೊರಡಿಸಿ ಎರಡು–ಮೂರು ವರ್ಷಗಳಾದರೂ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳ್ಳುವುದೇ ಇಲ್ಲ. ಪ್ರತಿ ನೇಮಕಾತಿಯನ್ನೂ ಕಾಲಮಿತಿಯ ಒಳಗೆ ತ್ವರಿತವಾಗಿ ಪೂರ್ಣಗೊಳಿಸಿ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡಬೇಕು ಎಂಬ ಮನವಿ ಪತ್ರವನ್ನು ರಾಜ್ಯಪಾಲರತ್ತ ಎಸೆದರು.  ತಕ್ಷಣ ಅವರನ್ನು ವಶಕ್ಕೆ ಪಡೆದ ಪೊಲೀಸರು ಮೈದಾನದಿಂದ ಹೊರಕ್ಕೆ ಕರೆದುಕೊಂಡು ಹೋದರು.  
ಕೋಮುವಾದದ ಹುಟ್ಟಡಗಿಸಲು ಸನ್ನದ್ಧ: ಸಿದ್ದರಾಮಯ್ಯ
‘ವಿಧಾನಸಭಾ ಚುನಾವಣೆಯಲ್ಲಿ ಕನ್ನಡಿಗರು ನೀಡಿರುವ ಜನಮತದಲ್ಲಿ ಸಂವಿಧಾನದ ಆಶಯವಾದ ಜಾತ್ಯತೀತ ಸಮಾಜದ ರಕ್ಷಣೆಯ ಸಂದೇಶವೂ ಇದೆ ಎನ್ನುವುದನ್ನು ನಮ್ಮ ಸರ್ಕಾರ ಅರ್ಥ ಮಾಡಿಕೊಂಡಿದೆ. ನಮ್ಮ ಸರ್ಕಾರ ಕೋಮುವಾದಿ ಶಕ್ತಿಗಳ ಹುಟ್ಟಡಗಿಸಲು ಸರ್ವ ಸನ್ನದ್ಧವಾಗಿದೆ’ ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಗಣರಾಜ್ಯೋತ್ಸವ ಸಂದೇಶ ನೀಡಿರುವ ಅವರು ‘ನಮ್ಮ ನಡೆ ಅಭಿವೃದ್ಧಿ ಕಡೆಗೆ ಸಾಗುತ್ತಿದ್ದರೂ ನಮ್ಮ ಕನಸಿನ ಭಾರತದ ಗುರಿಯನ್ನು ತಲುಪಲು ಸಾಧ್ಯವಾಗಿಲ್ಲ ಎನ್ನುವುದನ್ನು ವಿಷಾದದಿಂದಲೇ ಒಪ್ಪಬೇಕಾಗಿದೆ. ಅಭಿವೃದ್ಧಿ ದಾರಿಯಲ್ಲಿ ಹೊಸ ಸವಾಲುಗಳು ಎದುರಾಗಿವೆ. ಮುಖ್ಯವಾಗಿ ಇತ್ತೀಚೆಗೆ ಹೆಡೆ ಎತ್ತಿರುವ ಕೋಮುವಾದ ನಮ್ಮ ಜಾತ್ಯತೀತ ಸಮಾಜಕ್ಕೆ ಅಪಾಯವನ್ನುಂಟು ಮಾಡುವ ಆತಂಕವನ್ನು ಅನುಭವಿಸುತ್ತಿದ್ದೇವೆ’ ಎಂದಿದ್ದಾರೆ. ‘ಧಾರ್ಮಿಕ ರಾಷ್ಟ್ರೀಯತೆ ಮೂಲಕ ದೇಶವನ್ನು ಕಟ್ಟಲು ಸಾಧ್ಯವಿಲ್ಲ. ಧಾರ್ಮಿಕ ರಾಷ್ಟ್ರೀಯತೆಯು ಬಹುಧರ್ಮ ಬಹುಭಾಷೆ ಮತ್ತು ಬಹುಸಂಸ್ಕೃತಿಯನ್ನು ಪ್ರತಿಪಾದಿಸುವ ಪ್ರಜಾಪ್ರಭುತ್ವಕ್ಕೆ ಮಾರಕವಾದುದು’ ಎಂದು ಹೇಳಿದ್ದಾರೆ. ‘ಸಮಾಜವನ್ನು ಧರ್ಮಗಳ ಆಧಾರದಲ್ಲಿ ವಿಭಜಿಸುವ ಹುನ್ನಾರಕ್ಕೆ ಜನತೆ ಬಲಿಯಾಗಬಾರದು. ಚುನಾಯಿತ ಸರ್ಕಾರ ಇಲ್ಲವೇ ಜನಪ್ರತಿನಿಧಿಗಳು ತಮ್ಮ ವೈಫಲ್ಯವನ್ನು ಮುಚ್ಚಿ ಹಾಕಲು ಜಾತಿ–ಧರ್ಮಗಳಂತಹ ಭಾವನಾತ್ಮಕ ವಿಷಯಗಳನ್ನು ದುರ್ಬಳಕೆ ಮಾಡುವುದು ಪ್ರಜಾಪ್ರಭುತ್ವದ ಆಶಯಗಳಿಗೆ ವಿರುದ್ಧವಾದುದು ಮತ್ತು ಸಂವಿಧಾನಕ್ಕೆ ಬಗೆವ ದ್ರೋಹವಾಗಿದೆ’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.