ADVERTISEMENT

ಒಳ ಮೀಸಲಾತಿ | ಜಿ. ಪರಮೇಶ್ವರ ನಿವಾಸದಲ್ಲಿ ಇಂದು ಒಗ್ಗಟ್ಟಿನ ಸಭೆ

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2024, 1:16 IST
Last Updated 21 ಅಕ್ಟೋಬರ್ 2024, 1:16 IST
ಜಿ. ಪರಮೇಶ್ವರ
ಜಿ. ಪರಮೇಶ್ವರ   

ಬೆಂಗಳೂರು: ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಜಾರಿ ವಿಚಾರದಲ್ಲಿ ಗೊಂದಲಕ್ಕೆ ಅವಕಾಶ ನೀಡದೆ, ಸಹಮತ ಮೂಡಿಸುವ ಉದ್ದೇಶದಿಂದ ಗೃಹ ಸಚಿವ ಜಿ. ಪರಮೇಶ್ವರ ಅವರ ನಿವಾಸದಲ್ಲಿ ಎಲ್ಲ ಉಪ ಜಾತಿಗಳ (ಎಡಗೈ– ಬಲಗೈ ಬಣ) ಸಚಿವರು, ಶಾಸಕರು, ವಿಧಾನ ಪರಿಷತ್‌ ಸದಸ್ಯರು ಸೋಮವಾರ (ಅ.21) ಮಹತ್ವದ ಸಭೆ ನಡೆಸಲಿದ್ದಾರೆ.

ಸಚಿವರಾದ ಪ್ರಿಯಾಂಕ್‌ ಖರ್ಗೆ, ಎಚ್‌. ಮಹದೇವಪ್ಪ, ಕೆ.ಎಚ್‌. ಮುನಿಯಪ್ಪ, ಆರ್‌.ಬಿ. ತಿಮ್ಮಾಪುರ, ಶಿವರಾಜ ತಂಗಡಗಿ, ವಿಧಾನಸಭೆಯ ಉಪಾಧ್ಯಕ್ಷ ರುದ್ರಪ್ಪ ಲಮಾಣಿ, ಪರಿಷತ್‌ ಸದಸ್ಯರಾದ ಸುಧಾಮ್‌ ದಾಸ್‌ ಸೇರಿದಂತೆ ಶಾಸಕರು, ಪರಿಷತ್‌ ಸದಸ್ಯರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಗೊತ್ತಾಗಿದೆ.

ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಜಾರಿಗೊಳಿಸಲು ರಾಜ್ಯಗಳಿಗೆ ಸಂವಿಧಾನಬದ್ಧ ಅಧಿಕಾರವಿದೆ ಎಂದು ಆಗಸ್ಟ್ 1ರಂದು ಸುಪ್ರೀಂ ಕೋರ್ಟ್‌ ತೀರ್ಪು ನೀಡಿದೆ. ಈ ತೀರ್ಪಿನ ಜಾರಿಗೆ ಪರಿಶಿಷ್ಟ ಜಾತಿಯಲ್ಲಿನ ಉಪ ಜಾತಿಗಳ ನೈಜ ದತ್ತಾಂಶ ಅಗತ್ಯವಿದೆ. ಸದ್ಯ ಈ ದತ್ತಾಂಶ ಲಭ್ಯ ಇಲ್ಲ. ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗ ನೀಡಿರುವ ವರದಿಯಲ್ಲಿರುವ ದತ್ತಾಂಶಗಳ ಬಗ್ಗೆಯೂ ಗೊಂದಲಗಳಿವೆ. ಹೀಗಾಗಿ, ಎಸ್‌ಸಿಎಸ್‌ಪಿ, ಟಿಎಸ್‌ಪಿ ಅನುದಾನ ಬಳಸಿ ಪರಿಶಿಷ್ಟ ಜಾತಿಯ ಜನಗಣತಿ ಮಾಡುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸುವ ಬಗ್ಗೆ ಈ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆಯಿದೆ.

ADVERTISEMENT

ಜಾತಿ ಜನಗಣತಿ ವರದಿಯನ್ನು ಒಪ್ಪಿಕೊಳ್ಳುವ ವಿಚಾರದಲ್ಲಿಯೂ ಯಾವುದೇ ತೀರ್ಮಾನ ಆಗಿಲ್ಲ. ಹೀಗಾಗಿ, ಪರಿಶಿಷ್ಟ ಜಾತಿಗೆ ಸೀಮಿತವಾಗಿ ಉಪ ಜಾತಿಗಳ ಗಣತಿ ಮಾಡಬೇಕೆಂದು ಒಗ್ಗಟ್ಟಿನಿಂದ ಆಗ್ರಹಿಸಲು ಈ ಸಭೆ ನಡೆಸಲಾಗುತ್ತಿದೆ ಎಂದು ಹೇಳಲಾಗಿದೆ.  

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.