ADVERTISEMENT

ಕೋವಿಡ್ ಅಕ್ರಮದ ತನಿಖೆ: ಎಸ್‌ಐಟಿ ಮುಖ್ಯಸ್ಥರ ನೇಮಕದ ಹೊಣೆ ಪರಮೇಶ್ವರಗೆ

​ಪ್ರಜಾವಾಣಿ ವಾರ್ತೆ
Published 18 ನವೆಂಬರ್ 2024, 16:30 IST
Last Updated 18 ನವೆಂಬರ್ 2024, 16:30 IST
ಜಿ. ಪರಮೇಶ್ವರ
ಜಿ. ಪರಮೇಶ್ವರ   

ಬೆಂಗಳೂರು: ಕೋವಿಡ್‌ ನಿರ್ವಹಣೆಯಲ್ಲಿ ನಡೆದಿದೆ ಎನ್ನಲಾಗಿರುವ ಭ್ರಷ್ಟಾಚಾರದ ತನಿಖೆಗೆ ರಚಿಸಲಾಗುವ ವಿಶೇಷ ತನಿಖಾ ದಳಕ್ಕೆ (ಎಸ್‌ಐಟಿ) ಮುಖ್ಯಸ್ಥರನ್ನು ನೇಮಿಸುವ ಹೊಣೆಯನ್ನು ಗೃಹ ಸಚಿವ ಜಿ. ಪರಮೇಶ್ವರ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಹಿಸಿದ್ದಾರೆ.

ತಮ್ಮ ಸರ್ಕಾರಿ ನಿವಾಸ ‘ಕಾವೇರಿ’ಯಲ್ಲಿ ಸಂಪುಟದ ಹಿರಿಯ ಸಚಿವರ ಜೊತೆ ಸೋಮವಾರ ತುರ್ತು ಸಭೆ ನಡೆಸಿದ ಮುಖ್ಯಮಂತ್ರಿ, ಎಸ್‌ಐಟಿ ರಚನೆ ಮತ್ತು ಅದರ ನೇತೃತ್ವವನ್ನು ಯಾರಿಗೆ ನೀಡಬೇಕೆಂಬ ಕುರಿತು ಸಮಾಲೋಚನೆ ನಡೆಸಿದ್ದಾರೆ.

‘ಬಿಜೆಪಿ ಆಡಳಿತ ಅವಧಿಯಲ್ಲಿ ನಡೆದಿರುವ ಕೋವಿಡ್‌ ಹಗರಣದ ಕುರಿತು ತನಿಖೆ ನಡೆಸಿರುವ ನ್ಯಾಯಮೂರ್ತಿ ಮೈಕಲ್ ಡಿಕುನ್ಹ ಆಯೋಗವು ಅಕ್ರಮವನ್ನು ಪತ್ತೆ ಹಚ್ಚಿದೆ. ಈ ವಿಷಯವನ್ನು ಯಾವುದೇ ಕಾರಣಕ್ಕೂ ಕೈಬಿಡಬಾರದು. ಮುಂಬರುವ ದಿನಗಳಲ್ಲಿ ಇನ್ನಷ್ಟು ಆಕ್ರಮಣಕಾರಿಯಾಗಿ ಬಿಂಬಿಸಬೇಕು' ಎಂದು ಸಚಿವರಿಗೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ ಎಂದೂ ಗೊತ್ತಾಗಿದೆ.

ADVERTISEMENT

ಬೆಳಗಾವಿಯಲ್ಲಿ ಡಿ. 9ರಿಂದ ನಡೆಯಲಿರುವ ವಿಧಾನಮಂಡಲ ಅಧಿವೇಶನದಲ್ಲಿ ವಿರೋಧ ಪಕ್ಷಗಳನ್ನು ಸಮರ್ಥವಾಗಿ ಎದುರಿಸುವ ಬಗ್ಗೆಯೂ ಚರ್ಚೆ ನಡೆದಿದೆ. ವಕ್ಫ್ ಆಸ್ತಿ ವಿಚಾರವನ್ನು ಬಿಜೆಪಿ ದೊಡ್ಡದಾಗಿ ಬಿಂಬಿಸುವ ಸಾಧ್ಯತೆ ಇದೆ. ಬಿಜೆಪಿ ಅವಧಿಯಲ್ಲಿಯೇ ವಕ್ಫ್ ಆಸ್ತಿಯನ್ನು ವಶಕ್ಕೆ ಪಡೆದುಕೊಳ್ಳುವಂತೆ ಸೂಚಿಸಲಾಗಿತ್ತು. ಅದೇ ವಿಚಾರ ಪ್ರಸ್ತಾಪಿಸಿ ಬಿಜೆಪಿಯನ್ನು ಕಟ್ಟಿಹಾಕಬೇಕೆಂದು ಸಹೋದ್ಯೋಗಿಗಳಿಗೆ ಮುಖ್ಯಮಂತ್ರಿ ಕಿವಿಮಾತು ಹೇಳಿದರು ಎಂದೂ ಹೇಳಲಾಗಿದೆ.

ಬಿಪಿಎಲ್ ಕಾರ್ಡ್ ಪರಿಷ್ಕರಣೆ ಬಗ್ಗೆಯೂ ಚರ್ಚೆ ನಡೆಯಿತು. ಈ ವಿಚಾರದಲ್ಲಿ ಗೊಂದಲ ಸೃಷ್ಟಿಯಾಗಿರುವುದಕ್ಕೆ ಆಹಾರ ಸಚಿವ ಕೆ.ಎಚ್‌. ಮುನಿಯಪ್ಪ ಅವರನ್ನು ತರಾಟೆಗೆ ತೆಗೆದುಕೊಂಡ ಮುಖ್ಯಮಂತ್ರಿ, ಗೊಂದಲಕ್ಕೆ ಅವಕಾಶ ಇಲ್ಲದಂತೆ ಜನರಿಗೆ ಸ್ಪಷ್ಟ ಮಾಹಿತಿ ನೀಡಬೇಕು. ಅಧಿವೇಶನದಲ್ಲಿ ಬಿಜೆಪಿ ಈ ವಿಚಾರವನ್ನು ಅಸ್ತ್ರವಾಗಿ ಬಳಕೆ ಮಾಡಿಕೊಳ್ಳಬಹುದು. ಈ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದೂ ಸಚಿವರಿಗೆ ಸೂಚನೆ ನೀಡಿದ್ದಾರೆ ಎಂದೂ ಗೊತ್ತಾಗಿದೆ.

ಕಳೆದ ಅಧಿವೇಶನದಲ್ಲಿ ಅನುಮೋದನೆಯಾಗದ ಮಸೂದೆಗಳನ್ನು ಬೆಳಗಾವಿ ಅಧಿವೇಶನದಲ್ಲಿ ಮತ್ತೆ ಮಂಡಿಸಲು ಸಿದ್ಧಪಡಿಸುವಂತೆಯೂ ಮುಖ್ಯಮಂತ್ರಿ ಸಲಹೆ ನೀಡಿದ್ದಾರೆ.

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಜಿ. ಪರಮೇಶ್ವರ, ಕೆ.ಎನ್. ರಾಜಣ್ಣ, ಪ್ರಿಯಾಂಕ್ ಖರ್ಗೆ, ಎಚ್.ಸಿ. ಮಹದೇವಪ್ಪ, ದಿನೇಶ್ ಗುಂಡೂರಾವ್, ಕೆ.ಎಚ್. ಮುನಿಯಪ್ಪ ಸಭೆಯಲ್ಲಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.