ಬೆಂಗಳೂರು: ಕೋವಿಡ್ ನಿಯಂತ್ರಣ ಮತ್ತು ನಿರ್ವಹಣೆಯ ಹೆಸರಿನಲ್ಲಿ ಆರೋಗ್ಯ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತ ತನಿಖೆಗೆ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ನೇತೃತ್ವದಲ್ಲಿ ಆಯೋಗ ರಚಿಸಲು ಸರ್ಕಾರ ಮುಂದಾಗಿದೆ.
ನ್ಯಾ. ಕುನ್ಹಾ ಅವರು ಜಿಲ್ಲಾ ನ್ಯಾಯಾಧೀಶ, ಹೈಕೋರ್ಟ್ ರಿಜಿಸ್ಟ್ರಾರ್, ಹೈಕೋರ್ಟ್ ನ್ಯಾಯಮೂರ್ತಿಯಾಗಿ ಕರ್ತವ್ಯ ನಿರ್ವಹಿಸಿದವರು. ಐದು ಸಾವಿರಕ್ಕೂ ಹೆಚ್ಚು ಪ್ರಕರಣಗಳನ್ನು ವಿಲೇವಾರಿ ಮಾಡಿದ್ದಾರೆ.
ಜಾನ್ ಮೈಕಲ್ ಕುನ್ಹಾ ನೇತೃತ್ವದಲ್ಲಿ ತನಿಖಾ ಆಯೋಗ ರಚಿಸುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿರಿಯ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದಾರೆ ಎಂದು ಸರ್ಕಾರದ ಮೂಲಗಳು ‘ಪ್ರಜಾವಾಣಿ’ಗೆ ತಿಳಿಸಿವೆ.
ಕೋವಿಡ್ ಭ್ರಷ್ಟಾಚಾರದ ಆರೋಪಗಳಿಗೆ ಸಂಬಂಧಿಸಿದಂತೆ ವಿಧಾನ ಮಂಡಲದ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಯ (ಪಿಎಸಿ) ವರದಿಯಲ್ಲಿರುವ ಅಂಶಗಳ ತನಿಖೆಯ ಜೊತೆಗೆ, ಒಟ್ಟು ತನಿಖೆಯ ಕಾರ್ಯವ್ಯಾಪ್ತಿ, ಯಾವ ಅಂಶಗಳ ಮೇಲೆ ಪರಾಮರ್ಶೆ ನಡೆಸಬೇಕೆಂಬ ಬಗ್ಗೆ ಇನ್ನಷ್ಟೇ ಅಂತಿಮಗೊಳ್ಳಬೇಕಿದೆ ಎಂದು ಮೂಲಗಳು ಹೇಳಿವೆ.
ಈ ಮೊದಲು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಜಾವೇದ್ ರಹೀಂ ಅವರ ನೇತೃತ್ವದಲ್ಲಿ ತನಿಖಾ ಆಯೋಗ ರಚಿಸುವ ಬಗ್ಗೆ ಚರ್ಚೆ ನಡೆದಿತ್ತು. ರಹೀಂ ಅವರ ಹೆಸರು ಅಂತಿಮಗೊಳಿಸಿದ್ದ ಮುಖ್ಯಮಂತ್ರಿ, ಅವರನ್ನು ನೇಮಕ ಮಾಡುವ ಕುರಿತ ಕಡತ ಮಂಡಿಸುವಂತೆ ಆರೋಗ್ಯ ಇಲಾಖೆಗೆ ಸೂಚಿಸಿದ್ದರು. ಆದರೆ, ಆಯೋಗದ ನೇತೃತ್ವ ವಹಿಸಲು ರಹೀಂ ನಿರಾಕರಿಸಿದ್ದಾರೆ ಎಂದೂ ಮೂಲಗಳು ತಿಳಿಸಿವೆ.
ಬಿಜೆಪಿ ಸರ್ಕಾರದ ಅವಧಿಯಲ್ಲಿ ವಿರೋಧ ಪಕ್ಷದ ನಾಯಕರಾಗಿದ್ದ ಸಿದ್ದರಾಮಯ್ಯ, ಕೋವಿಡ್ ಭ್ರಷ್ಟಾಚಾರ ಕುರಿತ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖಾ ಆಯೋಗ ರಚಿಸಬೇಕು ಎಂದು ಆಗ್ರಹಿಸಿದ್ದರು. ಅದನ್ನು ಬಿಜೆಪಿ ಸರ್ಕಾರ ತಳ್ಳಿ ಹಾಕಿತ್ತು.
ಕೋವಿಡ್ ಹಗರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಲು ಒಲವು ಹೊಂದಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಈ ವಿಷಯವನ್ನು ಮುಖ್ಯಮಂತ್ರಿಯ ಗಮನಕ್ಕೂ ತಂದಿದ್ದರು. ಭ್ರಷ್ಟಾಚಾರ ನಡೆದಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಪಿಎಸಿ ಸಲ್ಲಿಸಿದ ವರದಿಯಲ್ಲಿ ಈ ಬಗ್ಗೆ ಮಾಹಿತಿಗಳಿವೆ. ಹೀಗಾಗಿ, ತನಿಖೆ ನಡೆಸುವುದು ಸೂಕ್ತ ಎಂದು ಪ್ರತಿಪಾದಿಸಿದ್ದರು.
‘ಕೋವಿಡ್ ಅವಧಿಯಲ್ಲಿ ₹ 2,000 ಕೋಟಿಗೂ ಹೆಚ್ಚು ಮೊತ್ತದ ಭ್ರಷ್ಟಾಚಾರ ನಡೆದಿರುವ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಬೇಕು’ ಎಂದು ವಿಧಾನಸಭೆಯಲ್ಲಿ ಶಾಸಕ ಪ್ರದೀಪ್ ಈಶ್ವರ್ ಆಗ್ರಹಿಸಿದ್ದರು.
ಪಿಎಸಿ ವರದಿಯಲ್ಲಿ ಏನಿದೆ?
ಕೋವಿಡ್ ನಿಯಂತ್ರಣದ ಹೆಸರಿನಲ್ಲಿ ಆರೋಗ್ಯ ಇಲಾಖೆಯಲ್ಲಿ ನಡೆದಿದ್ದ ಭ್ರಷ್ಟಾಚಾರದ ಕುರಿತು ಪ್ರತಿಷ್ಠಿತ ಸ್ವಾಯತ್ತ ತನಿಖಾ ಸಂಸ್ಥೆಯಿಂದ ತನಿಖೆ ನಡೆಸುವಂತೆ ಪಿಎಸಿ ತನ್ನ ವರದಿಯಲ್ಲಿ ಶಿಫಾರಸು ಮಾಡಿದೆ.
ಹಲವು ಪ್ರಕರಣಗಳಲ್ಲಿ ದುಬಾರಿ ದರ ತೆತ್ತು ಔಷಧಿ, ವೈದ್ಯಕೀಯ ಸಾಧನಗಳನ್ನು ಖರೀದಿಸಲಾಗಿದೆ. ಕೋವಿಡ್ ಸೋಂಕಿತರಿಗೆ ಆಸ್ಪತ್ರೆಗಳಲ್ಲಿ ಹಾಸಿಗೆ ಹಂಚಿಕೆ, ಖಾಸಗಿ ಆಸ್ಪತ್ರೆಗಳಿಗೆ ಚಿಕಿತ್ಸಾ ಶುಲ್ಕ ಪಾವತಿ ಸೇರಿದಂತೆ ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದ ಮಾಹಿತಿಗಳನ್ನು ಆರೋಗ್ಯ ಇಲಾಖೆಯು ಸಮಿತಿಯೊಂದಿಗೆ ಹಂಚಿಕೊಂಡಿಲ್ಲ ಎಂದು ವರದಿಯಲ್ಲಿ ದೂರಿದೆ.
ಪಿಎಸಿಯ ಹಿಂದಿನ ಅಧ್ಯಕ್ಷರಾಗಿದ್ದ ಎಚ್.ಕೆ. ಪಾಟೀಲ ನೇತೃತ್ವದಲ್ಲಿ ಸಲ್ಲಿಸಿದ್ದ ವರದಿಗೆ ಹಿಂದಿನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅನುಮೋದನೆ ನೀಡಿರಲಿಲ್ಲ. 2020–21ನೇ ಸಾಲಿನಲ್ಲಿ ಪಿಎಸಿ ಅಧ್ಯಕ್ಷರಾಗಿದ್ದ, ಈಗಿನ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ವರದಿಯನ್ನು ಸಭಾಧ್ಯಕ್ಷರಿಗೆ ಸಲ್ಲಿಸಿದ್ದರು. ಇತ್ತೀಚೆಗೆ ನಡೆದ ವಿಧಾನ ಮಂಡಲ ಅಧಿವೇಶನದಲ್ಲಿ ವರದಿ ಮಂಡನೆಯಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.