ಬೆಂಗಳೂರು/ಕಲಬುರ್ಗಿ: ಕಾಂಗ್ರೆಸ್ ನಾಯಕತ್ವದ ಬಗ್ಗೆ ಸಿಡಿದೆದ್ದು ಬಿಜೆಪಿ ಪಾಳಯದಲ್ಲಿ ಗುರುತಿಸಿಕೊಂಡಿದ್ದಾರೆ ಎನ್ನಲಾಗುತ್ತರುವ ನಾಲ್ವರು ಅತೃಪ್ತ ಶಾಸಕರು ರಾಜೀನಾಮೆ ಕೊಡುವ ಸಾಧ್ಯತೆ ಹೆಚ್ಚಿದೆ.
‘ಆಡಿಯೊ ಬಾಂಬ್’ ನ್ನು ಮುಖ್ಯಮಂತ್ರಿ ಸ್ಫೋಟಿಸಿದ ಬಳಿಕ ಬಿಜೆಪಿಯ ಬಲ ಉಡುಗಿದಂತಾಗಿದೆ. ಏತನ್ಮಧ್ಯೆ ಸಭಾಧ್ಯಕ್ಷರನ್ನು ಭೇಟಿಯಾದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ತಮ್ಮ ಪಕ್ಷದ ನಾಲ್ವರು ಶಾಸಕರನ್ನು ಪಕ್ಷಾಂತರ ನಿಷೇಧ ಕಾಯ್ದೆ ಅಡಿ ಅನರ್ಹಗೊಳಿಸುವಂತೆ ಮನವಿ ಮಾಡಿದ್ದಾರೆ.
ಈ ಬೆಳವಣಿಗೆಗಳ ಬಗ್ಗೆ ಮುಂಬೈನಲ್ಲಿ ಕುಳಿತೇ ತಮ್ಮ ಆಪ್ತರು, ಕಾನೂನು ತಜ್ಞರ ಜತೆ ಚರ್ಚೆ ನಡೆಸಿರುವ ಅತೃಪ್ತ ಶಾಸಕರು, ರಾಜೀನಾಮೆ ಕೊಡುವ ತೀರ್ಮಾನಕ್ಕೆ ಬಂದಿದ್ದಾರೆ ಎನ್ನಲಾಗುತ್ತಿದೆ.
ಕಲಬುರ್ಗಿಯಲ್ಲಿ ಮಾತನಾಡಿದ ಶಾಸಕ ಉಮೇಶ ಜಾಧವ ಸೋದರ ರಾಮಚಂದ್ರ ಜಾಧವ ಅವರು, ‘ಉಮೇಶ ಅವರು ಕಾನೂನು ತಜ್ಞರ ಸಲಹೆ ಪಡೆಯುತ್ತಿದ್ದು, ಒಂದೆರಡು ದಿನದಲ್ಲಿ ರಾಜೀನಾಮೆ ಸಲ್ಲಿಸುವ ಸಾಧ್ಯತೆ ಇದೆ’ ಎಂದು ತಿಳಿಸಿದರು.
‘ಉಮೇಶ ಅವರು ಕಾಂಗ್ರೆಸ್ ಪಕ್ಷಕ್ಕೆ ಮರಳಿ ಬರುವ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂದು ಅನಿಸುತ್ತಿದೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ, ಕಲಬುರ್ಗಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಬಹುದು. ಒಂದೊಮ್ಮೆ ಸ್ಪರ್ಧಿಸಿದರೆ ಗೆಲುವು ಖಚಿತ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.
‘ಫೆ.15ರಂದು ಕಲಬುರ್ಗಿಯಲ್ಲಿ ಸೇವಾಲಾಲ ಜಯಂತಿ ನಡೆಯಲಿದ್ದು, ಆ ಕಾರ್ಯಕ್ರಮದಲ್ಲಿ ಉಮೇಶ ಪಾಲ್ಗೊಳ್ಳಲಿದ್ದಾರೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.