ಬೆಂಗಳೂರು: ಈ ವರ್ಷ ‘ಜಲಜೀವನ್ ಮಿಷನ್’ ಯೋಜನೆಯಡಿ ಗ್ರಾಮೀಣ ಪ್ರದೇಶದ 25 ಲಕ್ಷ ಮನೆಗಳಿಗೆ ನಲ್ಲಿಗಳ ಮೂಲಕ ಕುಡಿಯುವ ನೀರು ಒದಗಿಸಲು ಕ್ರಮ ತೆಗೆದುಕೊಳ್ಳಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದ್ದಾರೆ.
ಮುಖ್ಯಮಂತ್ರಿಯವರ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ‘ಜಲಜೀವನ್ ಮಿಷನ್’ ಯೋಜನೆ ಪ್ರಗತಿ ಪರಿಶೀಲನೆ ನಡೆಸಿದ ಅವರು, ರಾಜ್ಯದಲ್ಲಿ 91.91 ಲಕ್ಷ ಗ್ರಾಮೀಣ ಕುಟುಂಬಗಳಿದ್ದು, ಈಗಾಗಲೇ 28 ಲಕ್ಷಕ್ಕೂ ಹೆಚ್ಚು ಮನೆಗಳಿಗೆ ನಲ್ಲಿ ಸಂಪರ್ಕ ಒದಗಿಸಲಾಗಿದೆ. 2021–22 ನೇ ಸಾಲಿನಲ್ಲಿ 25.17 ಲಕ್ಷ ಮನೆಗಳಿಗೆ ನಲ್ಲಿ ಸಂಪರ್ಕ ಒದಗಿಸುವ ಗುರಿಯನ್ನು ನಿಗದಿತ ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು ಎಂದು ಹೇಳಿದರು.
ರಾಜ್ಯದಲ್ಲಿ ಈವರೆಗೆ 435 ಬಹು ಗ್ರಾಮ ಯೋಜನೆಗಳು ಪೂರ್ಣಗೊಂಡಿವೆ. 69 ಯೋಜನೆಗಳು ಪ್ರಗತಿಯಲ್ಲಿದ್ದು, 30 ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. 2021–22 ನೇ ಸಾಲಿಗೆ 161 ಯೋಜನೆಗಳ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಸಭೆಯಲ್ಲಿ ಅಧಿಕಾರಿಗಳು ಮಾಹಿತಿ ನೀಡಿದರು. ರಾಜ್ಯದಲ್ಲಿ ನದಿ ಮೂಲದಿಂದ ನೀರು ದೊರೆಯುವ ಸ್ಥಳದಲ್ಲಿ ಆದ್ಯತೆ ಮೇರೆಗೆ ಯೋಜನೆ ಅನುಷ್ಠಾನಗೊಳಿಸಬೇಕು. ಇದು ಪ್ರಧಾನಮಂತ್ರಿಯವರ ಮಹತ್ವಾಕಾಂಕ್ಷೆಯ ಯೋಜನೆಯಾಗಿದ್ದು, ನಿಗದಿತ ಕಾಲಮಿತಿಯೊಳಗೆ ಅನುಷ್ಠಾನಗೊಳಿಸಬೇಕು ಎಂದು ಯಡಿಯೂರಪ್ಪ ಹೇಳಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಮತ್ತು ಹಿರಿಯ ಅಧಿಕಾರಿಗಳು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.