ಬೆಂಗಳೂರು: ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಜೆಡಿಎಸ್ ತನ್ನ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ್ದು, ದಸರಾ ಮಹೋತ್ಸವದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹೊಗಳಿದ್ದ ಪಕ್ಷದ ಪ್ರಮುಖರ ಸಮಿತಿ ಅಧ್ಯಕ್ಷ ಹಾಗೂ ಶಾಸಕ ಜಿ.ಟಿ. ದೇವೇಗೌಡ ಅವರನ್ನು ಪಟ್ಟಿಯಿಂದ ಹೊರಗಿಡಲಾಗಿದೆ.
ಪಟ್ಟಿಯಲ್ಲಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಸಂಸದ ಮಲ್ಲೇಶ್ ಬಾಬು, ಪಕ್ಷದ ಮಾಜಿ ಅಧ್ಯಕ್ಷ ಎಚ್.ಕೆ. ಕುಮಾರಸ್ವಾಮಿ, ಶಾಸಕರಾದ ಎ. ಮಂಜು, ಶಾರದಾಪೂರ್‍ಯಾ ನಾಯ್ಕ್, ಶರವಣ, ಭೋಜೇಗೌಡ ಸೇರಿದಂತೆ ಹಾಲಿ, ಮಾಜಿಗಳನ್ನು ಒಳಗೊಂಡ 40 ಪ್ರಚಾರಕರು ಇದ್ದಾರೆ.
ದಸರಾ ಮಹೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ್ದ ಜಿ.ಟಿ. ದೇವೇಗೌಡ, ‘ಮುಡಾ’ ನಿವೇಶನ ಹಂಚಿಕೆ ಪ್ರಕರಣದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ದನಿ ಎತ್ತಿದ್ದರು. ‘ಯಾರೆಲ್ಲರ ವಿರುದ್ಧ ಎಫ್ಐಆರ್ ದಾಖಲಾಗಿದೆಯೋ ಅವರೆಲ್ಲರೂ ತಾಕತ್ತಿದ್ದರೆ, ವಿಧಾನಸೌಧದ ಮುಂದೆ ಬಂದು ರಾಜೀನಾಮೆ ಕೊಡಲಿ. ಅವರೆಲ್ಲರಿಗೂ ದೇವಿ ಚಾಮುಂಡೇಶ್ವರಿ ಒಳ್ಳೆ ಬುದ್ಧಿ ಕೊಡಲಿ’ ಎಂದಿದ್ದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸುತ್ತಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಬಿಜೆಪಿ-ಜೆಡಿಸ್ ಮುಖಂಡರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಅವರ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಚರ್ಚೆಗೂ ಕಾರಣವಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.