ADVERTISEMENT

ಅಡ್ಡ ಮತದಾನ: ಶ್ರೀನಿವಾಸ ಗೌಡ, ಶ್ರೀನಿವಾಸ್‌ ಅನರ್ಹಗೊಳಿಸುವಂತೆ ಜೆಡಿಎಸ್‌ ಅರ್ಜಿ

​ಪ್ರಜಾವಾಣಿ ವಾರ್ತೆ
Published 8 ಜುಲೈ 2022, 8:45 IST
Last Updated 8 ಜುಲೈ 2022, 8:45 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಜೂನ್‌ 10ರಂದು ನಡೆದ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಆರೋಪ ಎದುರಿಸುತ್ತಿರುವ ತಮ್ಮ ಪಕ್ಷದ ಶಾಸಕರಾದ ಕೆ. ಶ್ರೀನಿವಾಸ ಗೌಡ ಮತ್ತು ಎಸ್‌.ಆರ್‌. ಶ್ರೀನಿವಾಸ್‌ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ವಿಧಾನಸಭೆಯ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಜೆಡಿಎಸ್‌ ಶುಕ್ರವಾರ ಅರ್ಜಿ ಸಲ್ಲಿಸಿದೆ.

ವಿಧಾನಸಭೆಯಲ್ಲಿ ಜೆಡಿಎಸ್‌ ಮುಖ್ಯ ಸಚೇತಕರಾಗಿರುವ ವೆಂಕಟರಾವ್‌ ನಾಡಗೌಡ ಅವರು ವಿಧಾನಸಭೆಯ ಅಧ್ಯಕ್ಷರಿಗೆ ದೂರು ನೀಡಿದರು. ಇಬ್ಬರೂ ಶಾಸಕರು ಪಕ್ಷದ ವಿರುದ್ಧ ಹೇಳಿಕೆ ನೀಡಿರುವುದು, ರಾಜ್ಯಸಭೆ ಚುನಾವಣೆಯಲ್ಲಿ ಅನ್ಯ ಪಕ್ಷಗಳ ಅಭ್ಯರ್ಥಿಗಳಿಗೆ ಮತ ಚಾಲಯಿಸಿರುವುದಕ್ಕೆ ಸಂಬಂಧಿಸಿದ ದಾಖಲೆಗಳನ್ನು ದೂರಿನೊಂದಿಗೆ ಲಗತ್ತಿಸಿದ್ದು, ಇಬ್ಬರನ್ನೂ ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಮನವಿ ಮಾಡಿದ್ದಾರೆ.

ದೂರು ನೀಡಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ವೆಂಕಟರಾವ್‌ ನಾಡಗೌಡ, ‘ಇಬ್ಬರೂ ಶಾಸಕರೂ ಪಕ್ಷದ ಚಟುವಟಿಕೆಗಳಿಂದ ದೂರ ಉಳಿದಿದ್ದಾರೆ. ಪಕ್ಷದ ವಿರುದ್ಧವೇ ಬಹಿರಂಗ ಹೇಳಿಕೆ ನೀಡುತ್ತಿದ್ದಾರೆ. ಶ್ರೀನಿವಾಸ ಗೌಡ ಅವರು ಕಾಂಗ್ರೆಸ್‌ ಜತೆ ಗುರುತಿಸಿಕೊಂಡಿದ್ದಾರೆ. ಆದ್ದರಿಂದ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದೇವೆ. ಸ್ಪೀಕರ್‌ ಕಾಗೇರಿ ಅವರೂ ಕ್ರಮದ ಭರವಸೆ ನೀಡಿದ್ದಾರೆʼ ಎಂದರು.

ADVERTISEMENT

ಇಂತಹ ದೂರುಗಳಿಂದ ಪ್ರಯೋಜನ ಆಗುವುದಿಲ್ಲ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿರುವುದು ನಿಜ. ಆದರೆ, ಪಕ್ಷ ವಿರೋಧಿ ಚಟುವಟಿಕೆ ನಡೆಸಿದವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬ ಸಂದೇಶ ರವಾನೆ ಆಗಬಾರದು. ಈ ಉದ್ದೇಶದಿಂದ ನಮ್ಮ ಕೆಲಸವನ್ನು ನಾವು ಮಾಡಿದ್ದೇವೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.