ಹುಬ್ಬಳ್ಳಿ: ಮಹಾನಗರ ಪಾಲಿಕೆ ಚುನಾವಣೆ ನಡೆಸಲು ಸರ್ಕಾರ ಸಿದ್ಧವಿದ್ದು, ಎರಡು ತಿಂಗಳಲ್ಲಿ ನಡೆಯಲಿದೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ವಿಶ್ವಾಸ ವ್ಯಕ್ತಪಡಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್'ನಿಂದ ಮಹಾನಗರ ಪಾಲಿಕೆ ಚುನಾವಣೆ ವಿಳಂಬವಾಗಿದೆ. ಚುನಾವಣೆಗೆ ಸಂಬಂಧಿಸಿ ಸರ್ಕಾರ ಸಕಲ ಸಿದ್ಧತೆ ಮಾಡಿಕೊಂಡಿದೆ. ಕೊನೆಪಕ್ಷ ಕಲಬುರ್ಗಿ, ಹುಬ್ಬಳ್ಳಿ-ಧಾರವಾಡ ಮತ್ತು ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯನ್ನಾದರೂ ಎರಡು ತಿಂಗಳಲ್ಲಿ ನಡೆಸಬೇಕು ಎಂದುಕೊಂಡಿದ್ದೇವೆ ಎಂದು ತಿಳಿಸಿದರು.
ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ವಿಚಾರ ಕುರಿತು ಯಾವುದೇ ಚರ್ಚೆಯಾಗಿಲ್ಲ. ಸಂಪುಟ ವಿಸ್ತರಣೆ ಇಲ್ಲ ಎಂದು ಮುಖ್ಯಮಂತ್ರಿ ಸಹ ಸ್ಪಷ್ಟಪಡಿಸಿದ್ದಾರೆ. ಪಕ್ಷದ ನಾಯಕರಲ್ಲಿ ಯಾವುದೇ ಭಿನ್ನಮತವಿಲ್ಲ. ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ ಎಂದರು.
ಬಸ್ ನಿಲ್ದಾಣ ಕಾಮಗಾರಿಗೆ ಚಾಲನೆ: ಸ್ಮಾರ್ಟ್ ಸಿಟಿ ಯೋಜನೆಯಡಿ ₹35 ಕೋಟಿ ವೆಚ್ಚದ ಹಳೇ ಬಸ್ ಬಸ್ ನಿಲ್ದಾಣ ಪುನರ್ ನಿರ್ಮಾಣ ಕಾಮಗಾರಿಗೆ ಸಚಿವ ಬೈರತಿ ಬಸವರಾಜಚಾಲನೆ ನೀಡಿದರು. ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಸಚಿವ ಜಗದೀಶ ಶೆಟ್ಟರ್, ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ್, ಶಾಸಕ ಅರವಿಂದ ಬೆಲ್ಲದ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.