ಕೊಪ್ಪಳ/ವಿಜಯಪುರ/ಕೊಡಗು/ ಬಳ್ಳಾರಿ: ಇಂದು ಕನ್ನಡ ರಾಜ್ಯೋತ್ಸವ ಸಂಭ್ರಮ. ವಿವಿಧ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ.
ಕೊಪ್ಪಳದಲ್ಲಿ ಕನ್ನಡ ಮತ್ತು ಸಂಸ್ಕತಿ ಇಲಾಖೆ ಖಾತೆ ಸಚಿವ ಶಿವರಾಜ ತಂಗಡಗಿ ಧ್ವಜಾರೋಹಣ ನೆರವೇರಿಸಿದರು. ಬಳಿಕ ಮಾತನಾಡಿದ ಅವರು ಕನ್ನಡ ಭಾಷೆಯನ್ನು ಉಳಿಸಿ ಹಾಗೂ ಬೆಳೆಸಿಕೊಂಡು ಹೋಗುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ರಾಜ್ಯ ಸರ್ಕಾರ ಕನ್ನಡ ನಾಡು ನುಡಿ ಸೇವೆಗೆ ಸದಾಕಾಲ ಬದ್ಧವಾಗಿದೆ ಎಂದು ಭರವಸೆ ನೀಡಿದರು.
ಕನ್ನಡ ಭಾಷೆಯಲ್ಲಿ ತಂತ್ರಜ್ಞಾನದ ಅಭಿವೃದ್ಧಿಗೆ ನಮ್ಮ ಸರ್ಕಾರ ಹೆಚ್ಚಿನ ಒತ್ತು ನೀಡಿದ್ದು, ಕನ್ನಡಿಗರೆಲ್ಲರೂ ಕನ್ನಡವನ್ನು ಆದ್ಯತೆ ಭಾಷೆಯಾಗಿ ಬಳಸಿದರೆ ಮಾತ್ರ ಭಾಷೆಯ ಬೆಳವಣಿಗೆ ಸಾಧ್ಯವಾಗುತ್ತದೆ ಎಂದೂ ಹೇಳಿದರು.
ಮಡಿಕೇರಿಯ ಕೋಟೆ ಆವರಣದಲ್ಲಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರು ಧ್ಚಜಾರೋಹಣ ನೆವೇರಿಸಿದರು.
ಜಿಲ್ಲೆಯಾದ್ಯಂತ ಶುಕ್ರವಾರ ಸುವರ್ಣ ಕರ್ನಾಟಕ ರಾಜ್ಯೋತ್ಸ ಸಂಭ್ರಮ ಮನೆಮಾಡಿದೆ. ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರು ಧ್ವಜಾರೋಹಣ ನೆರವೇರಿಸಿ, ಶುಭಾಶಯ ಕೋರಿದರು.
ಜಿಲ್ಲೆಯಲ್ಲಿ ಸುವರ್ಣ ಕರ್ನಾಟಕ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ನಗರದ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ಜಿಲ್ಲಾಡಳಿತದಿಂದ ಹಮ್ಮಿಕೊಂಡಿದ್ದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಮೊದಲಿಗೆ ಕನ್ನಡಾಂಬೆಗೆ ಪುಷ್ಪನಮನ ಸಲ್ಲಿಸಿ, ಬಳಿಕ ಧ್ವಜಾರೋಹಣ ನೆರವೇರಿಸಿದರು. ಪೊಲೀಸ್ ಪಡೆಯಿಂದ ಗೌರವಂದನೆ ಸ್ವೀಕರಿಸಿದರು.
ನಗರದ ಅಜ್ಜರಕಾಡು ಗಾಂಧಿ ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಧ್ವಜಾರೋಹಣ ನೆರವೇರಿಸಿದರು.
ಕಲ್ಯಾಣ ಕರ್ನಾಟಕ ಭಾಗಕ್ಕೆ ರಾಜ್ಯ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಧ್ವಜಾರೋಹಣ ಮಾಡಲು ಯತ್ನಿಸಿದ ಹೋರಾಟ ಸಮಿತಿ ಅಧ್ಯಕ್ಷ ಎಂ.ಎಸ್.ಪಾಟೀಲ ನರಿಬೋಳ ಸೇರಿದಂತೆ ಹಲವು ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.