ಬೆಂಗಳೂರು: ಬಿಜೆಪಿ ಜತೆ ಗುರುತಿಸಿಕೊಂಡು ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷರೂ ಆಗಿರುವ ಮುಳಬಾಗಿಲು ಕ್ಷೇತ್ರದ ಪಕ್ಷೇತರ ಶಾಸಕ ಎಚ್. ನಾಗೇಶ್, ಕಡೂರು ಕ್ಷೇತ್ರದ ಮಾಜಿ ಶಾಸಕ ಜೆಡಿಎಸ್‌ನ ವೈ.ಎಸ್.ವಿ. ದತ್ತ ಮತ್ತು ಮೈಸೂರಿನ ಬಿಜೆಪಿ ಮುಖಂಡ, ‘ಮೂಡಾ’ದ ಮಾಜಿ ಅಧ್ಯಕ್ಷ ಮೋಹನ್ ಕುಮಾರ್ ತಮ್ಮ ಬೆಂಬಲಿಗರ ಜೊತೆ ಶನಿವಾರ ಕಾಂಗ್ರೆಸ್ ಸೇರಿದರು.
ಕೆಪಿಸಿಸಿ ಕಚೇರಿಯಲ್ಲಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಎಲ್ಲರಿಗೂ ಪಕ್ಷದ ಬಾವುಟ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್, ‘ಇದು ಆರಂಭ ಮಾತ್ರ. ಇನ್ನು ಮುಂದೆ ಪ್ರತಿ ವಾರ ಬೇರೆ ಬೇರೆ ಪಕ್ಷಗಳ ನಾಯಕರು ಕಾಂಗ್ರೆಸ್‌ಗೆ ಸೇರ್ಪಡೆ ಆಗಲಿದ್ದಾರೆ’ ಎಂದರು.
ವೈ.ಎಸ್.ವಿ. ದತ್ತ ಮಾತನಾಡಿ, ‘ಸರ್ವಾಧಿಕಾರಿ ಶಕ್ತಿಗಳಿಗೆ ಸೋಲಾಗಲಿ ಎಂದು ಯಾವುದೇ ಷರತ್ತು ಇಲ್ಲದೆ ಕಾಂಗ್ರೆಸ್ ಸೇರಿದ್ದೇನೆ. ಮೊದಲಿನಿಂದಲೂ ನಾನು ಎಡಪಂಥಿಯ. ಹೀಗಾಗಿ, ನನಗೆ ಅತ್ಯಂತ ಹತ್ತಿರವಾದ ಕಾಂಗ್ರೆಸ್ ಪಕ್ಷ ಸೇರಿದ್ದೇನೆ’ ಎಂದರು. ‘ಅನಿವಾರ್ಯ ಕಾರಣಗಳಿಂದ ಬಿಜೆಪಿ ಸೇರಿದ್ದೆ. ಪರಿಶಿಷ್ಟ ಜಾತಿ, ಜನಾಂಗಗಳ ರಕ್ಷಣೆ ಕಾಂಗ್ರೆಸ್‌ನಿಂದ ಮಾತ್ರ ಸಾಧ್ಯ ಎಂದು ತಿಳಿದು ಈ ಪಕ್ಷಕ್ಕೆ ಸೇರುತ್ತಿದ್ದೇನೆ’ ಎಂದು ನಾಗೇಶ್ ಹೇಳಿದರು.
*
ಬಿಜೆಪಿ ಸರ್ಕಾರದ ದುರಾಡಳಿತದಿಂದ ರಾಜ್ಯದಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ. ಆಡಳಿತ ಪಕ್ಷದ ಮೇಲೆ ಜನರ ವಿಶ್ವಾಸ ಕಡಿಮೆಯಾಗುತ್ತಿದೆ. ಹೀಗಾಗಿ ಬೇರೆ ಪಕ್ಷಗಳ ನಾಯಕರು ಕಾಂಗ್ರೆಸ್ ಸೇರುತ್ತಿದ್ದಾರೆ.
–ಸಿದ್ದರಾಮಯ್ಯ, ವಿರೋಧ ಪಕ್ಷದ ನಾಯಕ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.