ಬೆಂಗಳೂರು: ‘ವಿಧಾನಮಂಡಲ ಅಧಿವೇಶನದಲ್ಲಿ ಎಲ್ಲ ಇಲಾಖೆಗಳ ಕಾರ್ಯದರ್ಶಿಗಳು, ಮುಖ್ಯಸ್ಥರು ಹಾಜರಿದ್ದು, ಸಚಿವರಿಗೆ ಸಮರ್ಪಕವಾಗಿ ಮಾಹಿತಿ ನೀಡಬೇಕು. ಆಯಾ ಇಲಾಖೆಯ ಸಚಿವರು ಚರ್ಚೆಯ ವಿಷಯಗಳಿಗೆ ಉತ್ತರಿಸಬೇಕು. ಅಗತ್ಯವಿದ್ದರೆ ನಾನು ಮಧ್ಯಪ್ರವೇಶಿಸುತ್ತೇನೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಅಧಿವೇಶನಕ್ಕೆ ಪೂರ್ವಭಾವಿಯಾಗಿ ಇಲಾಖೆಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳ ಸಭೆ ಗೃಹ ಕಚೇರಿ ಕೃಷ್ಣಾದಲ್ಲಿ ಭಾನುವಾರ ನಡೆಸಿದ ಮುಖ್ಯಮಂತ್ರಿ ಈ ಸೂಚನೆ ನೀಡಿದರು.
ವಿವಿಧ ಇಲಾಖೆಗಳಲ್ಲಿ ಚರ್ಚೆಗೆ ಬರುವ ಸಾಧ್ಯತೆ ಇರುವ ವಿಷಯಗಳ ಕುರಿತು ಇಲಾಖೆಗಳ ಕಾರ್ಯದರ್ಶಿಗಳಿಂದ ಮುಖ್ಯಮಂತ್ರಿ ಮಾಹಿತಿ ಪಡೆದರು. ಅಲ್ಲದೆ, ಚರ್ಚೆಯ ಸಾಧ್ಯತೆ ಇರುವ ವಿಷಯಗಳ ಕುರಿತು ದತ್ತಾಂಶಗಳನ್ನು ಸಂಗ್ರಹಿಸಲೂ ಸೂಚನೆ ನೀಡಿದರು.
‘ಇಲಾಖೆಯ ವಿಷಯ ಇದ್ದಾಗ ಕಾರ್ಯದರ್ಶಿಗಳು ಖುದ್ದು ಹಾಜರಿದ್ದು, ಸಚಿವರಿಗೆ ಸಹಕಾರ ನೀಡಬೇಕು. ಅಧೀನ ಅಧಿಕಾರಿಗಳನ್ನಷ್ಟೇ ಕಳುಹಿಸಿ ಗೈರುಹಾಜರಾಗಬಾರದು’ ಎಂದರು.
ಸಭೆಯಲ್ಲಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಮುಖ್ಯಮಂತ್ರಿಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಇತರ ಹಿರಿಯ ಅಧಿಕಾರಿಗಳು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.