ಬೆಂಗಳೂರು: ವಿಧಾನಸಭೆಯಲ್ಲಿ 2022–23ನೇ ಸಾಲಿನ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತೆರಿಗೆ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಹೀಗಾಗಿ ಈ ಬಾರಿ ಯಾವುದೇ ವಸ್ತುಗಳ ಮೇಲಿನ ಬೆಲೆ ಏರಿಕೆಯಾಗದು.
ಕೋವಿಡ್‌ನಿಂದ ಸಂಕಷ್ಟಕ್ಕೆ ಸಿಲುಕಿದ್ದ ರಾಜ್ಯದ ಆರ್ಥಿಕತೆ ಸುಧಾರಣೆಯ ಹಾದಿಯಲ್ಲಿ ಸಾಗುತ್ತಿದೆ. ಜನಸಾಮಾನ್ಯರ ಮೇಲೆ ಹೆಚ್ಚಿನ ಹೊರೆ ಹಾಕಲು ಬಯಸುವುದಿಲ್ಲ. ಹೀಗಾಗಿ ಯಾವುದೇ ತೆರಿಗೆ ದರವನ್ನು ಏರಿಕೆ ಮಾಡುವುದಿಲ್ಲ. ಬದಲಿಗೆ, ತೆರಿಗೆ ಸಂಗ್ರಹ ಇಲಾಖೆಗಳ ದಕ್ಷತೆ ಹೆಚ್ಚಿಸಿ, ಸಂಪನ್ಮೂಲ ಸಂಗ್ರಹದ ಗುರಿ ಸಾಧನೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಇದೇ ಮೊದಲ ಬಾರಿಗೆ ಬಜೆಟ್ ಮಂಡಿಸುತ್ತಿರುವ ಬೊಮ್ಮಾಯಿ ಅವರು,2022–23ನೇ ಸಾಲಿನಲ್ಲಿ ವಾಣಿಜ್ಯ ತೆರಿಗೆ ಇಲಾಖೆಗೆ ₹ 77,010 ಕೋಟಿ, ನೋಂದಣಿ ಮತ್ತು ಮುದ್ರಾಂಕ ಇಲಾಖೆಗೆ ₹ 15,000 ಕೋಟಿ, ಅಬಕಾರಿ ಇಲಾಖೆಗೆ ₹ 29,000 ಕೋಟಿ ಹಾಗೂ ಸಾರಿಗೆ ಇಲಾಖೆಗೆ ₹ 8,007 ಕೋಟಿ ತೆರಿಗೆ ಸಂಗ್ರಹಿಸುವ ಗುರಿ ನಿಗದಿಪಡಿಸಲಾಗಿದೆ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.