ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜುಲೈ 25 ಮತ್ತು26ರಂದು ಎರಡು ದಿನಗಳ ದೆಹಲಿ ಪ್ರವಾಸ ಕೈಗೊಳ್ಳುತ್ತಿದ್ದಾರೆ.
ದೆಹಲಿ ಭೇಟಿ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಜುಲೈ 25ರಂದು (ಸೋಮವಾರ) ನೂತನ ರಾಷ್ಟ್ರಪತಿಗಳ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಲು ವಿವಿಧ ಇಲಾಖೆಗಳ ನಿಯೋಗಗಳೊಂದಿಗೆ ದೆಹಲಿಗೆ ತೆರಳುತ್ತಿದ್ದೇನೆ. ಪಕ್ಷದ ವರಿಷ್ಠರು ಪ್ರಸ್ತಾಪಿಸಿದರೆ ಸಂಪುಟ ವಿಸ್ತರಣೆ ಬಗ್ಗೆಯೂ ಚರ್ಚಿಸುತ್ತೇನೆ’ ಎಂದು ಹೇಳಿದ್ದಾರೆ.
ಇದೇ ವೇಳೆ ಕಸ್ತೂರಿ ರಂಗನ್ ವರದಿ ಕುರಿತು ಚರ್ಚಿಸಲು ನಿಯೋಗದ ನೇತೃತ್ವವನ್ನೂ ನಾನೇ ವಹಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ಬಸವರಾಜ ಬೊಮ್ಮಾಯಿ ಅವರು ಎರಡು ದಿನಗಳ ದೆಹಲಿ ಪ್ರವಾಸ ಕೈಗೊಂಡಿರುವುದು ಬಿಜೆಪಿ ಪಡಸಾಲೆಯಲ್ಲಿ ನಾನಾ ರೀತಿಯ ಚರ್ಚೆಗಳಿಗೆ ಕಾರಣವಾಗಿದೆ.
ಬೊಮ್ಮಾಯಿ ಅವರು ದೆಹಲಿಗೆ ತೆರಳುತ್ತಿರುವುದರಿಂದ ಸಚಿವ ಸ್ಥಾನದ ಆಕಾಂಕ್ಷಿಗಳಲ್ಲಿ ಮತ್ತೆ ಆಸೆ ಗರಿಗೆದರಿದೆ. ಈ ಬಾರಿ ವಿಸ್ತರಣೆ ಅಥವಾ ಪುನರ್‌ರಚನೆ ಎರಡರಲ್ಲಿ ಯಾವುದೋ ಒಂದು ಆಗಿಯೇ ತೀರುತ್ತದೆ ಎಂಬ ವಿಶ್ವಾಸ ಹಲವು ಶಾಸಕರಲ್ಲಿ ಮೂಡಿದೆ.
ಬೊಮ್ಮಾಯಿ ಸಂಪುಟದಲ್ಲಿ ಒಟ್ಟು 5 ಸಚಿವ ಸ್ಥಾನಗಳು ಖಾಲಿ ಇದ್ದು, ವಿಸ್ತರಣೆಗೆ ಹಸಿರು ನಿಶಾನೆ ಸಿಕ್ಕಿದರೆ ಶೀಘ್ರವೇ ಸಂಪುಟ ವಿಸ್ತರಣೆ ಅಥವಾ ಪುನರ್‌ರಚನೆ ಆಗಲಿದೆ ಮೂಲಗಳು ಹೇಳಿವೆ.
ರಾಷ್ಟ್ರಪತಿ ಚುನಾವಣೆ: ಇಂದು ಮತ ಎಣಿಕೆ
ಸಂಸತ್ ಭವನದಲ್ಲಿ ಇಂದು ರಾಷ್ಟ್ರಪತಿ ಚುನಾವಣೆಯ ಮತ ಎಣಿಕೆ ನಡೆಯಲಿದೆ. ಕಳೆದ ಸೋಮವಾರ (ಜುಲೈ 18) ಮತದಾನ ನಡೆದಿತ್ತು.
ಬೆಳಿಗ್ಗೆ 11 ಕ್ಕೆ ಸಂಸತ್ ಭವನದ 63ನೇ ಕೊಠಡಿಯಲ್ಲಿ ಮುಖ್ಯ ಚುನಾವಣಾ ಅಧಿಕಾರಿ ಹಾಗೂ ರಾಜ್ಯಸಭೆಯ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಪಿ.ಸಿ ಮೋದಿ ಅವರು ಮತ ಎಣಿಕೆ ಪ್ರಕ್ರಿಯೆ ಆರಂಭಿಸಲಿದ್ದಾರೆ. ಸಂಜೆ ವೇಳೆಗೆ ಫಲಿತಾಂಶ ಪ್ರಕಟವಾಗಲಿದೆ.
ರಾಷ್ಟ್ರಪತಿ ಚುನಾವಣೆಯಲ್ಲಿ ಶೇ 98.91 ರಷ್ಟು ಮತದಾನ ನಡೆದಿತ್ತು. ಬಿಜೆಪಿ ನೇತೃತ್ವದ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಮತ್ತು ವಿರೋಧ ಪಕ್ಷಗಳ ಅಭ್ಯರ್ಥಿ ಯಶವಂತ್ ಸಿನ್ಹಾ ನಡುವೆ ಸ್ಪರ್ಧೆ ಏರ್ಪಟ್ಟಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.