ಬೆಂಗಳೂರು: ಅತಿವೃಷ್ಟಿಯಿಂದಾಗಿ ರಾಜ್ಯದಲ್ಲಿ ಒಟ್ಟು 25 ಮಂದಿ ಸಾವಿಗೀಡಾಗಿದ್ದು, ಅವರಿಗೆ ಪರಿಹಾರ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಹೇಳಿದ್ದಾರೆ.
ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಹಿಂಗಾರು ಅವಧಿಯಲ್ಲಿ ಅತಿವೃಷ್ಟಿಯಿಂದಾಗಿ ಒಟ್ಟು 25 ಸಾವು ಸಂಭವಿಸಿದ್ದು, ತುರ್ತು ಪರಿಹಾರ ಪಾವತಿಸಲಾಗಿದೆ. ಮಳೆಯಿಂದಾಗಿ 84 ಮನೆಗಳು ಸಂಪೂರ್ಣ ಹಾನಿಗೀಡಾಗಿದ್ದು, 2,077ಮನೆಗಳು ಭಾಗಶಃ ಹಾನಿಗೀಡಾಗಿವೆ. ಪೂರ್ತಿ ಮನೆಗೆ ₹1.20 ಲಕ್ಷ ಪರಿಹಾರ ಹಾಗೂ ಮನೆ ನಿರ್ಮಿಸಿ ಕೊಡಲು ಈಗಾಗಲೇ ಆದೇಶಿಸಲಾಗಿದೆ. ಭಾಗಶಃ ಹಾನಿಗೀಡಾದ ಮನೆಗಳಿಗೆ ಮುಂಗಾರು ಹಂಗಾಮಿನಲ್ಲಿ ಸೂಚಿಸಿರುವಂತೆ ₹50 ಸಾವಿರದವರೆಗೆ ಪರಿಹಾರ ಒದಗಿಸಲು ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.
ಬೆಳೆ ಹಾನಿ ಕುರಿತು ಸ್ಥಳ ಪರಿಶೀಲನೆ ನಡೆಸಿದ ಆಧಾರದಲ್ಲಿ ಪ್ರಾಥಮಿಕ ವರದಿಯನ್ನು ಪಡೆಯಲಾಗಿದೆ. ಅತಿವೃಷ್ಟಿಯಿಂದಾಗಿ ಒಟ್ಟು 74,993 ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಬೆಳೆ ಹಾನಿ, 30,941 ಹೆಕ್ಟೇರ್ ಪ್ರದೇಶದಲ್ಲಿ ತೋಟಗಾರಿಕಾ ಬೆಳೆ ಹಾನಿ ಅಂದಾಜಿಸಲಾಗಿದೆ. ಒಟ್ಟು 1,05,937 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ ಅಂದಾಜಿಸಲಾಗಿದೆ.
ಬೆಳೆ ಹಾನಿಯ ಕುರಿತು ಜಂಟಿ ಸಮೀಕ್ಷೆ ನಡೆಯುತ್ತಿದ್ದು, 3-4 ದಿನಗಳಲ್ಲಿ ಸಮೀಕ್ಷೆ ಕಾರ್ಯ ಪೂರ್ಣಗೊಳ್ಳಲಿದೆ. ಜಂಟಿ ಸಮೀಕ್ಷೆ ಕಾರ್ಯವನ್ನು ಒಂದು ವಾರದ ಒಳಗಾಗಿ ಪೂರ್ಣಗೊಳಿಸಿ ವರದಿಯನ್ನು ಸಲ್ಲಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಮನೆ ಹಾನಿ ಮತ್ತು ಪ್ರಾಣ ಹಾನಿ ಪ್ರಕರಣಗಳಲ್ಲಿ 48 ಗಂಟೆಗಳ ಒಳಗಾಗಿ ಪರಿಹಾರವನ್ನು ಒದಗಿಸಬೇಕು ಎಂದು ಹೇಳಿದ್ದಾರೆ.
ಅತಿವೃಷ್ಟಿ ಪರಿಹಾರ ಕಾರ್ಯಗಳಿಗೆ ಸಾಕಷ್ಟು ಪ್ರಮಾಣದಲ್ಲಿ ಅನುದಾನ ಲಭ್ಯವಿದ್ದು, ಅನುದಾನ ಕೊರತೆ ಇಲ್ಲ. ಜಿಲ್ಲಾಧಿಕಾರಿಗಳ ಖಾತೆಯಲ್ಲಿ ₹ 551.25 ಕೋಟಿ ಹಾಗೂ ತಹಶೀಲ್ದಾರ್ ಅವರ ಖಾತೆಯಲ್ಲಿ ₹ 115.71 ಕೋಟಿ ಸೇರಿದಂತೆ ಒಟ್ಟು ₹ 666.96 ಕೋಟಿ ಹಣ ಲಭ್ಯವಿದೆ ಎಂದೂ ಸಿಎಂ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.