ADVERTISEMENT

ಹೊರಗುತ್ತಿಗೆ ನೌಕರರ ನೇಮಕಾತಿಯಲ್ಲಿ ಮೀಸಲಾತಿ:ಐತಿಹಾಸಿಕ ಹೆಜ್ಜೆ ಎಂದ ಸಿದ್ದರಾಮಯ್ಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 21 ಮೇ 2024, 7:55 IST
Last Updated 21 ಮೇ 2024, 7:55 IST
ಸಿದ್ದರಾಮಯ್ಯ
ಸಿದ್ದರಾಮಯ್ಯ   

ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ನಡೆಸುವ ಹೊರಗುತ್ತಿಗೆ ನೌಕರರ ನೇಮಕಾತಿಯಲ್ಲಿ ಮೀಸಲಾತಿಯನ್ನು ಕಡ್ಡಾಯವಾಗಿ ಪಾಲಿಸುವಂತೆ ಆದೇಶ ಹೊರಡಿಸುವ ಮೂಲಕ ಐತಿಹಾಸಿಕ ಹೆಜ್ಜೆಯಿರಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮೀಸಲಾತಿ ವಿಚಾರ ಪ್ರಸ್ತಾಪಿಸಿ ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿರುವ ಅವರು, ‘ಹೊರಗುತ್ತಿಗೆ ನೇಮಕಾತಿಯಲ್ಲಿ ಸಾಮಾಜಿಕ ನ್ಯಾಯ ಪಾಲನೆಗೆ ಅವಕಾಶ ಕಲ್ಪಿಸುವ ಐತಿಹಾಸಿಕ ಹೆಜ್ಜೆಯಿರಿಸಿದ್ದೇವೆ. ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ನಡೆಸುವ ಹೊರಗುತ್ತಿಗೆ ನೌಕರರ ನೇಮಕಾತಿಯಲ್ಲಿ ಮೀಸಲಾತಿ ಜಾರಿ ಮಾಡಿ ಆದೇಶ ಹೊರಡಿಸಲಾಗಿದೆ. ಸಂಪತ್ತು, ಅಧಿಕಾರ, ಅವಕಾಶಗಳು ಸಮಾನವಾಗಿ ಹಂಚಿಕೆಯಾಗಬೇಕೆಂಬ ಸಮಸಮಾಜದ ಆಶಯವೇ ನಮ್ಮ ಸರ್ಕಾರದ ಆಶಯವಾಗಿದೆ’ ಎಂದು ಬರೆದುಕೊಂಡಿದ್ದಾರೆ.

ಸರ್ಕಾರಿ ಇಲಾಖೆಗಳಲ್ಲಿ ವಿವಿಧ ಹಂತದ ಸಿಬ್ಬಂದಿ ನೇಮಕಾತಿಯನ್ನು ಹೊರಗುತ್ತಿಗೆ ಆಧಾರದಲ್ಲಿ ವಿವಿಧ ಏಜೆನ್ಸಿಗಳ ಮೂಲಕ ನೇಮಕ ಮಾಡಿಕೊಳ್ಳುತ್ತಿರುವ ಕಾರಣ ಮೀಸಲಾತಿ ಸಿಗುತ್ತಿಲ್ಲ. ಏಜೆನ್ಸಿಗಳು ತಮಗೆ ಬೇಕಾದವರಿಗೆ ಉದ್ಯೋಗನೀಡುತ್ತಿರುವುದರಿಂದ ‍ಪರಿಶಿಷ್ಟ ಜಾತಿ, ಪಂಗಡ ಹಾಗೂ ಹಿಂದುಳಿದ ವರ್ಗಕ್ಕೆ ಸೇರಿದ ಸಮುದಾಯದವರು ಉದ್ಯೋಗದಿಂದ ವಂಚಿತರಾಗುತ್ತಿದ್ದಾರೆ. ಇಲ್ಲಿಯೂ ಕಡ್ಡಾಯ ಮೀಸಲಾತಿ ಜಾರಿ ಮಾಡಬೇಕು ಎಂಬ ಹಕ್ಕೊತ್ತಾಯ ಬಹಳಕಾಲದಿಂದ ಇತ್ತು.

ADVERTISEMENT

2023ರ ಡಿಸೆಂಬರ್ 21ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಹೊರಗುತ್ತಿಗೆಯಲ್ಲೂ ಮೀಸಲಾತಿ ನೀತಿಯನ್ನು ಜಾರಿಗೊಳಿಸುವ ಪ್ರಸ್ತಾವನೆಗೆ ಅಂಗೀಕಾರ ನೀಡಲಾಗಿತ್ತು. ಪ್ರಸ್ತುತ ಜಾರಿಯಲ್ಲಿರುವ ಮೀಸಲಾತಿ ನಿಯಮವನ್ನು ಹೊರಗುತ್ತಿಗೆ ನೌಕರರ ನೇಮಕಾತಿಗೂ ಕಡ್ಡಾಯವಾಗಿ ಅನ್ವಯಿಸಬೇಕು. ಅದಕ್ಕೆ ಕೆಲವು ಸೂಚನೆಗಳನ್ನು ಪಾಲನೆ ಮಾಡಬೇಕು ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಸೋಮವಾರ ಹೊರಡಿಸಿದ ಸುತ್ತೋಲೆಯಲ್ಲಿ ನಿರ್ದೇಶನ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.