ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸಿದ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ (ಸಿಇಟಿ) ಪಡೆದ ರ‍್ಯಾಂಕ್ ಆಧಾರದಲ್ಲಿ ಖಾಸಗಿ ವಿಶ್ವವಿದ್ಯಾಲಯಗಳಲ್ಲಿ ಪ್ರವೇಶಕ್ಕೆ ಸೀಟು ಹಂಚಿಕೆ ಇನ್ನೂ ಒಂದು ತಿಂಗಳು ವಿಳಂಬವಾಗುವ ಸಾಧ್ಯತೆ ಇದೆ. ಇದರಿಂದಾಗಿ, ಈ ವಿಶ್ವವಿದ್ಯಾಲಯಗಳಲ್ಲಿ ಪ್ರವೇಶ ಪಡೆಯಲು ಕಾಯುತ್ತಿರುವ ಸಾವಿರಾರು ವಿದ್ಯಾರ್ಥಿಗಳು ಶೈಕ್ಷಣಿಕ ಅವಧಿ ಕಳೆದುಕೊಳ್ಳುವ ಆತಂಕ ಎದುರಿಸುತ್ತಿದ್ದಾರೆ.
ಖಾಸಗಿ ವಿಶ್ವವಿದ್ಯಾಲಯಗಳಲ್ಲಿರುವ ಎಂಜಿನಿಯರಿಂಗ್ ಕೋರ್ಸ್‌ಗಳ ಶೇ 40 ಸೀಟುಗಳ ಹಂಚಿಕೆಯನ್ನು ಸಿಇಟಿ ಮೂಲಕ ರಾಜ್ಯ ಸರ್ಕಾರ ಮಾಡುತ್ತಿದೆ. ಆದರೆ, ಈ ಪ್ರಕ್ರಿಯೆ ಇನ್ನೂ ಆರಂಭ ಆಗಿಲ್ಲ. ಆದರೆ, ಸೆಪ್ಟೆಂಬರ್ ಮೊದಲ ವಾರದಿಂದ ತರಗತಿಗಳನ್ನು ಆರಂಭಿಸಲು ಹಲವು ಖಾಸಗಿ ವಿಶ್ವವಿದ್ಯಾಲಯಗಳು ಉದ್ದೇಶಿಸಿದ್ದು ಈಗಾಗಲೇ ವೇಳಾಪಟ್ಟಿಯನ್ನು ಪ್ರಕಟಿಸಿವೆ.
22 ಖಾಸಗಿ ವಿಶ್ವವಿದ್ಯಾಲಯಗಳ ಪೈಕಿ, 14 ವಿಶ್ವವಿದ್ಯಾಲಯಗಳಲ್ಲಿ ಎಂಜಿನಿಯರಿಂಗ್ ಕೋರ್ಸ್‌ಗಳಿವೆ. ಈ ಕಾಲೇಜುಗಳಿಗೆ ಸಿಇಟಿ ಮೂಲಕ ಆಗಬೇಕಿದ್ದ ಶೇ 40ರಷ್ಟು ಸೀಟುಗಳ ಭರ್ತಿಗೆ ಮೊದಲೇ ಮೊದಲೇ ಇಲ್ಲಿ ಪ್ರಸಕ್ತ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟಿಸಿದ್ದು, ಕೆಲವು ವಿ.ವಿಗಳು ತರಗತಿಗಳನ್ನೂ ಆರಂಭಿಸಿವೆ.
‘ನನ್ನ ಜೊತೆಗಿದ್ದ ಕೆಲವರು ಖಾಸಗಿ ವಿಶ್ವವಿದ್ಯಾಲಯಗಳಲ್ಲಿ, ಅಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ ಬರೆದು ಪ್ರವೇಶ ಗಿಟ್ಟಿಸಿಕೊಂಡಿದ್ದಾರೆ. ಅವರೆಲ್ಲರಿಗೂ ಸೆಪ್ಟೆಂಬರ್ ಮೊದಲ ವಾರದಲ್ಲಿ ತರಗತಿಗಳು ಆರಂಭವಾಗಲಿದೆ. ನಾನು ಕೆಇಎ ರ‍್ಯಾಂಕ್ ಆಧಾರದಲ್ಲಿ ಖಾಸಗಿ ವಿಶ್ವವಿದ್ಯಾಲಯದಲ್ಲಿ ಸೀಟು ಪಡೆಯುವ ನಿರೀಕ್ಷೆ ಹೊಂದಿದ್ದೇನೆ. ಆದರೆ, ಕೆಇಎ ಸೀಟು ಹಂಚಿಕೆ ವಿಳಂಬ ಆಗುತ್ತಿರುವುದರಿಂದ ಪೂರ್ಣ ಶೈಕ್ಷಣಿಕ ಅವಧಿ ಸಿಗುವ ವಿಶ್ವಾಸ ಇಲ್ಲ’ ಎಂದು ವಿದ್ಯಾರ್ಥಿಯೊಬ್ಬರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.