ಬೆಂಗಳೂರು: ಹದಗೆಟ್ಟಿರುವ ಕಾನೂನು ಸುವ್ಯವಸ್ಥೆಯನ್ನು ಸರಿದಾರಿಗೆ ತರಲು ಕ್ರಮ ಕೈಗೊಳ್ಳಬೇಕು. ಗೃಹ ಇಲಾಖೆಯ ಉನ್ನತಾಧಿಕಾರಿಗಳ ಸಭೆ ಕರೆದು ಸೂಕ್ತ ನಿರ್ದೇಶನ ನೀಡಬೇಕು ಎಂದು ಆಗ್ರಹಿಸಿ ಸಂಸದ ಡಿ.ವಿ. ಸದಾನಂದ ಗೌಡ ನೇತೃತ್ವದ ಬಿಜೆಪಿ ನಿಯೋಗ ರಾಜ್ಯ ಪೊಲೀಸ್ ಮುಖ್ಯಸ್ಥ ಅಲೋಕ್ ಮೋಹನ್ ಅವರಿಗೆ ಶನಿವಾರ ಮನವಿ ಪತ್ರ ಸಲ್ಲಿಸಿತು.
ಮಹಿಳೆಯರು, ಶೋಷಿತರ ಮೇಲಿನ ದೌರ್ಜನ್ಯ ಹೆಚ್ಚಾಗಿದೆ. ಕೊಲೆ, ಸುಲಿಗೆಗೆ ಕಡಿವಾಣ ಇಲ್ಲವಾಗಿದೆ. ಕರ್ನಾಟಕ ‘ಅಪರಾಧಗಳ ರಾಜ್ಯ’ ಎಂಬ ಕೆಟ್ಟ ಹೆಸರು ಪಡೆಯುವಂತಾಗಿದೆ. ಕರ್ನಾಟಕವು ಆರ್ಥಿಕ ಅಪರಾಧಗಳಲ್ಲಿ 9ನೇ ಸ್ಥಾನ, ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ 3ನೇ ಸ್ಥಾನದಲ್ಲಿದೆ. ಮಕ್ಕಳ ಮೇಲಿನ ಅಪರಾಧಗಳ ಪ್ರಮಾಣ ಶೇ 46ರಷ್ಟು, ಹಿರಿಯ ನಾಗರಿಕರ ಮೇಲಿನ ಅಪರಾಧ ಪ್ರಕರಣಗಳು ಶೇ 86ರಷ್ಟು ಹೆಚ್ಚಳವಾಗಿರುವುದು ಆತಂಕದ ವಿಚಾರ ಎಂದು ಮನವಿ ಪತ್ರದಲ್ಲಿ ವಿವರಿಸಲಾಗಿದೆ.
ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳವಾದರೂ, ಕೃತ್ಯ ಎಸಗಿದವರ ವಿರುದ್ಧ ಕಠಿಣ ಕ್ರಮ ಕೈಗೊಂಡಿಲ್ಲ. ಲೋಕಸಭಾ ಚುನಾವಣಾ ಸಮಯದಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರ ಸೇರಿದಂತೆ ವಿವಿಧೆಡೆ ಸೋಲಿನ ಭೀತಿಯಿಂದ ಕಾಂಗ್ರೆಸ್ ಪೊಲೀಸರನ್ನು ಬಳಸಿಕೊಂಡಿತ್ತು. ಬಿಜೆಪಿ - ಜೆಡಿಎಸ್ ಕಾರ್ಯಕರ್ತರ ಮೇಲೆ ಹಲ್ಲೆಗಳು ನಡೆದಾಗ ಪ್ರಕರಣಗಳನ್ನೇ ದಾಖಲು ಮಾಡಿಕೊಳ್ಳಲಿಲ್ಲ. ಜೀವ ಬೆದರಿಕೆ ಹಾಕಿದರೂ ಕ್ರಮ ಕೈಗೊಳ್ಳಲಿಲ್ಲ ಎಂದು ದೂರಲಾಗಿದೆ.
ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಮಾಳವಿಕ ಅವಿನಾಶ್, ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣಗೌಡ, ಶಾಸಕ ಸಿ.ಕೆ. ರಾಮಮೂರ್ತಿ, ಬೆಂಗಳೂರು ಉತ್ತರ ಜಿಲ್ಲಾ ಘಟಕದ ಅಧ್ಯಕ್ಷ ಎಸ್. ಹರೀಶ್ ಅವರು ನಿಯೋಗದಲ್ಲಿ ಇದ್ದರು.
ಸಿ.ಎಂ ಅಣತಿಯಂತೆ ಕೆಲಸ: ಸದಾನಂದ ಗೌಡ
ಮುಖ್ಯಮಂತ್ರಿ ಉಪ ಮುಖ್ಯಮಂತ್ರಿ ನಿರ್ದೇಶನದಂತೆ ರಾಜ್ಯದಲ್ಲಿ ಪೊಲೀಸರು ಕೆಲಸ ಮಾಡುತ್ತಿದ್ದಾರೆ ಎಂದು ಸಂಸದ ಡಿ.ವಿ. ಸದಾನಂದಗೌಡ ಆರೋಪಿಸಿದರು. ‘ಮಹಿಳೆಯರು ವಾಯುವಿಹಾರಕ್ಕೆ ಹೋಗಲೂ ಭಯಪಡುವ ಪರಿಸ್ಥಿತಿ ಇದೆ. ಬಾಲಕಿಯನ್ನು ಹತ್ಯೆ ಮಾಡಿದವ ಓಡಿ ಹೋಗಿ ಇನ್ನೊಬ್ಬರ ಮೇಲೆ ಹಲ್ಲೆ ನಡೆಸುತ್ತಾನೆ. ಆರೋಪಿಯನ್ನು ಸಾರ್ವಜನಿಕರು ಹಿಡಿದು ಕೊಡುವಂಥ ಪರಿಸ್ಥಿತಿ ಬಂದಿದೆ. ಪೊಲೀಸರು ಆಡಳಿತ ಪಕ್ಷದ ಏಜೆಂಟರಂತೆ ಕೆಲಸ ಮಾಡುತ್ತಿದ್ದಾರೆ’ ಎಂದು ದೂರಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.