ವಿಧಾನಸಭೆ: ಹುಬ್ಬಳ್ಳಿ– ಧಾರವಾಡ ವಿಮಾನ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣ ಮತ್ತು ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರು ಚೆನ್ನಮ್ಮ ಹೆಸರನ್ನು ನಾಮಕರಣ ಮಾಡುವಂತೆ ಶಿಫಾರಸು ಮಾಡುವ ನಿರ್ಣಯವನ್ನು ವಿಧಾನಮಂಡಲದಲ್ಲಿ ಕೈಗೊಳ್ಳಲಾಗುವುದು ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ ತಿಳಿಸಿದರು.
ಬುಧವಾರ ಶೂನ್ಯ ವೇಳೆಯಲ್ಲಿ ಕಾಂಗ್ರೆಸ್‌ನ ಎನ್.ಎಚ್. ಕೋನರಡ್ಡಿ ಮತ್ತು ಶ್ರೀನಿವಾಸ ಮಾನೆ ಅವರು ಮಾಡಿದ ಪ್ರಸ್ತಾಪಕ್ಕೆ ಉತ್ತರಿಸಿದ ಸಚಿವರು, ‘ವಿಮಾನ ನಿಲ್ದಾಣಗಳಿಗೆ ಹೆಸರು ಇಡುವುದು ಕೇಂದ್ರ ಸರ್ಕಾರದ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯದ ಅಧಿಕಾರ ವ್ಯಾಪ್ತಿಯಲ್ಲಿದೆ. ನಾವು ಶಿಫಾರಸು ಮಾತ್ರ ಮಾಡಬಹುದು. ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ ನಿಲ್ದಾಣಗಳಿಗೆ ನಾಮಕರಣ ಮಾಡುವ ಸಂಬಂಧ ವಿಧಾನಮಂಡಲದಲ್ಲಿ ಪ್ರಸ್ತಾವ ಮಂಡಿಸಿ ನಿರ್ಣಯ ಅಂಗೀಕರಿಸಿ, ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗುವುದು’ ಎಂದರು. ವಿಧಾನಮಂಡಲದಲ್ಲಿ ನಿರ್ಣಯ ಕೈಗೊಳ್ಳುವಂತೆ ಬಿಜೆಪಿಯ ಅರವಿಂದ ಬೆಲ್ಲದ ಅವರೂ ಮನವಿ ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.