ADVERTISEMENT

ಮಹದಾಯಿ: ಸರ್ವಪಕ್ಷ ಸಭೆಗೆ ಶಾಸಕ ಕೋನರಡ್ಡಿ ಮನವಿ

​ಪ್ರಜಾವಾಣಿ ವಾರ್ತೆ
Published 4 ಸೆಪ್ಟೆಂಬರ್ 2024, 15:45 IST
Last Updated 4 ಸೆಪ್ಟೆಂಬರ್ 2024, 15:45 IST
ಎನ್‌.ಎಚ್‌. ಕೋನರಡ್ಡಿ
ಎನ್‌.ಎಚ್‌. ಕೋನರಡ್ಡಿ   

ಬೆಂಗಳೂರು: ‘ಕೇಂದ್ರ ಸರ್ಕಾರದ ವನ್ಯಜೀವಿ ಮಂಡಳಿ ಪ್ರಸ್ತಾವ ತಿರಸ್ಕರಿಸಿರುವುದರಿಂದ ಮಹದಾಯಿ, ಕಳಸಾ-ಬಂಡೂರಿ ಯೋಜನೆ ಕಾಮಗಾರಿ ಆರಂಭಿಸಲು ಅಡ್ಡಿಯಾಗಿದೆ. ಈ ಹಿನ್ನೆಲೆಯಲ್ಲಿ ಸರ್ವಪಕ್ಷ ಸಭೆ ಕರೆಯಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನವಲಗುಂದ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಎನ್.ಎಚ್. ಕೋನರಡ್ಡಿ ಮನವಿ ಮಾಡಿದ್ದಾರೆ.

ಮುಖ್ಯಮಂತ್ರಿಗೆ ಪತ್ರ ಬರೆದಿರುವ ಕೋನರಡ್ಡಿ, ‘ಮಹದಾಯಿ, ಕಳಸಾ-ಬಂಡೂರಿ ಯೋಜನೆ ಜಾರಿ ಮೂಲಕ ಕರ್ನಾಟಕ ರಾಜ್ಯಕ್ಕೆ 13.42 ಟಿಎಂಸಿ ಅಡಿ ನೀರು ಉಪಯೋಗಿಸಲು ಮಹದಾಯಿ ನ್ಯಾಯಮಂಡಳಿ ಐ-ತೀರ್ಪಿನಲ್ಲಿ ಆದೇಶ ನೀಡಿದ ನಂತರ ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಈ ಯೋಜನೆಗೆ ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲ್ಲೂಕಿನ ಅರಣ್ಯ ಪ್ರದೇಶವನ್ನು ಬಳಸಿಕೊಳ್ಳಲು ರಾಜ್ಯ ವನ್ಯಜೀವಿ ಮಂಡಳಿ ಅನುಮೋದನೆ ನೀಡಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿತ್ತು. ಆದರೆ, ರಾಷ್ಟ್ರೀಯ ವನ್ಯಜೀವಿ ಮಂಡಳಿಯು ಈ ಪ್ರಸ್ತಾವವನ್ನು ತಿರಸ್ಕರಿಸಿದೆ’ ಎಂದಿದ್ದಾರೆ.

‘ಉತ್ತರ ಕರ್ನಾಟಕದ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರವೆಂದರೆ ಮಹದಾಯಿ ಯೋಜನೆ. ಅಲ್ಲಿನ ನೀರನ್ನು ಮಲಪ್ರಭಾ ನದಿಗೆ ಸೇರಿಸಿದರೆ ನಾಲ್ಕು ಜಿಲ್ಲೆಗಳ 13 ತಾಲ್ಲೂಕುಗಳಿಗೆ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಸಿಗಲಿದೆ. ಕಾಮಗಾರಿ ಆರಂಭಿಸಲು ಈಗಾಗಲೇ ಟೆಂಡರ್ ಕರೆದು ಕಾರ್ಯಾದೇಶ ನೀಡಲಾಗಿದೆ. ಆದರೆ, ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿ ರಾಷ್ಟ್ರೀಯ ವನ್ಯಜೀವಿ ಮಂಡಳಿಯಿಂದ ಅನುಮತಿ ಪಡೆಯಲು ತಕ್ಷಣ ಸರ್ವಪಕ್ಷದ ಸಭೆ ಕರೆಯಬೇಕು ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.