ADVERTISEMENT

ಬಿಎಸ್‌ವೈ ಬಂಧನಕ್ಕೆ ತಡೆ: ಆದೇಶ ವಿಸ್ತರಣೆ

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2024, 23:30 IST
Last Updated 19 ಸೆಪ್ಟೆಂಬರ್ 2024, 23:30 IST
<div class="paragraphs"><p>ಬಿ.ಎಸ್.ಯಡಿಯೂರಪ್ಪ</p></div>

ಬಿ.ಎಸ್.ಯಡಿಯೂರಪ್ಪ

   

ಬೆಂಗಳೂರು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣದಲ್ಲಿ, ‘ಪೊಲೀಸರು ಅವರನ್ನು ಬಂಧಿಸಬಾರದು ಮತ್ತು ವಿಚಾರಣೆಗಾಗಿ ಅವರ ಖುದ್ದು ಹಾಜರಾತಿಗೆ ವಿನಾಯಿತಿ ನೀಡಲಾಗಿದೆ’ ಎಂಬ ತನ್ನ ಮಧ್ಯಂತರ ಆದೇಶವನ್ನು ಹೈಕೋರ್ಟ್‌ ಪುನಃ ವಿಸ್ತರಿಸಿದೆ.

ಪ್ರಕರಣ ರದ್ದುಪಡಿಸುವಂತೆ ಕೋರಿ ಬಿ.ಎಸ್‌.ಯಡಿಯೂರಪ್ಪ ಸಲ್ಲಿಸಿರುವ ರಿಟ್‌ ಅರ್ಜಿಯನ್ನು, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಪೀಠದಲ್ಲಿದ್ದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಗುರುವಾರ ವಿಚಾರಣೆ ನಡೆಸಿದರು.

ADVERTISEMENT

ವಿಚಾರಣೆ ವೇಳೆ ಹಿರಿಯ ವಕೀಲರೂ ಆದ ಪ್ರಕರಣದ ವಿಶೇಷ ಪ್ರಾಸಿಕ್ಯೂಟರ್ ರವಿವರ್ಮ ಕುಮಾರ್, 'ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ–2012) ಕಲಂ 35ರ ಪ್ರಕಾರ ಅಪರಾಧದ ಆರೋಪವನ್ನು ಪರಿಗಣಿಸಿದ ನಂತರ ಒಂದು ತಿಂಗಳ ಅವಧಿಯಲ್ಲಿ ಸಂತ್ರಸ್ತೆಯ ಹೇಳಿಕೆ ದಾಖಲಿಸಿಕೊಳ್ಳಬೇಕಿದೆ. ಆದ್ದರಿಂದ, ಈ ಹಿಂದೆ ನೀಡಿರುವ ತಡೆ ಆದೇಶ ತೆರವುಗೊಳಿಸಬೇಕು’ ಎಂದು ಮನವಿ ಮಾಡಿದರು.

ಆದರೆ ಇದನ್ನು ಒಪ್ಪದ ನ್ಯಾಯಪೀಠ, ‘ಒಟ್ಟಿಗೇ ಎಲ್ಲವನ್ನೂ ಸೇರಿಸಿ ಗೊಂದಲ ಮಾಡಿಕೊಳ್ಳುವುದು ಬೇಡ. ವಿಚಾರಣೆ ನಡೆಸಿ ಇತ್ಯರ್ಥಪಡಿಸೋಣ’ ಎಂದು ಹೇಳಿ ಇದೇ 27ರ ಮಧ್ಯಾಹ್ನ 2.30ಕ್ಕೆ ವಿಚಾರಣೆ ಮುಂದೂಡಿತು. ಈ ಮೊದಲಿನ ವಿಶೇಷ ಪ್ರಾಸಿಕ್ಯೂಟರ್ ಅಶೋಕ್‌ ಎನ್‌.ನಾಯಕ್ ಅವರೂ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.