ಬೆಂಗಳೂರು: ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಎನ್.ಕೆ.ಲೋಕನಾಥ್ ಅವರ ನೇಮಕಾತಿ ರದ್ದುಪಡಿಸಿದ್ದ ಹೈಕೋರ್ಟ್‌ನ ಏಕಸದಸ್ಯ ನ್ಯಾಯಪೀಠದ ಆದೇಶಕ್ಕೆ ಮುಖ್ಯ ನ್ಯಾಯಮೂರ್ತಿ ನೇತೃತ್ವದ ವಿಭಾಗೀಯ ಪೀಠ ಗುರುವಾರ ತಡೆ ನೀಡಿದೆ.
ಪ್ರೊ. ಎನ್.ಕೆ. ಲೋಕನಾಥ್ ಅವರನ್ನು ನೇಮಕ ಮಾಡಿ ರಾಜ್ಯಪಾಲರು ಹೊರಡಿಸಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್‌ನ ಏಕಸದಸ್ಯ ಪೀಠ ಸೆ. 13ರಂದು ರದ್ದುಪಡಿಸಿತ್ತು. ಲೋಕನಾಥ್ ಅವರನ್ನು 2023ರ ಮಾರ್ಚ್ 23ರಂದು ನೇಮಕ ಮಾಡಿ ರಾಜ್ಯಪಾಲರು ಆದೇಶಿಸಿದ್ದರು. ಇದನ್ನು ರದ್ದುಪಡಿಸುವಂತೆ ಪ್ರೊ. ಶರತ್ ಅನಂತಮೂರ್ತಿ ಮತ್ತು ಡಾ. ಜಿ.ವೆಂಕಟೇಶ್ ಕುಮಾರ್ ರಿಟ್ ಅರ್ಜಿ ಸಲ್ಲಿಸಿದ್ದರು.
ಅರ್ಜಿಯನ್ನು ಮಾನ್ಯ ಮಾಡಿದ್ದ ಏಕಸದಸ್ಯ ಪೀಠ, ನೇಮಕಾತಿ ಆದೇಶವನ್ನು ರದ್ದುಪಡಿಸಿತ್ತು. ಏಕಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ಪ್ರೊ. ಲೋಕನಾಥ್ ಅವರು ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆಯನ್ನು ಗುರುವಾರ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ಹಾಗೂ ನ್ಯಾ. ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠವು ಆದೇಶಕ್ಕೆ ತಡೆ ನೀಡಿದೆ.
ಈ ವಿಷಯವಾಗಿ ಸಲ್ಲಿಕೆಯಾದ ಮೇಲ್ಮನವಿಯ ವಿಚಾರಣೆ ನಡೆಸಿದ ವಿಭಾಗೀಯ ಪೀಠ, ಆದೇಶಕ್ಕೆ ತಡೆ ನೀಡಿದೆ. ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿದ ವಿಭಾಗೀಯ ನ್ಯಾಯಪೀಠ, ಅ. 25ಕ್ಕೆ ವಿಚಾರಣೆಯನ್ನು ಮುಂದೂಡಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.