ADVERTISEMENT

ಬಿಎಸ್‌ವೈ ಬಂಧನ ಬೇಡ: ಹಿಂದಿನ ಮಧ್ಯಂತರ ಆದೇಶವನ್ನು ವಿಸ್ತರಿಸಿದ ಹೈಕೋರ್ಟ್

​ಪ್ರಜಾವಾಣಿ ವಾರ್ತೆ
Published 1 ಆಗಸ್ಟ್ 2024, 13:36 IST
Last Updated 1 ಆಗಸ್ಟ್ 2024, 13:36 IST
<div class="paragraphs"><p>ಬಿಎಸ್‌ವೈ&nbsp;</p></div>

ಬಿಎಸ್‌ವೈ 

   

ಬೆಂಗಳೂರು: ‘ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣದಲ್ಲಿ; ಪೊಲೀಸರು ಅವರನ್ನು ಬಂಧಿಸಬಾರದು ಮತ್ತು ವಿಚಾರಣೆಗಾಗಿ ಅವರ ಖುದ್ದು ಹಾಜರಾತಿಗೆ ವಿನಾಯಿತಿ ನೀಡಲಾಗಿದೆ’ ಎಂಬ ಈ ಹಿಂದಿನ ಮಧ್ಯಂತರ ಆದೇಶವನ್ನು ಹೈಕೋರ್ಟ್ ಪುನಃ ವಿಸ್ತರಿಸಿದೆ.

ಪ್ರಕರಣ ರದ್ದು ಕೋರಿ ಯಡಿಯೂರಪ್ಪ ಅವರು ಸಲ್ಲಿಸಿರುವ ಅರ್ಜಿಯನ್ನು, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಾಲಯದ ನ್ಯಾಯಪೀಠದಲ್ಲಿದ್ದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಗುರುವಾರ ಈ ಕುರಿತಂತೆ ಆದೇಶಿಸಿದರು.

ADVERTISEMENT

ವಿಚಾರಣೆ ವೇಳೆ, ಯಡಿಯೂರಪ್ಪ ಪರ ಹಾಜರಾಗಿದ್ದ ಹಿರಿಯ ವಕೀಲ ಸಿ.ವಿ.ನಾಗೇಶ್‌ ಅವರು, ‘ಪ್ರಕರಣದಲ್ಲಿ ಪ್ರಾಸಿಕ್ಯೂಷನ್‌ ವಿಚಾರಣಾ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದೆ. ಆದ ಕಾರಣ ದೋಷಾರೋಪ ಪಟ್ಟಿಯನ್ನು ಪ್ರಶ್ನಿಸಿದ ತಿದ್ದುಪಡಿ ಅರ್ಜಿ ಸಲ್ಲಿಸಲಾಗುವುದು. ಅದಕ್ಕಾಗಿ ಕಾಲಾವಕಾಶ ಬೇಕು’ ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು.

ಇದಕ್ಕೆ ನ್ಯಾಯಪೀಠ, ರಾಜ್ಯ ಪ್ರಾಸಿಕ್ಯೂಟರ್ ಬಿ.ಎ.ಬೆಳ್ಳಿಯಪ್ಪ ಅವರನ್ನು, ‘ಅರ್ಜಿ ತಿದ್ದುಪಡಿಗೆ ನಿಮ್ಮದೇನೂ ಆಕ್ಷೇಪಣೆ ಇಲ್ಲವೇ’ ಎಂದು ಪ್ರಶ್ನಿಸಿತು. ಇದಕ್ಕೆ ಬೆಳ್ಳಿಯಪ್ಪ, ‘ಆಕ್ಷೇಪಣೆ ಇಲ್ಲ’ ಎಂದರು.

ಇದೇ ವೇಳೆ, ‘ಯಡಿಯೂರಪ್ಪ ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಬೇಕು’ ಎಂದು ಕೋರಿ ಸಂತ್ರಸ್ತೆಯ ಪರ ವಕೀಲ ಬಾಲನ್‌, ‘ವಾದ ಮಂಡಿಸಲು ಕಾಲಾವಕಾಶ ನೀಡಬೇಕು’ ಎಂದು ಕೋರಿದರು. ಈ ಅಂಶ ದಾಖಲಿಸಿಕೊಂಡ ನ್ಯಾಯಪೀಠ ವಿಚಾರಣೆಯನ್ನು ಇದೇ 22ಕ್ಕೆ ಮುಂದೂಡಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.