ADVERTISEMENT

ಮಾಡಾಳ್‌ ವಿರೂಪಾಕ್ಷಪ್ಪ ವಿರುದ್ಧದ ಲಂಚ ಪ್ರಕರಣ ರದ್ದು

​ಪ್ರಜಾವಾಣಿ ವಾರ್ತೆ
Published 20 ಡಿಸೆಂಬರ್ 2023, 19:30 IST
Last Updated 20 ಡಿಸೆಂಬರ್ 2023, 19:30 IST
ಕೆ. ಮಾಡಾಳ್‌ ವಿರೂಪಾಕ್ಷಪ್ಪ
ಕೆ. ಮಾಡಾಳ್‌ ವಿರೂಪಾಕ್ಷಪ್ಪ   

ಬೆಂಗಳೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆಗೆ (ಕೆಎಸ್‌ಡಿಎಲ್) ರಾಸಾಯನಿಕ ತೈಲ ಪೂರೈಸುವ ಗುತ್ತಿಗೆಯ ಕಾರ್ಯಾದೇಶ ನೀಡಲು ಲಂಚಕ್ಕೆ ಬೇಡಿಕೆಯಿಟ್ಟ ಆರೋಪದಡಿ ಚನ್ನಗಿರಿ ಕ್ಷೇತ್ರದ ಮಾಜಿ ಶಾಸಕ ಕೆ.ಮಾಡಾಳ್‌ ವಿರೂಪಾಕ್ಷಪ್ಪ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್‌ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ.

ಪ್ರಕರಣ ರದ್ದುಪಡಿಸುವಂತೆ ಕೋರಿ ಕೆ.ಮಾಡಾಳ್‌ ವಿರೂಪಾಕ್ಷಪ್ಪ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ಪ್ರಕಟಿಸಿದೆ. ಅರ್ಜಿದಾರರ ವಿರುದ್ಧದ ಎಫ್ಐಆರ್‌ ಮತ್ತು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಬಾಕಿಯಿದ್ದ ವಿಚಾರಣೆಯನ್ನು ರದ್ದುಪಡಿಸಿ ಆದೇಶಿಸಿದೆ.

’ತೀರ್ಪಿನಲ್ಲಿ ವ್ಯಕ್ತಪಡಿಸಿರುವ ಅಭಿಪ್ರಾಯಗಳು ವಿರೂಪಾಕ್ಷಪ್ಪನವರ ಪ್ರಕರಣಕ್ಕೆ ಮಾತ್ರವೇ ಅನ್ವಯಿಸಲಿದ್ದು, ಇತರೆ ಆರೋಪಿಗಳ ವಿರುದ್ಧದ ತನಿಖೆ ಮತ್ತು ಯಾವುದೇ ನ್ಯಾಯಾಲಯದಲ್ಲಿನ ವಿಚಾರಣೆ ಮೇಲೆ ಪ್ರಭಾವ ಬೀರುವುದಿಲ್ಲ ಹಾಗೂ ಅನ್ವಯವಾಗುವುದೂ ಇಲ್ಲ. ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ವಿರೂಪಾಕ್ಷಪ್ಪ ಅವರ ಪುತ್ರ ಎಂ.ವಿ.ಪ್ರಶಾಂತ್‌ ಕುಮಾರ್‌ ಮೇಲಿನ ಆರೋಪಗಳಿಗೆ ಸಾಕ್ಷ್ಯ ಇರುವುದು ಮೇಲ್ನೋನೋಟಕ್ಕೆ ಕಂಡುಬರುತ್ತಿದೆ. ಹೀಗಾಗಿ, ಅವರ ವಿರುದ್ಧದ ವಿಚಾರಣೆ ನಡೆಯಬೇಕಿದೆ’ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.

ADVERTISEMENT

‘ಭ್ರಷ್ಟಾಚಾರ ನಿಗ್ರಹ ಕಾಯ್ದೆಯ ಕಲಂ 7ರ ಪ್ರಕಾರ ಪ್ರಯೋಜನೆಗಳನ್ನು ಕಲ್ಪಿಸಲು ಲಂಚಕ್ಕೆ ಬೇಡಿಕೆ ಇಟ್ಟಿರಬೇಕು ಹಾಗೂ ಲಂಚ ಪಡೆದಿರಬೇಕಾಗುತ್ತದೆ. ಆದರೆ, ಅರ್ಜಿದಾರರು ಎರಡನೇ ಆರೋಪಿ ಎಂ.ವಿ. ಪ್ರಶಾಂತ್ ಕುಮಾರ್ ಅವರನ್ನು ಭೇಟಿ ಮಾಡುವಂತೆ ಸೂಚಿಸಿರುವುದನ್ನು ಬಿಟ್ಟರೆ ಅವರ ವಿರುದ್ಧ ಬೇರಾವುದೇ ಆರೋಪ ಇಲ್ಲ. ಪುತ್ರನ ಬಳಿ ದೊರೆತ ಹಣಕ್ಕೆ ಅಪ್ಪನನ್ನು ವಿಚಾರಣೆಗೆ ಒಳಪಡಿಸುವುದು ಸರಿಯಲ್ಲ’ ಎಂದು ನ್ಯಾಯಪೀಠ ಆದೇಶದಲ್ಲಿ ವಿವರಿಸಿದೆ. ಮಾಡಾಳ್‌ ವಿರೂಪಾಕ್ಷಪ್ಪ ಪರ ಹಿರಿಯ ವಕೀಲ ಪ್ರಭುಲಿಂಗ ಕೆ.ನಾವದಗಿ ವಾದ ಮಂಡಿಸಿದ್ದರು.  

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.