ADVERTISEMENT

ವಕ್ಫ್: ತೇಜಸ್ವಿ ಸೂರ್ಯ ವಿರುದ್ಧದ ಎಫ್ಐಆರ್‌ಗೆ ತಡೆ

​ಪ್ರಜಾವಾಣಿ ವಾರ್ತೆ
Published 14 ನವೆಂಬರ್ 2024, 16:33 IST
Last Updated 14 ನವೆಂಬರ್ 2024, 16:33 IST
ತೇಜಸ್ವಿ ಸೂರ್ಯ
ತೇಜಸ್ವಿ ಸೂರ್ಯ   

ಬೆಂಗಳೂರು: ‘ಜಮೀನಿನ ಪಹಣಿಯಲ್ಲಿ ವಕ್ಫ್ ಎಂದು‌ ತೋರಿಸಿದ ಪರಿಣಾಮ ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಹರನಗಿರಿ ರೈತ ಚನ್ನಪ್ಪ‌ ಸಿ.ಬಾಳಿಕಾಯಿ (24) ಅಲಿಯಾಸ್‌ ರುದ್ರಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂಬ ಮಾಹಿತಿಯನ್ನು ಸಾಮಾಜಿಕ ಜಾಲತಾಣದಲ್ಲಿ ಬಿತ್ತರಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಸಂಸದ ಎಲ್.ಎಸ್.ತೇಜಸ್ವಿ ಸೂರ್ಯ ವಿರುದ್ದ ದಾಖಲಿಸಿದ್ದ ಎಫ್ಐಆರ್‌ಗೆ ಹೈಕೋರ್ಟ್ ತಡೆ ನೀಡಿದೆ.

ಈ ಸಂಬಂಧ ಹಾವೇರಿ ಸೆನ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ತೇಜಸ್ವಿ ಸೂರ್ಯ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ತೇಜಸ್ವಿ ಸೂರ್ಯ ಪರ ಹಿರಿಯ ವಕೀಲ ಎಂ.ಅರುಣ್ ಶ್ಯಾಮ್, ‘ಇದು ಪೊಲೀಸರು ದಾಖಲಿಸಿಕೊಂಡಿರುವ ಸ್ವಯಂ ಪ್ರೇರಿತವಾದ ದುರುದ್ದೇಶಪೂರಿತ ಮತ್ತು ಕಾನೂನು ಬಾಹಿರ ದೂರು.
ಪೊಲೀಸರು ಸ್ಪಷ್ಟನೆ ನೀಡಿದ ಬಳಿಕ ಟ್ವೀಟ್‌ ಡಿಲೀಟ್‌ ಮಾಡಲಾಗಿದೆ. ಮೇಲ್ನೋಟಕ್ಕೆ ಇದು ಭಾರತೀಯ ನಾಗರಿಕ ಸಂಹಿತೆ-2023ರ (ಬಿಎನ್‌ಎಸ್‌) ಕಲಂ 353 (2) ಅಡಿ ಅಪರಾಧ ಆಗುವುದಿಲ್ಲ. ಅರ್ಜಿದಾರರು ಜವಾಬ್ದಾರಿಯುತ ಸಂಸದರಾಗಿದ್ದು, ಯಾವುದೇ ಸಮುದಾಯಗಳ ಮಧ್ಯೆ ದ್ವೇಷ ಬಿತ್ತುವ ಕೆಲಸ ಮಾಡಿಲ್ಲ. ಆದ್ದರಿಂದ ಎಫ್ಐಆರ್ ರದ್ದುಗೊಳಿಸಬೇಕು’ ಎಂದು ಮನವಿ ಮಾಡಿದರು.

ADVERTISEMENT

ಇದಕ್ಕೆ ರಾಜ್ಯ ಪ್ರಾಸಿಕ್ಯೂಟರ್ ಬಿ.ಎ.ಬೆಳ್ಳಿಯಪ್ಪ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ ಎಫ್ಐಆರ್ ಗೆ ಮಧ್ಯಂತರ ತಡೆ ನೀಡಿತು. ಅಂತೆಯೇ, ಪ್ರಾಸಿಕ್ಯೂಷನ್‌ಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ ವಿಚಾರಣೆಯನ್ನು ಡಿಸೆಂಬರ್ 4ಕ್ಕೆ ಮುಂದೂಡಿತು. ಅರ್ಜಿದಾರರ ಪರ ಅನಿರುದ್ಧ ಎ.ಕುಲಕರ್ಣಿ ವಕಾಲತ್ತು ವಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.