ಉಡುಪಿ: ಕೋಟ ಶ್ರೀನಿವಾಸ ಪೂಜಾರಿ ಅವರಿಂದ ತೆರವಾದ ವಿಧಾನ ಪರಿಷತ್‌ನ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಉಪಚುನಾವಣೆಯ ಕಾಂಗ್ರೆಸ್ ಟಿಕೆಟ್ ಬಿಲ್ಲವ ಸಮುದಾಯಕ್ಕೆ ಸೇರಿದ ರಾಜು ಪೂಜಾರಿ ಅವರಿಗೆ ದೊರೆತಿದೆ.
ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಸಕ್ರಿಯ ರಾಜಕಾರಣ ಆರಂಭಿಸಿದ್ದ ಬೈಂದೂರಿನ ರಾಜು ಪೂಜಾರಿ, ಮರವಂತೆ ಗ್ರಾಮ ಪಂಚಾಯಿತಿ, ಕುಂದಾಪುರ ತಾಲ್ಲೂಕು ಪಂಚಾಯಿತಿ, ಉಡುಪಿ ಜಿಲ್ಲಾ ಪಂಚಾಯಿತಿ ಸದಸ್ಯರಾಗಿ ಹಾಗೂ ಉಡುಪಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಸದ್ಯ ಕಾಂಗ್ರೆಸ್ ಜಿಲ್ಲಾ ಘಟಕದ ಉಪಾಧ್ಯಕ್ಷರು. ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಹಾಲಿ ನಿರ್ದೇಶಕ.
ಮುಖಂಡರಾದ ಭುಜಂಗ ಶೆಟ್ಟಿ, ಹರಿಪ್ರಸಾದ್ ರೈ, ಡಿ.ಆರ್. ರಾಜು ಮತ್ತು ಉದಯ್ ಕುಮಾರ್ ಶೆಟ್ಟಿ ಮುನಿಯಾಲು ಅವರ ಹೆಸರು ಆಕಾಂಕ್ಷಿಗಳ ಪಟ್ಟಿಯಲ್ಲಿ ಮುಂಚೂಣಿಯಲ್ಲಿತ್ತು. ಬಿಲ್ಲವ ಮತಗಳು ಹೆಚ್ಚು ಇರುವುದರಿಂದ ಈ ಸಮುದಾಯದವರಿಗೇ ಟಿಕೆಟ್ ನೀಡಬೇಕೆಂಬ ಒತ್ತಾಯ ಕಾರ್ಯಕರ್ತರಿಂದ ಕೇಳಿ ಬಂದಿತ್ತು.
ನಾಮಪತ್ರ ಸಲ್ಲಿಕೆಗೆ ಅ.3 ಕೊನೆಯ ದಿನವಾಗಿದ್ದು, ಅ .21ರಂದು ಚುನಾವಣೆ ನಡೆಯಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.