ಹುಬ್ಬಳ್ಳಿ: ‘ಮುಖ್ಯಮಂತ್ರಿ ಸೇರಿದಂತೆ ಇಡೀ ಸರ್ಕಾರ ಬೆಳಗಾವಿಯಲ್ಲಿ ಇದ್ದಾಗಲೇ ಹೊಸವಂಟಮೂರಿಯಲ್ಲಿ ಮಹಿಳೆಯ ವಿವಸ್ತ್ರಗೊಳಿಸುವ ಘಟನೆ ನಡೆದಿರುವುದು ಅಮಾನವೀಯ. ಯಾರಿಗೂ ಭಯ ಇಲ್ಲದಂತಾಗಿದೆ. ತಮ್ಮ ಆಡಳಿತದ ಬಗ್ಗೆ ಮುಖ್ಯಮಂತ್ರಿ ಅವರು ಆತ್ಮಾವಲೋಕನ ಮಾಡಿಕೊಳ್ಳಬೇಕು’ ಎಂದು ಶಾಸಕ ಬಸವರಾಜ ಬೊಮ್ಮಾಯಿ ಸಲಹೆ ನೀಡಿದರು.
ನಗರದಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಮಹಿಳೆ ಮೇಲೆ ದೌರ್ಜನ್ಯ, ಭ್ರೂಣ ಹತ್ಯೆಯಂತಹ ಅಮಾನವೀಯ ಘಟನೆಗಳು ಈಗಲೂ ನಡೆಯುತ್ತಿವೆ. ಇವೆಲ್ಲ ಪ್ರಕರಣಗಳ ತನಿಖೆಯನ್ನು ಸಿಐಡಿಗೆ ಒಪ್ಪಿಸುವುದೊಂದೇ ಪರಿಹಾರವಲ್ಲ’ ಎಂದು ಟೀಕಿಸಿದರು.
ಜನರು ಆರ್ಥಿಕ ಹೊರೆ ಅನುಭವಿಸುತ್ತಿದ್ದಾರೆ. ಮತ್ತೊಂದೆಡೆ ಸಾಮಾಜಿಕವಾಗಿಯೂ ತೊಂದರೆ ಅನುಭವಿಸುತ್ತಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಇಲ್ಲದಂತಾಗಿದೆ. ಅಧಿಕಾರಿಗಳು ಸರ್ಕಾರದ ನಿಯಂತ್ರಣದಲ್ಲಿಲ್ಲ. ಹಣ ಪಡೆದು ಅಧಿಕಾರಿಗಳ ವರ್ಗಾವಣೆ ಮಾಡಿರುವುದರಿಂದ ಅವರ‍್ಯಾರೂ ಸರ್ಕಾರದ ಮಾತು ಕೇಳುತ್ತಿಲ್ಲ ಎಂದು ಆರೋಪಿಸಿದರು.
ಕೋಲಾರ ಘಟನೆಗೆ ಸಂಬಂಧಿಸಿದಂತೆ ಅಧಿಕಾರಿಗಳನ್ನು ಅಮಾನತು ಮಾಡಿರುವುದಾಗಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ನಿಮ್ಮ ಪೌರುಷ ಅಧಿಕಾರಿಗಳನ್ನು ಅಮಾನತು ಮಾಡುವುದರಲ್ಲಿ ಅಲ್ಲ, ದಕ್ಷ ಆಡಳಿತ ನೀಡುವುದರಲ್ಲಿ ತೋರಿಸಿ’ ಎಂದು ಸವಾಲೆಸೆದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.